ಬೊಮ್ಮಾಯಿ ಮನೆ ಮೇಲೆ ಮುತ್ತಿಗೆ- ಕಾಂಗ್ರೆಸ್ ನಾಯಕರ ಬಂಧನ, ರಾಜ್ಯವ್ಯಾಪಿ ಪ್ರತಿಭಟನೆಗೆ ನಿರ್ಧಾರ
ಬೆಂಗಳೂರು ಏಪ್ರಿಲ್ 14: ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣದಲ್ಲಿ ನೈತಿಕ ಹೊಣೆಹೊತ್ತು ಕೆ.ಎಸ್. ಈಶ್ಚರಪ್ಪ ರಾಜೀನಾಮೆಗೆ ಆಗ್ರಹಿಸಿ ಸಿಎಂ ಮನೆಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.
ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ವಿರುದ್ಧ ಲಂಚದ ಆರೋಪ ಹೋರಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರಿಗೆ ನ್ಯಾಯ ನೀಡಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ. ಜೊತೆಗೆ ಕೂಡಲೇ ಸಚಿವ ಕೆಎಸ್ ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಲು ಕೈ ನಾಯಕರು ಮುಂದಾಗಿದ್ದರು. ಈ ವೇಳೆ ಪ್ರತಿಭಟನಾ ನಿರತ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಾಹನದಲ್ಲಿ ಕರೆದೊಯ್ದಿದ್ದಾರೆ. ಪ್ರತಿಭಟನೆ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಮತಿತರ ಕಾಂಗ್ರೆಸ್ ನಾಯಕರನ್ನು ಬಂಧಿಸಲಾಯಿತು.
ಕಾಂಗ್ರೆಸ್ ಭವನದಲ್ಲಿ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಇಂದು ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನ ಆಚರಣೆ ಮಾಡಲಾಗುತ್ತಿದ್ದು, ಇಂದು ಮಧ್ಯಾಹ್ನ 3 ಗಂಟೆಗೆ ಪ್ರದೇಶ ಕಾಂಗ್ರೆಸ್ ವತಿಯಿಂದ ಮಹದೇವಪುರದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪ್ರಜಾಪ್ರಭುತ್ವ, ಸಂವಿಧಾನ, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿಕೊಟ್ಟ ಭ್ರಷ್ಟಾಚಾರ ನಿರ್ಮೂಲನ ಪಾಠ, ಪಕ್ಷ ಹಾಗೂ ದೇಶದ ನೀತಿಗೆ ಅನುಗುಣವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿ, ಮುಖ್ಯಮಂತ್ರಿಗಳ ನಿವಾಸಕ್ಕೆ ಘೆರಾವ್ ಹಾಕಲು ನಿರ್ಧರಿಸಿದ್ದೇವೆ. ಈ ಹೋರಾಟವನ್ನು ದೊಡ್ಡ ಮಟ್ಟದಲ್ಲಿ ಮಾಡಬೇಕಾದ ಅನಿವಾರ್ಯತೆ ಇದ್ದರೂ ಕೋರ್ಟ್ ನಿರ್ಬಂಧವಿದೆ. ಆದರೂ ದೇಶ ಹಾಗೂ ರಾಜ್ಯಕ್ಕೆ ನ್ಯಾಯ ಒದಗಿಸಿ, ಭ್ರಷ್ಟ ಬಿಜೆಪಿ ಸರ್ಕಾರವನ್ನು ಜನರು ಕಿತ್ತೊಗೆಯಬೇಕಿದೆ. ಹೀಗಾಗಿ ಜನರಲ್ಲಿ ಜಾಗೃತಿ ಮೂಡಿಸುವುದು ನಮ್ಮ ಕರ್ತವ್ಯವಾಗಿದೆ ಎಂದಿದ್ದಾರೆ.
ಮುಖ್ಯಮಂತ್ರಿಗಳು ಈ ಎಲ್ಲ ವಿಚಾರದಲ್ಲೂ ಭಾಗಿಯಾಗಿದ್ದಾರೆ ಎಂದು ನಾವು ನೇರ ಆರೋಪ ಮಾಡಬೇಕಾಗಿದೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆ ಇದ್ದರೂ ಈ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಲ್ಲ. ಮೃತನ ಮರಣ ಸಂದೇಶ, ಮೃತನ ಸಹೋದರ, ಪತ್ನಿ, ತಾಯಿ ಎಲ್ಲರೂ ಭ್ರಷ್ಟಾಚಾರ ಕಿರುಕುಳದ ಆರೋಪ ಮಾಡಿದ್ದಾರೆ. ಅಂಗೈ ಉಣ್ಣಿಗೆ ಕನ್ನಡಿ ಬೇಕೇ ಎನ್ನುವಂತೆ ಆರೋಪಿ ಸಚಿವರಿಂದಾಗಿಯೇ ಈ ಪ್ರಕರಣ ನಡೆದಿವೆ. ಹೀಗಾಗಿ ಅವರ ವಿರುದ್ಧ ಭ್ರಷ್ಟಾಚಾರ ಆರೋಪದಡಿ ಪ್ರಕರಣ ದಾಖಲಿಸಿ ಬಂಧಿಸಬೇಕು, ಜತೆಗೆ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಈ ತನಿಖೆ ನಡೆಯಬೇಕು ಎಂದು ಕಾಂಗ್ರೆಸ್ ಪಕ್ಷ ಒತ್ತಾಯಿಸುತ್ತದೆ. ಇಂದು ಮುಖ್ಯಮಂತ್ರಿಗಳ ಮನೆಗೆ ಘೆರಾವ್ ಹಾಕಲಾಗುವುದು, ನಾಳೆಯಿಂದ ರಾಜ್ಯಾದ್ಯಂತ ನಮ್ಮ ಹೋರಾಟ ಮುಂದುವರಿಸಲಾಗುವುದು ಎಂದರು.

ಎಂಟು ತಂಡಗಳಲ್ಲಿ ಪ್ರವಾಸ
ರಾಜ್ಯದಾದ್ಯಂತ ಸಂಚರಿಸಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಸತೀಶ್ ಜಾರಕಿಹೊಳಿ, ಧ್ರುವನಾರಾಯಣ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹಮದ್, ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಎಂಟು ತಂಡಗಳನ್ನು ರಚನೆ ಮಾಡಲಾಗಿದೆ.
ಈ ತಂಡಗಳು ಜಿಲ್ಲೆಗಳಿಗೆ ಭೇಟಿ ನೀಡಿ ಏ.15 ರಿಂದ ಏ.20 ರವರೆಗೆ ಪ್ರತಿಭಟನಾ ಸಭೆಗಳನ್ನು ಹಮ್ಮಿಕೊಳ್ಳಲಿವೆ. ಜೊತೆಗೆ ಗುತ್ತಿಗೆದಾರರ ಸಂಘ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಬರೆದಿರುವ 40% ಕಮಿಷನ್ ಪತ್ರ, ಈಶ್ವರಪ್ಪ ಅವರ ವಿರುದ್ಧ ಡೆತ್‌ನೋಟ್ ಬರೆದಿಟ್ಟು ಮೃತಪಟ್ಟಿರುವ ಗುತ್ತಿಗೆದಾರ ಸಂತೋಷ್ ಹಾಗೂ ಈ ಹಿಂದೆ ಈಶ್ವರಪ್ಪ ವಿರುದ್ಧ ಸಂತೋಷ್ ಮಾಡಿರುವ ಆರೋಪಗಳು, ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಗಳು ಈ ಬಗ್ಗೆ ವಹಿಸಿರುವ ಮೌನದ ಬಗ್ಗೆ ಜನಾಭಿಪ್ರಾಯ ಮೂಡಿಸಲಿದ್ದಾರೆ ಎಂದು ತಿಳಿದುಬಂದಿದೆ.

ಏ. 15 ರಿಂದ 19 ರವರೆಗೆ ಕ್ರಮವಾಗಿ ಹಾವೇರಿ, ಗದಗ, ಬಾಗಲಕೋಟೆ, ಹುಬ್ಬಳ್ಳಿ-ಧಾರವಾಡ ನಗರ, ಧಾರವಾಡ ಗ್ರಾಮೀಣ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ತಂಡವು ಹೋರಾಟ ನಡೆಸಲಿದೆ. ಜೊತೆಗೆ ಏ.15 ರಿಂದ 20ರವರೆಗೆ ಚಾಮರಾಜನಗರ, ಮೈಸೂರು ನಗರ ಮತ್ತು ಗ್ರಾಮಾಂತರ, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಿದ್ದರಾಮಯ್ಯ ನೇತೃತ್ವದ ತಂಡ ಪ್ರವಾಸ ಮಾಡಲಿದೆ. ಇನ್ನೂ ಎಂ.ಬಿ. ಪಾಟೀಲ್ ಅವರ ನೇತೃತ್ವದ ತಂಡ ಏ.15 ರಿಂದ 18ರವರೆಗೆ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆ, ರಾಮಲಿಂಗಾರೆಡ್ಡಿ ನೇತೃತ್ವದ ತಂಡ ಏ.15 ರಿಂದ 18ರವರೆಗೆ ಬಳ್ಳಾರಿ ನಗರ ಮತ್ತು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಭೇಟಿ ನೀಡಲಿದೆ.
ಏ.15 ರಿಂದ 17ರವರೆಗೆ ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ತುಮಕೂರು ಜಿಲ್ಲೆಯಲ್ಲಿ ಸಲೀಂ ಅಹಮದ್ ಅವರ ನೇತೃತ್ವದ ತಂಡ, ಸತೀಶ್ ಜಾರಕಿಹೊಳಿ ಅವರ ತಂಡ ಏ.15 ರಿಂದ 17ರವರೆಗೆ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಆರ್. ಧ್ರುವನಾರಾಯಣ ಅವರ ನೇತೃತ್ವದ ತಂಡ ಏ.15 ರಿಂದ 17ರವರೆಗೆ ಕೊಪ್ಪಳ, ದಾವಣಗೆರೆ, ಶಿವಮೊಗ್ಗ ಜಿಲ್ಲೆ, ಈಶ್ವರಖಂಡ್ರೆ ತಂಡ ಏ.15 ರಿಂದ 17ರವರೆಗೆ ಬೆಳಗಾವಿ ನಗರ ಹಾಗೂ ಗ್ರಾಮಾಂತರ, ಚಿಕ್ಕೋಡಿ, ವಿಜಯಪುರ ಜಿಲ್ಲೆಗಳಲ್ಲಿ ಹೋರಾಟ ನಡೆಸಲಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
Recommended Video
ಇತ್ತ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ನೈತಿಕ ಹೊಣೆ ಹೊತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕರು ತೀವ್ರ ಒತ್ತಾಯ ಮಾಡುತ್ತಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಿಎಂ ಬಸವರಾಜಯ್ ಬೊಮ್ಮಾಯಿ ಅವರು, ಪ್ರಾಥಮಿಕ ವರದಿ ಬರುವವರೆಗೂ ರಾಜೀನಾಮೆ ಇಲ್ಲ ಎಂದು ಪರೋಕ್ಷವಾಗಿ ಹೇಳಿದ್ದಾರೆ.












Click it and Unblock the Notifications