Bengaluru Rain : ಮಧ್ಯರಾತ್ರಿ ರಾಜಧಾನಿಯಲ್ಲಿ ವರುಣನ ಅಬ್ಬರ
ಮತದಾನದ ದಿನದಂದು ಬಿಡುವು ನೀಡಿದ್ದ ಮಳೆ ಮತ್ತೆ ಅಬ್ಬರಿಸಲು ಶುರು ಮಾಡಿದೆ. ಗುರುವಾರ ರಾತ್ರಿ ಬೆಂಗಳೂರಿನ ಹಲವು ಕಡೆಗಳಲ್ಲಿ ವ್ಯಾಪಕ ಮಳೆಯಾಗಿದೆ. ಬೆಂಗಳೂರು ದಕ್ಷಿಣ ಭಾಗದಲ್ಲಿ ವ್ಯಾಪಕ ಮಳೆಯಾಗಿದ್ದು, ರಸ್ತೆಗಳು ತುಂಬಿ ಹರಿದಿವೆ.
ಜಯನಗರ, ಜೆಪಿ ನಗರ, ಬೊಮ್ಮನಹಳ್ಳಿ, ಬೆಳ್ಳಂದೂರ, ಬಿಟಿಎಂ ಲೇಔಟ್, ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ಉತ್ತಮ ಮಳೆಯಾಗಿದೆ. ಸುಮಾರು 20 ರಿಂದ 30 ನಿಮಿಷಗಳ ಕಾಲ ಗುಡುಗು-ಮಿಂಚು ಸಹಿತ ಮಳೆಯಾಗಿದೆ. ಯಲಹಂತ, ಥಣಿಸಂದ್ರ, ಹೆಬ್ಬಾಳ, ವೈಟ್‌ಫೀಲ್ಡ್, ಹೊರಮಾವು ಭಾಗಗಳಲ್ಲಿ ಕೂಡ 20 ರಿಂದ 30 ನಿಮಿಷಗಳ ಮಳೆ ಸುರಿದಿದೆ.

ನಾಗರಭಾವಿ, ಬನಶಂಕರಿ ಮತ್ತು ವಿಜಯನಗರ ಪ್ರದೇಶಗಳಲ್ಲಿ ಸಾಧಾರಣ ಮಳೆ ಬಿದ್ದಿದೆ. ಪೀಣ್ಯ ಪ್ರದೇಶಲ್ಲಿ ಕೂಡ ಉತ್ತಮ ಮಳೆಯಾದ ಬಗ್ಗೆ ವರದಿಯಾಗಿದೆ. ಲಗ್ಗೆರೆ, ರಾಜಾಜಿನಗರ ಭಾಗದಲ್ಲಿ ಕೂಡ ಉತ್ತಮ ಮಳೆಯಾಗಿದ್ದು, ವಾತಾವರಣ ಫುಲ್ ಕೂಲ್ ಆಗಿದೆ.
ಶುಕ್ರವಾರದಿಂದ ಮುಂದಿನ ಮೂರು ದಿನಗಳ ಮಳೆಯ ಪ್ರಮಾಣ ಕಡಿಮೆಯಾಗಲಿದೆ ಎಂದು ಹೇಳಲಾಗಿದೆ. ಕೆಲವು ಭಾಗಗಳಲ್ಲಿ ಮಾತ್ರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಮೇ 16ರ ನಂತರ ರಾಜಧಾನಿಯಲ್ಲಿ ಬಿಸಿಲಿನ ತಾಪ ಹೆಚ್ಚಾಗುವ ನಿರೀಕ್ಷೆ ಇದೆ. ಸಿಲಿಕಾನ್ ಸಿಟಿಯ ತಾಪಮಾನ ಕನಿಷ್ಠ 22 ಡಿಗ್ರಿ, ಗರಿಷ್ಠ 34 ಡಿಗ್ರಿಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆ
ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಹಲವು ಭಾಗಗಳಲ್ಲಿ ಕೂಡ ಗುರುವಾರ ಸಂಜೆ ಉತ್ತಮ ಮಳೆಯಾದ ಬಗ್ಗೆ ವರದಿಯಾಗಿದೆ. ಕರಾವಳಿ ಭಾಗದ ಮಂಗಳೂರಿನಲ್ಲಿ ಕೂಡ ಗುಡುಗು ಮಿಂಚು ಸಹಿತ ಭಾರಿ ಮಳೆ ಸುರಿದಿದೆ. ಭಾರಿ ಮಳೆಯಿಂದಾಗಿ ಕಾಪುವಿನಲ್ಲಿ ಚಲಿಸುತ್ತಿದ್ದ ರಿಕ್ಷಾ ಮೇಲೆ ಮರ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ, ಹುಳಿಯಾರು, ಕೆಬಿ ಕ್ರಾಸ್‌ನಲ್ಲಿ ಉತ್ತಮ ಮಳೆಯಾಗಿದೆ. ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ಕೋಲಾರ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಗುಡುಗು -ಮಿಂಚು ಸಹಿತ ಉತ್ತಮ ಮಳೆಯಾಗಿದೆ.
ಇನ್ನೂ ಮೂರು ದಿನಗಳ ಕಾಲ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.












Click it and Unblock the Notifications