Saalumarada Thimmakka: ಸಾಲುಮರದ ತಿಮ್ಮಕ್ಕ ಆರೋಗ್ಯವಾಗಿದ್ದಾರೆ, ಸುಮ್ನೆ ವದಂತಿ ಹಬ್ಬಿಸಬೇಡಿ: ತಿಮ್ಮಕ್ಕನ ಸಾಕು ಮಗ
ಬೆಂಗಳೂರು, ಅಕ್ಟೋಬರ್, 05: ವೃಕ್ಷಗಳನ್ನು ತಮ್ಮ ಮಕ್ಕಳಂತೆ ಸಾಕಿ ವೃಕ್ಷ ಮಾತೆ ಅಂತಲೇ ಹೆಸರುವಾಸಿಯಾಗಿರುವ ಸಾಲು ಮರದ ತಿಮ್ಮಕ್ಕ ಅವರು ಇತ್ತೀಚೆಗಷ್ಟೇ ಉಸಿರಾಟದ ಸಮಸ್ಯೆ ಹಿನ್ನೆಲೆ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಸಾಮಾಜಿಕ ಜಾಲತಾಣದಲ್ಲಿ ಅವರು ನಿಧನವಾಗಿದ್ದಾರೆ ಎನ್ನುವ ಸುಳ್ಳು ಸುದ್ದಿ ಹಬ್ಬಿದ್ದರು. ಇದೀಗ ಈ ಬಗ್ಗೆ ಸ್ವತಃ ಸಾಕು ಮಗ ಉಮೇಶ್ ಅವರು, ಸಾಲುಮರದ ತಿಮ್ಮಕ್ಕ ಅವರು ಆರೋಗ್ಯವಾಗಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಸಾಲುಮರದ ತಿಮ್ಮಕ್ಕ ಅವರು ನಿಧನವಾಗಿದ್ದಾರೆ ಅನ್ನುವ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಅವರು ಆರೋಗ್ಯವಾಗಿದ್ದು, ಇನ್ನೆರಡು ದಿನದಲ್ಲಿ ಡಿಸ್ಚಾರ್ಜ್ ಮಾಡುವ ಸಾಧ್ಯತೆಯಿದೆ. ದಯವಿಟ್ಟು ಸಾಮಾಜಿಕ ಜಾಲತಾಣದಲ್ಲಿ ಸುಮ್ಮನೆ ವದಂತಿ ಹಬ್ಬಿಸಬೇಡಿ ಎಂದು ತಿಮ್ಮಕ್ಕ ಅವರ ಸಾಕು ಪುತ್ರ ಉಮೇಶ್ ಮನವಿ ಮಾಡಿದ್ದಾರೆ. ಅಲ್ಲದೆ ತಿಮ್ಮಕ್ಕ ತಿಂಡಿ ತಿನ್ನುವ ವಿಡಿಯೋವೊಂದನ್ನು ಉಮೇಶ್ ಅವರು ಹಂಚಿಕೊಂಡಿದ್ದಾರೆ.
ಮೊನ್ನೆಯಷ್ಟೇ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹಾಸನದಿಂದ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ವೈದ್ಯರು ವಿಶೇಷ ವಾರ್ಡ್‌ನಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ.
ಈ ಹಿಂದೆ ಬೆಂಗಳೂರಿನಲ್ಲಿದ್ದ ಸಾಲು ಮರದ ತಿಮ್ಮಕ್ಕ ಅವರು ಇತ್ತೀಚಿಗೆ ಹಾಸನ ಜಿಲ್ಲೆಯ ಬೇಲೂರಿನ ಸಮೀಪದ ಬಳ್ಳೂರಿನಲ್ಲಿ ವಾಸಾಗಿದ್ದರು. ಕಳೆದ ಎರಡು ದಿನಗಳಿಂದ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಉಸಿರಾಟ ಸಮಸ್ಯೆ ಕಾಣಿಸಿಕೊಂಡಿತ್ತು. ಸ್ಥಳೀಯ ಚಿಕಿತ್ಸೆಗಳಿಂದ ಗುಣಮುಖರಾಗದ ಕಾರಣ ಉಸಿರಾಟ ಸಮಸ್ಯೆ ಹೆಚ್ಚಾಗಿದ್ದು, ಕೂಡಲೇ ಅವರನ್ನು ಬಳ್ಳೂರಿನಿಂದ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಸದ್ಯ ವಾತಾವರಣದಲ್ಲಿ ಬದಲಾವಣೆಯಿಂದ ಎಲ್ಲೆಡೆ ಜ್ವರ, ಕೆಮ್ಮು, ನೆಗಡಿ, ಉಸಿರಾಟದ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಲು ಮರದ ತಿಮ್ಮಕ್ಕ ಅವರಿಗೂ ಇದೇ ಕಾರಣಕ್ಕೆ ಆರೋಗ್ಯ ಹದಗೆಟ್ಟಿದೆ ಎನ್ನಲಾಗಿದೆ.
ಕಳೆದ ವಾರ ತಿಮ್ಮಕ್ಕ ಅವರಿಗೆ ಮೈ ಕೈ ನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಬೇಲೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಇನ್ನು ಎರಡು ತಿಂಗಳ ಹಿಂದೆ ಬೆಂಗಳೂರಿನ ಮಂಜುನಾಥ ನಗರದಲ್ಲಿರುವ ನಿವಾಸದಲ್ಲಿ ಕಾಲು ಜಾರಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂದರ್ಭದಲ್ಲಿ ಅವರ ಬೆನ್ನು ಮೂಳೆಗೆ ಪೆಟ್ಟಾಗಿತ್ತು. ಬಳಿಕ ಜಯನಗರ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು.












Click it and Unblock the Notifications