ಸಚಿವ ಈಶ್ವರಪ್ಪ ವಜಾಗೆ ಆಗ್ರಹಿಸಿ ಫೆ.21ರವರೆಗೆ ಅಹೋರಾತ್ರಿ ಧರಣಿ; ಕಾಂಗ್ರೆಸ್
ಬೆಂಗಳೂರು, ಫೆಬ್ರವರಿ 18: ಭವಿಷ್ಯದಲ್ಲಿ ದೆಹಲಿಯ ಕೆಂಪುಕೋಟೆಯ ಮೇಲೆ ರಾಷ್ಟ್ರಧ್ವಜದ ಬದಲಿಗೆ ಕೇಸರಿ ಧ್ವಜ ಹಾರಿಸಲಾಗುವುದು ಎಂಬ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆ ವಿರುದ್ಧ ವಿಧಾನಸಭೆ ಕಲಾಪದಲ್ಲಿ ಗುರುವಾರ ರಾತ್ರಿಯಿಂದಲೂ ಅಹೋರಾತ್ರಿ ಧರಣಿ ನಡೆಸುತ್ತಿರುವ ಕಾಂಗ್ರೆಸ್ ಸದಸ್ಯರು ಇಂದು ಸಹ ಪ್ರತಿಭಟನೆ ಮುಂದುವರೆಸಿದರು.
ಶುಕ್ರವಾರ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯರ ಗದ್ದಲ ಮುಂದುವರೆದ ಕಾರಣ ಕಲಾಪವನ್ನು ಫೆಬ್ರವರಿ 21ಕ್ಕೆ ಮುಂದೂಡಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶ ಹೊರಡಿಸಿದರು.
ಅಹೋರಾತ್ರಿ ಧರಣಿ ಕೈ ಬಿಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮಾಡಿದ ಮನವಿಗೆ ಕಾಂಗ್ರೆಸ್ ನಾಯಕರು ಒಪ್ಪಿಗೆ ನೀಡಿರಲಿಲ್ಲ.

ಇದೀಗ ಕಲಾಪವನ್ನು ಫೆಬ್ರವರಿ 21ಕ್ಕೆ ಮುಂದೂಡಲಾಗಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಸದನದಲ್ಲಿ ಕಾಂಗ್ರೆಸ್ ಪಕ್ಷದಿಂದ ನಡೆಸುತ್ತಿರುವ ಅಹೋರಾತ್ರಿ ಧರಣಿಯನ್ನು ಫೆಬ್ರವರಿ 21ರವರೆಗೂ ಮುಂದುವರೆಸಲು ನಿರ್ಧರಿಸಲಾಗಿದೆ.
ಸಚಿವ ಸಂಪುಟದಿಂದ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಕೈಬಿಡಲು ಆಗ್ರಹಿಸಿ ಮಂಡಿಸಲಾದ ನಿಲುವಳಿ ಸೂಚನೆಯನ್ನು ವಿಧಾನಸಭಾಧ್ಯಕ್ಷರು ತಿರಸ್ಕರಿಸಿದ ಬೆನ್ನಲ್ಲೇ, ಕಾಂಗ್ರೆಸ್ ಮುಖಂಡರು ಸಚಿವ ಈಶ್ವರಪ್ಪ ಅವರ ವಿರುದ್ಧ ಸಿಡಿದೆದ್ದಿದೆ. ಸಚಿವ ಸಂಪುಟದಿಂದ ವಜಾ ಮಾಡುವಂತೆ ಆಗ್ರಹಿಸಿ ಸದನದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಪ್ರತಿಭಟನೆಯನ್ನು ಫೆಬ್ರವರಿ 21ರವರೆಗೆ ಮುಂದುವರೆಸುವ ನಿರ್ಧಾರವನ್ನು ಕಾಂಗ್ರೆಸ್ ಪಕ್ಷವು ಕೈಗೊಂಡಿದೆ.

ಈ ಸಂಬಂಧ ವಿಧಾನಸಭೆಯ ವಿಪಕ್ಷ ಮುಖ್ಯ ಸಚೇತಕ ಅಜಯ್ ಸಿಂಗ್ ಪತ್ರ ಬರೆದಿದ್ದು, ಸಚಿವ ಈಶ್ವರಪ್ಪ ಅವರನ್ನು ವಜಾ ಮಾಡುವಂತೆ ಆಗ್ರಹಿಸಿ ನಡೆಸುತ್ತಿರುವಂತ ಅಹೋರಾತ್ರಿ ಪ್ರತಿಭಟನೆಯನ್ನು ಫೆಬ್ರವರಿ 21ರವರೆಗೆ ಮುಂದುವರೆಸಲಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೇ ಕಾಂಗ್ರೆಸ್ ಪಕ್ಷದ ಸದಸ್ಯರಿಗೆ ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸುವಂತೆ ವಿಪ್ ಕೂಡ ಜಾರಿ ಮಾಡಲಾಗಿದೆ.
ಫೆ.21ರಂದು ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಕಾಂಗ್ರೆಸ್ ಪ್ರತಿಭಟನೆ
ರಾಷ್ಟ್ರಧ್ವಜದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಸಚಿವ ಕೆ.ಎಸ್ ಈಶ್ವರಪ್ಪನವರ ರಾಜೀನಾಮೆಗೆ ಆಗ್ರಹಿಸಿ ಸದನದಲ್ಲಿ ಕಾಂಗ್ರೆಸ್ ಶಾಸಕರು ಪ್ರತಿಭಟನೆ ನಡೆಸುತ್ತಿದ್ದು, ಇದಕ್ಕೆ ಬೆಂಬಲವಾಗಿ ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೂಚಿಸಿದ್ದಾರೆ.
ಪ್ರತಿಭಟನೆಯ ನಂತರ ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರರಿಗೆ ಮತ್ತು ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ನೀಡಬೇಕೆಂದು ತಿಳಿಸಿದ್ದಾರೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ನಿಯೋಜಿಸಿರುವ ಸಂಯೋಜಕರು ಈ ಪ್ರತಿಭಟನೆಯ ನೇತೃತ್ವ ವಹಿಸಬೇಕೆಂದು ಸೂಚಿಸಲಾಗಿದೆ.












Click it and Unblock the Notifications