ಹೊರರಾಜ್ಯದ ವಾಹನಗಳಿಗೆ ತಪಾಸಣೆಯಿಲ್ಲದೆ ಎಫ್‌ಸಿ; ಆರ್‌ಟಿಒ ಅಧಿಕಾರಿ ಅಮಾನತು
ಬೆಂಗಳೂರು: ನಗರದ ವಿವಿಧ ಆರ್‌ಟಿಒ ಕಚೇರಿಗಳಲ್ಲಿ ಯಾವುದೇ ತಪಾಸಣೆ ನಡೆಸದೇ ಹೊರರಾಜ್ಯದ ವಾಹನಗಳಿಗೆ ಎಫ್‌ಸಿ (ಫಿಟ್ನೆಸ್ ಸರ್ಟಿಫಿಕೇಟ್) ನೀಡಲಾಗುತ್ತಿದೆ ಎಂಬ ಗಂಭೀರ ಆರೋಪ ರಾಜ್ಯ ರಾಜಕೀಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಈ ವಿಷಯವನ್ನು ಮುಂದಿಟ್ಟುಕೊಂಡು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಟೀಕೆಗಳನ್ನು ಮಾಡಿದ್ದರು. ಈ ಸಂಬಂಧ ಸಾರಿಗೆ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯಿಸಿದ್ದಾರೆ.
ಈ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ವಾಹನಗಳಿಗೆ ಎಫ್‌ಸಿ ನೀಡುವ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ಅಕ್ರಮ ಅಥವಾ ನಿರ್ಲಕ್ಷ್ಯ ನಡೆದಿದ್ದರೆ ಅದನ್ನು ಸರ್ಕಾರ ಸಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತಪ್ಪು ಮಾಡಿದ ಆರ್‌ಟಿಒ ಅಧಿಕಾರಿಗಳ ವಿರುದ್ಧ ತಕ್ಷಣ ಶಿಸ್ತಿನ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ವಾಹನಗಳ ಎಫ್‌ಸಿ ನೀಡುವಲ್ಲಿ ನಿಯಮ ಉಲ್ಲಂಘನೆ ನಡೆದಿದೆ ಎಂಬುದು ದೃಢಪಟ್ಟಲ್ಲಿ, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಒಬ್ಬ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ" ಎಂದು ಹೇಳಿದ್ದಾರೆ.

ಕ್ರಮಕ್ಕೆ ಸೂಚನೆ
ಸಾರಿಗೆ ಇಲಾಖೆ ನಿಯಮಾನುಸಾರ ಫಿಟ್ನೆಸ್ ಸರ್ಟಿಫಿಕೇಟ್ ನೀಡುವುದು ರಸ್ತೆ ಸುರಕ್ಷತೆ ದೃಷ್ಟಿಯಿಂದ ಅತ್ಯಂತ ಮಹತ್ವದ ವಿಷಯವಾಗಿದ್ದು, ಯಾವುದೇ ತಪಾಸಣೆ ಇಲ್ಲದೆ ಎಫ್‌ಸಿ ನೀಡುವುದು ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟುಮಾಡುತ್ತದೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಆರ್‌ಟಿಒ ಕಚೇರಿಗಳಲ್ಲಿ ಪ್ರಕ್ರಿಯೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಈ ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದ್ದು, ಅಗತ್ಯವಿದ್ದರೆ ಇನ್ನಷ್ಟು ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಇಲಾಖೆ ಮೂಲಗಳು ತಿಳಿಸಿವೆ.
ಗುಜರಾತ್‌ನ 50 ಶಾಲಾ ಬಸ್‌ಗಳಿಗೆ ಎಫ್‌ಸಿ
ಈ ಅಕ್ರಮದ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರಿನ ಕೋರಮಂಗಲ ಆರ್‌ಟಿಒ ಕಚೇರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದ್ದು, ಗುಜರಾತ್‌ನಲ್ಲಿ ಇದ್ದ ಸುಮಾರು 50 ಶಾಲಾ ಬಸ್‌ಗಳಿಗೆ ಕೋರಮಂಗಲ ಆರ್‌ಟಿಒ ಕಚೇರಿಯಿಂದ ಫಿಟ್ನೆಸ್ ಸರ್ಟಿಫಿಕೇಟ್ ನೀಡಲಾಗಿದೆ ಎಂದು ವರದಿ ಉಲ್ಲೇಖಿಸಿ ಆರೋಪ ಮಾಡಿದ್ದಾರೆ.
ಬಸ್ಸುಗಳಲ್ಲಿ ಇರಬೇಕಾದ ಸುರಕ್ಷತಾ ಮಾನದಂಡಗಳಾದ ಸೀಟ್ ಬೆಲ್ಟ್, ತುರ್ತು ನಿರ್ಗಮನ, ಪ್ರಥಮ ಚಿಕಿತ್ಸಾ ಕಿಟ್, ವೇಗ ನಿಯಂತ್ರಕ ಇತ್ಯಾದಿ ಸೇರಿದಂತೆ ಸಂಚರಿಸಲು ಯೋಗ್ಯವಾಗಿದೆಯೇ ಎಂಬುದನ್ನು ಪರಿಶೀಲಿಸದೆ ಎಫ್.ಸಿ ನೀಡಿದ್ದಾರೆ. ಈ ಅಕ್ರಮವನ್ನು ಗುಜರಾತ್ ರಾಜ್ಯದ ಸಾರಿಗೆ ಅಧಿಕಾರಿಗಳೇ ಬಯಲಿಗೆಳೆದಿದ್ದಾರೆ. ಲಂಚದಾಸೆಗೆ ಪ್ರಯಾಣಿಕರ ಸುರಕ್ಷತೆಯನ್ನು ರಾಜಿಮಾಡಿಕೊಳ್ಳುವ ಅಧಿಕಾರಿಗಳನ್ನು ಕೂಡಲೇ ಸೇವೆಯಿಂದ ಅಮಾನತ್ತು ಮಾಡಬೇಕು ಹಾಗೂ ಅವರ ಮೇಲೆ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಬೇಕು. ಸಾರಿಗೆ ಸಚಿವರು ಕೂಡಲೇ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮಕೈಗೊಂಡು, ಬಸ್ಸುಗಳಿಗೆ ಎಫ್.ಸಿ. ನೀಡುವ ನಿಯಮಾವಳಿಗಳನ್ನು ಇನ್ನಷ್ಟು ಬಿಗಿ ಹಾಗೂ ಭ್ರಷ್ಟ ಮುಕ್ತಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.












Click it and Unblock the Notifications