Shivaraj Kumar: ಕಾವೇರಿ ವಿವಾದದ ಬಗ್ಗೆ ಶಿವರಾಜ್ ಕುಮಾರ್ ಏನಂದ್ರು?
ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 5000 ಕ್ಯೂಸೆಕ್ಸ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹೇಳಿದ್ದು, ರಾಜ್ಯಕ್ಕೆ ತೀವ್ರ ಸಂಕಷ್ಟ ಎದುರಾಗಿದೆ. ಮೈಸೂರು, ಮಂಡ್ಯ, ಬೆಂಗಳೂರು ಜಿಲ್ಲೆಗಳಿಗೆ ಕುಡಿಯುವ ನೀರಿಗೂ ಸಂಕಷ್ಟ ಎದುರಾಗುವ ಆತಂಕ ಇದೆ.
ತಮಿಳುನಾಡಿಗೆ ನೀರು ಹರಿಸದಂತೆ ವಿವಿಧ ಸಂಘಟನೆಗಳು, ಪಕ್ಷಗಳು ಹೋರಾಟ ನಡೆಸುತ್ತಿವೆ. ಈ ಹೋರಾಟಕ್ಕೆ ಚಿತ್ರರಂಗ ಕೂಡ ಕೈಜೋಡಿಸಬೇಕು ಎಂದು ಹಲವು ಕನ್ನಡಪರ ಸಂಘಟನೆಗಳು ಹೋರಾಟ ಮಾಡಿದ ಬೆನ್ನಲ್ಲೇ ಕನ್ನಡ ಚಿತ್ರರಂಗದ ಪ್ರಮುಖ ನಟರು ಟ್ವೀಟ್ ಮಾಡುವ ತಮ್ಮ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ನಟ ಸುದೀಪ್ ಟ್ವೀಟ್ ಮಾಡುವ ಮೂಲಕ ಕಾವೇರಿ ವಿವಾದವನ್ನು ಬಗೆಹರಿಸುವಂತೆ ಮನವಿ ಮಾಡಿದ್ದಾರೆ. ಈಗ ಹಿರಿಯ ನಟ ಶಿವರಾಜ್ ಕುಮಾರ್ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ.
ಶಿವರಾಜ್‌ಕುಮಾರ್ ಹೇಳಿದ್ದೇನು?
"ರೈತ ದೇಶದ ಬೆನ್ನೆಲುಬು ಅಂತಾರೆ ಆ ರೈತನ ಬೆನ್ನೆಲುಬು ನಮ್ಮ ಕಾವೇರಿ. ರಾಜ್ಯದಲ್ಲಿ ಈ ಸರಿ ಮಳೆಯ ಅಭಾವವಿದು ರೈತ ಆಗಲೇ ಸಂಕಷ್ಟದಲ್ಲಿದಾನೆ. ಎರಡು ರಾಜ್ಯದ ನಾಯಕರು ಹಾಗು ನ್ಯಾಯಾಲಯ ಎಲ್ಲ ಅಂಶಗಳನ್ನು ಪರಿಶೀಲಿಸಿ ಒಂದು ಸಮಾಧಾನಕರ ಪರಿಹಾರ ಕಂಡುಕೊಳ್ಳಬೇಕು ಅನ್ನೋದು ನನ್ನ ಪ್ರಾರ್ಥನೆ." ಎಂದು ವಿಡಿಯೋ ಮೂಲಕ ಮನವಿ ಮಾಡಿದ್ದಾರೆ.
ರೈತ ದೇಶದ ಬೆನ್ನೆಲುಬು ಅಂತಾರೆ ಆ ರೈತನ ಬೆನ್ನೆಲುಬು ನಮ್ಮ ಕಾವೇರಿ. ರಾಜ್ಯದಲ್ಲಿ ಈ ಸರಿ ಮಳೆಯ ಅಭಾವವಿದು ರೈತ ಆಗಲೇ ಸಂಕಷ್ಟದಲ್ಲಿದಾನೆ. ಎರಡು ರಾಜ್ಯದ ನಾಯಕರು ಹಾಗು ನ್ಯಾಯಾಲಯ ಎಲ್ಲ ಅಂಶಗಳನ್ನು ಪರಿಶೀಲಿಸಿ ಒಂದು ಸಮಾಧಾನಕರ ಪರಿಹಾರ ಕಂಡುಕೊಳ್ಳಬೇಕು ಅನ್ನೋದು ನನ್ನ ಪ್ರಾರ್ಥನೆ. pic.twitter.com/FcLbCG0yxi
— DrShivaRajkumar (@NimmaShivanna) September 20, 2023
ದರ್ಶನ್, ಸುದೀಪ್ ಬೆಂಬಲ
"ಸ್ನೇಹಿತರೆ, ನಮ್ಮ ಕಾವೇರಿ ನಮ್ಮ ಹಕ್ಕು . ಅಷ್ಟು ಒಮ್ಮತದಿಂದ ಗೆಲ್ಲಿಸಿರುವ ಸರ್ಕಾರ ಕಾವೇರಿಯನ್ನೇ ನಂಬಿರುವ ಜನರನ್ನು ಕೈಬಿಡುವುದಿಲ್ಲ ಎಂದು ನಾನು ನಂಬಿದ್ದೇನೆ. ಈ ಕೂಡಲೇ ತಜ್ಞರು ಕಾರ್ಯತಂತ್ರ ರೂಪಿಸಿ ನ್ಯಾಯ ನೀಡಲಿ ಎಂದು ಒತ್ತಾಯಿಸುತ್ತೇನೆ. ನೆಲ - ಜಲ - ಭಾಷೆಯ ಹೋರಾಟದಲ್ಲಿ ನನ್ನ ಧ್ವನಿಯೂ ಇದೆ. ಕಾವೇರಿ ತಾಯಿ ಕರುನಾಡನ್ನು ಕಾಪಾಡಲಿ." ಎಂದು ಹಿರಿಯ ನಟ ಸುದೀಪ್ ಟ್ವೀಟ್ ಮಾಡಿದ್ದಾರೆ.
ಕಾವೇರಿ ವಿವಾದಕ್ಕೆ ಸಂಬಂಧಪಟ್ಟಂತೆ ಟ್ವೀಟ್ ಮಾಡಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್, "ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆದು ಬಂದಿದೆ. ಈ ವರ್ಷ ನೀರಿನ ಅಭಾವ ರಾಜ್ಯದಲ್ಲಿ ಸಾಕಷ್ಟಿದೆ. ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ ಹಾನಿಯಾಗುವ ಸಾಧ್ಯತೆ ಬಹಳಷ್ಟು ಇರುವ ಕಾರಣ ಎಲ್ಲಾ ಅಂಕಿ-ಅಂಶಗಳನ್ನು ಪರಿಗಣಿಸಿ ಆದಷ್ಟು ಬೇಗ ನ್ಯಾಯ ಸಿಗುವಂತಾಗಲಿ." ಎಂದು ಹೇಳಿದ್ದಾರೆ.












Click it and Unblock the Notifications