ಜ.11ರಂದು ಬೆಂಗಳೂರಿಗೆ ರಾಹುಲ್ ಗಾಂಧಿ
ಬೆಂಗಳೂರು, ಡಿ. 30 : ಮುಂಬರುವ ಲೋಕಸಭೆ ಚುನಾವಣೆಯಲ್ಲು ಯುವಕರನ್ನು ಸೆಳೆಯಲು ಕರ್ನಾಟಕ ಕಾಂಗ್ರೆಸ್ ಪಕ್ಷ ಸಕಲ ರೀತಿಯಲ್ಲಿ ಸಜ್ಜಾಗುತ್ತಿದೆ. ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಯುವಕರೊಂದಿಗೆ ಸಂವಾದ ನಡೆಸಲು ಜ.11ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.
ರಾಹುಲ್ ಗಾಂಧಿ ಸಂವಾದ ಕುರಿತು ಮಾಹಿತಿ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಎಐಸಿಸಿಯಿಂದಲೇ ಈ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಜ.11ರಂದು ಬೆಂಗಳೂರಿಗೆ ರಾಹುಲ್ ಗಾಂಧಿ ಆಗಮಿಸಲಿದ್ದಾರೆ ಎಂದು ಹೇಳಿದ್ದಾರೆ.

ನಗರದ ಆಯ್ದ ಯುವಕರೊಂದಿಗೆ ರಾಹುಲ್ ಗಾಂಧಿ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪರಮೇಶ್ವರ್ ಹೇಳಿದ್ದಾರೆ. ಈ ಮೂಲಕ ಬೆಂಗಳೂರಿನ ಐಟಿ-ಬಿಟಿ ಮಂದಿಯ ಮೇಲೆ ಕಾಂಗ್ರೆಸ್ ಕಣ್ಣಿಟ್ಟಿದ್ದು, ಮುಂಬರುವ ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಕಾರ್ಯಕ್ರಮ ಆಯೋಜಿಸಿದೆ. [ಫಾರಿನ್ ಪ್ರವಾಸಕ್ಕೆ ರಾಹುಲ್ ಗಾಂಧಿ ತಡೆ!]
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ ನ.17ರಂದು ಸಮಾವೇಶ ಉದ್ದೇಶಿಸಿ ಮಾತನಾಡುವ ಮೂಲಕ ಯುವಕರಿಗೆ ಸ್ಫೂರ್ತಿ ತುಂಬಿದ್ದಾರೆ. ಆಮ್ ಆದ್ಮಿ ಪಕ್ಷ ಬೆಂಗಳೂರಿನಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದು, ಯುವಕರತ್ತ ಕಣ್ಣಿಟ್ಟಿದೆ. ಆದ್ದರಿಂದ ಕಾಂಗ್ರೆಸ್ ರಾಹುಲ್ ಗಾಂಧಿ ಅವರನ್ನು ಕರೆಸುವ ಮೂಲಕ ಯುವಕರನ್ನು ಸೆಳೆಯುತ್ತಿದೆ. [ಕೆಜೆಪಿ ಕೊನೆ ಸಭೆಯಲ್ಲಿ ಯಡಿಯೂರಪ್ಪ ಹೇಳಿದ್ದೇನು?]
ಅಭ್ಯರ್ಥಿಗಳ ಆಯ್ಕೆಗೆ ದಿನವಿಡೀ ಸಭೆ : ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಭಾನುವಾರ ಕೆಪಿಸಿಸಿ ಕಚೇರಿಯಲ್ಲಿ ದಿನವಿಡೀ ಸಭೆ ನಡೆಸಿದ್ದಾರೆ. ಬೀದರ್, ಗುಲ್ಬರ್ಗ, ಕೊಪ್ಪಳ, ರಾಯಚೂರು, ಬಳ್ಳಾರಿ, ದಕ್ಷಿಣ ಕನ್ನಡ, ಮಂಡ್ಯ, ಹಾಸನ, ಮೈಸೂರು ಹಾಗೂ ಉಡುಪಿ- ಚಿಕ್ಕಮಗಳೂರು ಜಿಲ್ಲೆಗಳ ಜಿಲ್ಲಾಧ್ಯಕ್ಷರು, ಪಕ್ಷದ ಮುಖಂಡರೊಂದಿಗೆ ಉಭಯ ನಾಯಕರು ಮಾತುಕತೆ ನಡೆಸಿದ್ದಾರೆ.
ಪ್ರತಿ ಜಿಲ್ಲೆಯ ನಾಯಕರು 30-35 ನಿಮಿಷಗಳ ಕಾಲ ಕ್ಷೇತ್ರದ ಪರಿಸ್ಥಿತಿಯ ಬಗ್ಗೆ ಸಿಎಂ ಮತ್ತು ಪರಮೇಶ್ವರ್ ಅವರಿಗೆ ವಿವರಣೆ ನೀಡಿದ್ದಾರೆ ಮತ್ತು ಗೌಪ್ಯವಾಗಿ ಜಿಲ್ಲೆಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಸೂಚಿಸಿದ್ದಾರೆ. ಕೆಲವು ಜಿಲ್ಲೆಗಳಲ್ಲಿ ಅನ್ಯ ಪಕ್ಷಗಳ ನಾಯಕರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುವ ಕುರಿತು ಚರ್ಚಿಸಲಾಗಿದೆ. ಒಂದು ಕ್ಷೇತ್ರದಲ್ಲಿ 3ಕ್ಕೂ ಹೆಚ್ಚು ಅಭ್ಯರ್ಥಿಗಳ ಹೆಸರನ್ನು ಪರಿಗಣಿಸಲಾಗಿದ್ದು, ಈ ಪಟ್ಟಿ ರಾಜ್ಯ ನಾಯಕರ ಸಭೆಯ ನಂತರ ಅಂತಿಮಗೊಂಡು ಹೈಕಮಾಂಡ್ ನಾಯಕರನ್ನು ತಲುಪಲಿದೆ.
ಯಡಿಯೂರಪ್ಪ ಅವರಿಂದ ಸಮಸ್ಯೆ ಇಲ್ಲ : ಕೆಜೆಪಿ ಅಧ್ಯಕ್ಷ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಿಜೆಪಿಗೆ ಮರಳಿದರೆ ಯಾವುದೇ ಭಯವಿಲ್ಲ. ಇದರಿಂದ ಬಿಜೆಪಿ ಶಕ್ತಿಯೂ ಹೆಚ್ಚಾಗುವುದಿಲ್ಲ. ಇದರಿಂದ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಪೈಪೋಟಿ ಉಂಟಾಗುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.












Click it and Unblock the Notifications