New Airport: ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಿಸಲು ಸರ್ಕಾರ ಪ್ಲಾನ್
ಬೆಂಗಳೂರು, ಜೂನ್ 21: ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ. ಈ ಮಹಾನಗರದ ಭವಿಷ್ಯ ಅಗತ್ಯತೆಗಳ ಸಂಬಂಧ ಇದೀಗ ರಾಜ್ಯ ಸರ್ಕಾರದ ಮುಂದೆ ಬೆಂಗಳೂರು ವ್ಯಾಪ್ತಿಯಲ್ಲೇ ಮತ್ತೊಂದು ವಿಮಾನ ನಿಲ್ದಾಣದ ಪ್ರಸ್ತಾವ ಬಂದಿದೆ.
ಹೌದು ಇಂಥದ್ದೊಂದು ಪ್ರಸ್ತಾವನೆ ಮೂಲಕ ಹಾಲಿ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಇಎ) ನಿರ್ಮಾಣದ ವೇಳೆ ನೀಡಿದ್ದ ಒಪ್ಪಂದ ಇನ್ನೂ ಕೆಲವೇ ವರ್ಷಗಳಲ್ಲಿ ಅಂತ್ಯಗೊಳ್ಳಲಿದೆ. ಸದ್ಯ ಬೆಂಗಳೂರು ಸಮೀಪ ಮತ್ತೊಂದು ವಿಮಾನ ನಿಲ್ದಾಣ ಆಗುವ ಬಗ್ಗೆ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಅವರು ಅಧಿಕಾರಿಗಳೊಂದಿಗೆ ಗುರುವಾರ ಪ್ರಾಥಮಿಕ ಹಂತದ ಚರ್ಚೆ ನಡೆಸಿದರು. ಕೆಲವು ಮಹತ್ವದ ಸೂಚನೆಗಳನ್ನು ಅವರು ನೀಡಿದರು.

KIA 3ನೇ ಅತಿ ದಟ್ಟಣೆಯ ಏರ್ಪೋರ್ಟ್
ಈ ಬಗ್ಗೆ ಮಾಹಿತಿ ನೀಡಿರುವ ಸಚಿವರು, ದೆಹಲಿ ಮತ್ತು ಮುಂಬೈ ನಂತರ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಮೂರನೇ ಅತಿ ದಟ್ಟಣೆಯ ಏರ್ಪೋರ್ಟ್ ಆಗಿದೆ. ಕಳೆದ ಸಾಲಿನಲ್ಲಿ ಇಲ್ಲಿ 37.5 ಮಿಲಿಯನ್ ಪ್ರಯಾಣಿಕರ ಮತ್ತು 4 ಲಕ್ಷ ಟನ್ ಗೂ ಹೆಚ್ಚಿನ ಸರಕು ಸಾಗಣೆ ನಿರ್ವಹಣೆ ಆಗಿದೆ.
ಈ ಒತ್ತಡವನ್ನು ಗಮನದಲ್ಲಿಟ್ಟುಕೊಂಡು ಭವಿಷ್ಯದಲ್ಲಿ ಎರಡನೇ ವಿಮಾನ ನಿಲ್ದಾಣದ ಅಗತ್ಯ ಇದೆ ಎಂದಿದ್ದಾರೆ. ಜೊತೆಗೆ ಇಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ಸಾಧ್ಯಾಸಾಧ್ಯತೆ ವರದಿ ಸಲ್ಲಿಸುವಂತೆ ಸಚಿವರು ಅಧಿಕಾರಿಗಳಿಗೆ ಅವರು ನಿರ್ದೇಶಿಸಿದ್ದಾರೆ.

09 ವರ್ಷದಲ್ಲಿ ಏರ್‌ಪೋರ್ಟ್ ಒಪ್ಪಂದ ಅಂತ್ಯ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವಾಗ ಬಿಐಎಎಲ್ ಸಂಸ್ಥೆ, ಸರ್ಕಾರದ ಜತೆ ಒಪ್ಪಂದ ಮಾಡಿಕೊಂಡು 25 ವರ್ಷಗಳವರೆಗೆ (ಅಂದರೆ 2033)150 ಕಿ.ಮೀ. ವ್ಯಾಪ್ತಿಯಲ್ಲಿ ಇನ್ನೊಂದು ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸುವುದಿಲ್ಲ ಎಂದು ಹೇಳಿತ್ತು. ಈ ಷರತ್ತು ಇನ್ನು 09 ವರ್ಷಗಳಲ್ಲಿ ಮುಗಿಯಲಿದೆ. ಆದ್ದರಿಂದ ಈಗಿನಿಂದಲೇ ನಾವು ಎರಡನೇ ವಿಮಾನ ನಿಲ್ದಾಣದ ಬಗ್ಗೆ ಮುಂದಡಿ ಇಡಬೇಕಾಗಿದೆ ಎಂದು ಅವರು ವಿವರಿಸಿದ್ದಾರೆ.
ಜನ ಸಂಖ್ಯೆ ಹೆಚ್ಚಿದಂತೆ ವಿಮಾನ ಸಾರಿಗೆ ಅವಶ್ಯಕ
ಬೆಂಗಳೂರಿನ ಜನಸಂಖ್ಯೆ ಈಗಾಗಲೇ ಒಂದು ಕೋಟಿ ದಾಟಿದೆ. ಇಲ್ಲಿ ಜಾಗತಿಕ ಮಟ್ಟದ ಕಂಪನಿಗಳಿವೆ. ಸುತ್ತಮುತ್ತಲಿನ ಜಿಲ್ಲೆಗಳ ಜತೆಗೆ ಆಂಧ್ರ ಪ್ರದೇಶದ ಕೆಲವು ಜಿಲ್ಲೆಗಳ ಜನರೂ ಈಗಿರುವ ವಿಮಾನ ನಿಲ್ದಾಣದ ಮೇಲೆ ಅವಲಂಬಿತರಾಗಿದ್ದಾರೆ. 2033ರ ಹೊತ್ತಿಗೆ ಈಗಿನ ವಿಮಾನ ನಿಲ್ದಾಣವು ಪ್ರಯಾಣಿಕರ ನಿರ್ವಹಣೆಯ ತುತ್ತತುದಿ ಮುಟ್ಟಲಿದೆ. ಸರಕು ಸಾಗಣೆ ಪ್ರಮಾಣ ಕೂಡ 2040ರ ಹೊತ್ತಿಗೆ ಈ ಮಟ್ಟ ಮುಟ್ಟಲಿದೆ ಎಂದು ಅವರು ಹೇಳಿದರು.
ಕೈಗಾರಿಕೆ ಬೆಳವಣಿಗೆಗೂ ಪೂರಕ
ಭೂ ಸ್ವಾಧೀನ, ಪರಿಹಾರ ಹಂಚಿಕೆ ಇತ್ಯಾದಿಗಳಿಗೆ ದೀರ್ಘ ಸಮಯ ಹಿಡಿಯುತ್ತದೆ. ಆದ್ದರಿಂದ ನಾವು ಈಗಿನಿಂದಲೇ ಕಾರ್ಯ ಪ್ರವೃತ್ತರಾಗುತ್ತಿದ್ದೇವೆ. ಎರಡನೆಯ ವಿಮಾನ ನಿಲ್ದಾಣ ಅಭಿವೃದ್ಧಿ ಪಡಿಸುವುದರಿಂದ ರಾಜಧಾನಿಯ ಆಚೆಗೂ ಕೈಗಾರಿಕಾ ಬೆಳವಣಿಗೆ ಸಾಧ್ಯವಾಗಲಿದೆ ಎಂದು ಪಾಟೀಲ್ ಮಾಹಿತಿ ನೀಡಿದರು.
ವಿಧಾನಸೌಧ ಸಮಿತಿ ಕೊಠಡಿಯಲ್ಲಿ ನಡೆದ ದೂರಗಾಮಿ ದೃಷ್ಟಿಯುಳ್ಳ ಈ ಸಭೆಯಲ್ಲಿ ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಎನ್. ಮಂಜುಳಾ, ಕರ್ನಾಟಕ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಬಿ.ಸಿ.ಸತೀಶ, ಕಾರ್ಯನಿರ್ವಾಹಕ ನಿರ್ದೇಶಕ ಡಿ.ಪಿ.ಪ್ರಕಾಶ ಮತ್ತಿತರರು ಭಾಗವಹಿಸಿದ್ದರು.
ಮುಂದಿನ ದಿನಗಳಲ್ಲಿ ಕೈಗಾರಿಕೆ ಇಲಾಖೆ ಹಾಗೂ ಸಂಬಂಧಿಸಿದ ಅಧಿಕಾರಿಗಳು ಕಾರ್ಯಯೋಜನೆಗೆ ಸಮಗ್ರ ವರದಿ ತಯಾರಿಸಿ ಸಚಿವರಿಗೆ ನೀಡಲಿದ್ದಾರೆ. ಅದರ ಆಧಾರದಲ್ಲಿ ಯೋಜನೆ ಅನುಷ್ಠಾನ ತೀರ್ಮಾನ ಮಾಡಲಿದ್ದಾರೆ.












Click it and Unblock the Notifications