ಶಕ್ತಿ ಯೋಜನೆಯಿಂದ ಸಾರಿಗೆ ಇಲಾಖೆಗೆ ನಷ್ಟವಿಲ್ಲ: ಸಚಿವ ರಾಮಲಿಂಗಾರೆಡ್ಡಿ
ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ವ್ಯವಸ್ಥೆ ಕಲ್ಪಿಸುವ ಶಕ್ತಿ ಯೋಜನೆ ಜಾರಿಯಾಗಿದೆ. ಮಹಿಳೆಯರು ಕೂಡ ಶಕ್ತಿ ಯೋಜನೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದು, ಉಚಿತ ಬಸ್ ಪ್ರಯಾಣದ ಲಾಭವನ್ನು ಪಡೆಯುತ್ತಿದ್ದಾರೆ.
ಉಚಿತ ಪ್ರಯಾಣದ ಕಾರಣದಿಂದ ಸಾರಿಗೆ ಬಸ್‌ಗಳಲ್ಲಿ ಮಹಿಳೆಯರ ಓಡಾಟ ಹೆಚ್ಚಾಗಿದೆ. ಸದ್ಯ ಉಚಿತ ಪ್ರಯಾಣದಿಂದ ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಪ್ರವಾಸಿಗರ ಸಂಖ್ಯೆ ಕೂಡ ಹೆಚ್ಚಾಗಿದೆ. ಧರ್ಮಸ್ಥಳ, ಮಲೆ ಮಹದೇಶ್ವರ, ಕುಕ್ಕೆ ಸುಬ್ರಹ್ಮಣ್ಯ, ಗೊರವನಹಳ್ಳಿ, ಮೈಸೂರು, ಸೇರಿದಂತೆ ಪ್ರಮುಖ ಪ್ರವಾಸ ಸ್ಥಳಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ, ಆರಂಭದಲ್ಲಿ ಈ ರೀತಿಯ ಪರಿಸ್ಥಿತಿಯಿದ್ದು ಮುಂದಿನ ದಿನಗಳಲ್ಲಿ ಸಹಜ ಸ್ಥಿತಿಗೆ ಬರಲಿದೆ ಎಂದು ನಿರೀಕ್ಷೆ ಮಾಡಲಾಗಿದೆ.

ಇನ್ನು ಉಚಿತ ಬಸ್ ಪ್ರಯಾಣದ ಸೌಲಭ್ಯದಿಂದ ಸಾರಿಗೆ ಇಲಾಖೆಗೆ ಭಾರಿ ನಷ್ಟವಾಗಲಿದೆ ಎಂದು ಹೇಳಲಾಗುತ್ತಿದೆ. ಆದರೆ, ಇದರ ಬಗ್ಗ ಸ್ಪಷ್ಟನೆ ನೀಡಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಶಕ್ತಿ ಯೋಜನೆಯಿಂದ ಸಾರಿಗೆ ಇಲಾಖೆಗೆ ನಷ್ಟವಾಗುವ ಮಾತೇ ಇಲ್ಲ ಎಂದು ಹೇಳಿದ್ದಾರೆ.
ಭಾನುವಾರ ಬಿಟಿಎಂಲೇಔಟ್, ಜಯನಗರ ಕ್ಷೇತ್ರದ ಮತದಾರರಿಗೆ ಬನ್ನೇರುಘಟ್ಟ ರಸ್ತೆಯಲ್ಲಿರುವ ಸಕಲವಾರ ವೇರ್ ಹೌಸ್ನಲ್ಲಿ ಔತಣಕೂಟ ಏರ್ಪಡಿಸಲಾಗಿತ್ತು, ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಹಿಳೆಯರ ಪ್ರಯಾಣದ ಹಣವನ್ನು ಸರ್ಕಾರ ಭರಿಸುತ್ತದೆ ಇದರಲ್ಲಿ ಸಾರಿಗೆ ಇಲಾಖೆಗೆ ನಷ್ಟವಾಗುವುದಿಲ್ಲ ಎಂದು ಹೇಳಿದೆ.
ಬಸ್ ಪ್ರಯಾಣ ಹೆಚ್ಚಿಸುತ್ತೆವೆ ಎಂದ ಸಚಿವ
ಉಚಿತ ಪ್ರಯಾಣ ಎನ್ನುವ ಕಾರಣಕ್ಕೆ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಿದೆ. ಪುಣ್ಯ ಕ್ಷೇತ್ರಗಳು, ದೇವಸ್ಥಾನಗಳಿಗೆ ಭೇಟಿ ನೀಡುವವರ ಸಂಖ್ಯೆ ಕೂಡ ಹೆಚ್ಚಾಗಿದೆ. ಇನ್ನೊಂದು ತಿಂಗಳಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬರಲಿದೆ, ಒಂದು ವೇಳೆ ಪ್ರಯಾಣಿಕರ ಸಂಖ್ಯೆ ಹೆಚ್ಚಾದರೆ, ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು ಎಂದು ಹೇಳಿದ್ದಾರೆ.

ಮಹಿಳೆಯರಿಗೆ ಉಚಿತ ಪ್ರಯಾಣ ಇದ್ದರೂ, ಲಗೇಜ್ ವಿಚಾರದಲ್ಲಿ ಗೊಂದಲ ಆಗುತ್ತಿರುವ ಬಗ್ಗೆ ಮಾತನಾಡಿದ ಅವರು, ಆರಂಭದಲ್ಲಿ ಈ ತರಹದ ಗೊಂದಲಗಳಾಗುವುದು ಸಹಜ, ಮುಂದಿನ ದಿನಗಳಲ್ಲಿ ಎಲ್ಲ ಸಮಸ್ಯೆಗಳನ್ನು ಸರಿಪಡಿಸಲಾಗುವುದು ಎಂದು ಹೇಳಿದರು.
ಮತದಾರರಿಗೆ ಭರ್ಜರಿ ಬಾಡೂಟ
ಬಿಟಿಎಂ ಲೇಔಟ್ ಮತ್ತು ಜಯನಗರ ವಿಧಾನಸಭಾ ಕ್ಷೇತ್ರದ ಮತದಾರರಿಗೆ ಸಚಿವ ರಾಮಲಿಂಗಾರೆಡ್ಡಿ ಮತ್ತು ಮಾಜಿ ಶಾಸಕಿ ಸೌಮ್ಯ ರೆಡ್ಡಿ ಅವರಿಂದ ಊಟದ ವ್ಯವಸ್ಥೆ ಮಾಡಲಾಗಿತ್ತು. ಸಾವಿರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಔತಣಕೂಟದಲ್ಲಿ ಭಾಗವಹಿಸಿದ್ದರು. ಮಟನ್ ಬಿರಿಯಾನಿ, ಚಿಕನ್, ರಾಗಿಮುದ್ದೆ, ತಟ್ಟೆ ಇಡ್ಲಿ, ಪಾಯಸ, ಮೈಸೂರು ಪಾಕ್ ಸವಿದು ಸಂಭ್ರಮಿಸಿದರು. ಮಾಜಿ ಸಿಎಂ ವೀರಪ್ಪ ಮೊಯ್ಲಿ, H.M.ರೇವಣ್ಣ ಸೇರಿ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.












Click it and Unblock the Notifications