ಗುಜರಾತ್ ವ್ಯಾಪಾರಿಗಳ ಕಣ್ಣು ನಮ್ಮ ಕೆಎಂಎಫ್ ಮೇಲೆ ಬಿದ್ದು, ರಾಜ್ಯದ ಹೈನು ಉದ್ಯಮಕ್ಕೆ ಗರ ಬಡಿದಿದೆ: ಸಿದ್ದರಾಮಯ್ಯ
ಕೇಂದ್ರದ ಮೋದಿ ಸರ್ಕಾರ ಆಸ್ಟ್ರೇಲಿಯ ಮತ್ತು ನ್ಯೂಜಿಲ್ಯಾಂಡ್‌ಗಳಿಂದ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳಲು ತಯಾರಿ ನಡೆಸಿತ್ತು.
ಬೆಂಗಳೂರು, ಮಾರ್ಚ್ 08: 'ಗುಜರಾತ್ ಮೂಲದ ರಾಜಕಾರಣಿಗಳು ಮತ್ತು ವ್ಯಾಪಾರಿಗಳ ಕಣ್ಣು ನಮ್ಮ ಕೆಎಂಎಫ್ ಮೇಲೆ ಬಿದ್ದಾಗಿನಿಂದ ರಾಜ್ಯದ ಹೈನು ಉದ್ಯಮಕ್ಕೆ ಗರ ಬಡಿದಂತಾಗಿದೆ. ರಾಜ್ಯದ ಹಾಲು ಉತ್ಪಾದಕ ರೈತರು ಹಾಗೂ ಗ್ರಾಹಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಭ್ರಷ್ಟ ಬಿಜೆಪಿಯೆ ನೇರ ಕಾರಣ' ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
'ರಾಜ್ಯದ ಪ್ರಮುಖ ದಿನ ಪತ್ರಿಕೆಗಳು ಇಂದು ಹಾಲು ಮತ್ತು ಹಾಲಿನ ಉತ್ಪನ್ನಗಳ ಕುರಿತಂತೆ ಅತ್ಯಂತ ಆತಂಕಕಾರಿಯಾದ ವರದಿಗಳನ್ನು ಪ್ರಕಟಿಸಿವೆ. ಈ ಮಾರ್ಚ್‌ನಲ್ಲಿ ಪ್ರತಿ ದಿನ 99 ಲಕ್ಷ ಲೀಟರುಗಳಷ್ಟು ಹಾಲು ಸಂಗ್ರಹವಾಗಬೇಕಾಗಿದ್ದ ಕಡೆ ಕೇವಲ 71 ಲಕ್ಷ ಲೀಟರುಗಳಷ್ಟು ಹಾಲನ್ನು ಮಾತ್ರ ಕೆಎಂಎಫ್ ಸಂಗ್ರಹಿಸುತ್ತಿದೆ. ಇದೂ ಕೂಡ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಪ್ರಸ್ತುತ ಪ್ರತಿ ದಿನ ಸುಮಾರು 28 ಲಕ್ಷ ಲೀಟರುಗಳಷ್ಟು ಹಾಲಿನ ಉತ್ಪಾದನೆ ಕಡಿಮೆಯಾಗಿದೆ" ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ.

ರಾಜ್ಯದಲ್ಲಿ ವ್ಯಾಪಾಕವಾಗಿ ನಡೆಯುತ್ತಿರುವ ಹಸುಗಳ ಮಾರಾಟ
" ರಾಜ್ಯದ ಪಶುಪಾಲಕರಿಗೆ ಪ್ರತಿ ದಿನ ಸುಮಾರು 11 ಕೋಟಿ ರೂಪಾಯಿಗಳಷ್ಟು ಹಣ ಕೈತಪ್ಪಿ ಹೋಗುತ್ತಿದೆ. ಗ್ರಾಮೀಣ ಭಾಗದ ಮಹಿಳೆಯರು ತಮ್ಮ ಸಂಸಾರಗಳನ್ನು ನಡೆಸಲು ಹೈನುಗಾರಿಕೆ ಒಂದು ಪ್ರಮುಖ ಸಾಧನವಾಗಿತ್ತು. ಇದಕ್ಕೆ ಯಾರು ಹೊಣೆ..?. ಕೇಂದ್ರ ಮತ್ತು ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿರುವ ನರೇಂದ್ರ ಮೋದಿ ಮತ್ತು ಬಸವರಾಜ ಬೊಮ್ಮಾಯಿಯವರ ನೇತೃತ್ವದ ಬಿಜೆಪಿ ಸರ್ಕಾರಗಳ ಹಾದಿ ತಪ್ಪಿದ ಅಡ್ಡ ಕಸುಬಿ ನೀತಿಗಳೆ ನೇರ ಕಾರಣ. ಪತ್ರಿಕೆಗಳು ವರದಿ ಮಾಡಿರುವಂತೆ ರಾಜ್ಯದ ರೈತರು ಹಸುಗಳನ್ನು ವ್ಯಾಪಕವಾಗಿ ಮಾರಾಟ ಮಾಡುತ್ತಿದ್ದಾರೆ. ಜೊತೆಗೆ ಚರ್ಮಗಂಟು ಕಾಯಿಲೆ ಕೂಡ ಲಕ್ಷಾಂತರ ಜಾನುವಾರುಗಳನ್ನು ರೋಗಗ್ರಸ್ತವಾಗುವಂತೆ ಮಾಡಿದೆ. ಸುಮಾರು 32000 ಜಾನುವಾರುಗಳು ಈ ರೋಗದಿಂದ ಮರಣ ಹೊಂದಿವೆ" ಎಂದು ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ.
ಗುಜರಾತ್ ಮೂಲದ ರಾಜಕಾರಣಿಗಳು ಮತ್ತು ವ್ಯಾಪಾರಿಗಳ ಕಣ್ಣು ನಮ್ಮ ಕೆಎಂಎಫ್ ಮೇಲೆ ಬಿದ್ದಾಗಿನಿಂದ ರಾಜ್ಯದ ಹೈನು ಉದ್ಯಮಕ್ಕೆ ಗರ ಬಡಿದಂತಾಗಿದೆ. ಇವರಿಂದಾಗಿ ರಾಜ್ಯದ ರೈತರಿಗೂ ಸಂಕಷ್ಟ ಬಂದೊದಗಿದೆ. ಕೊಳ್ಳುವ ಗ್ರಾಹಕರೂ ವಿಪರೀತ ಸಂಕಷ್ಟ ಅನುಭವಿಸುತ್ತಿದ್ದಾರೆ. ನಂದಿನಿ ಮಳಿಗೆಗಳಲ್ಲಿ ಕಲಬೆರಕೆ ತುಪ್ಪವೂ ಸೇರಿದಂತೆ ಅನೇಕ ಸಮಸ್ಯೆಗಳ ಬಗ್ಗೆ ಜನರು ದೂರುತ್ತಿದ್ದಾರೆ. ಜನರಿಗೆ ಉತ್ತಮ ನಂದಿನಿ ತುಪ್ಪ ಸೇರಿದಂತೆ ಗುಣಮಟ್ಟದ ಪದಾರ್ಥಗಳು ಸಿಗುತ್ತಿಲ್ಲ. ಕೊಳ್ಳುವ ಗ್ರಾಹಕರ ಕೈ ಸುಡುವಷ್ಟು ಮಟ್ಟಿಗೆ ಬೆಲೆಗಳು ಏರಿಕೆಯಾಗಿವೆ ಎಂದಿದ್ದಾರೆ.

ಗೋಶಾಲೆಗಳಲ್ಲಿ ಗಂಡು ಕರುಗಳ ಪ್ರಮಾಣ ಶೇ.10 ಕ್ಕಿಂತ ಕಡಿಮೆ!
ಬಿಜೆಪಿಯ ದುಷ್ಟ ಆಡಳಿತದಿಂದಾಗಿ ನಮ್ಮ ನಾಡಿನ ಪ್ರತಿಷ್ಠಿತ ಸಂಸ್ಥೆಯಾದ ಕೆಂಎಂಎಫ್‍ಗೆ ಇಂದು ಈ ಗಂಡಾಂತರ ಬಂದೊದಗಿದೆ. ಕೇಂದ್ರದ ಮೋದಿ ಸರ್ಕಾರ ಆಸ್ಟ್ರೇಲಿಯ ಮತ್ತು ನ್ಯೂಜಿಲ್ಯಾಂಡ್‌ಗಳಿಂದ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳಲು ತಯಾರಿ ನಡೆಸಿತ್ತು. ರೈತರು ವಿರೋಚಿತ ಪ್ರತಿಭಟಿಸಿದ ಕಾರಣದಿಂದ ತಾತ್ಕಾಲಿಕವಾಗಿ ಮೋದಿ ಸರ್ಕಾರ ಹಿಂದೆ ಸರಿದಿದೆ ಎಂದು ಹೇಳಿದ್ದಾರೆ.
ಬಿಜೆಪಿ ಸರ್ಕಾರ ನನಗೆ ಕೊಟ್ಟಿರುವ ಮಾಹಿತಿ ಪ್ರಕಾರ 2019 ರಲ್ಲಿ 1.29 ಕೋಟಿ ಹಸು ಎಮ್ಮೆ, ಎತ್ತು, ಕೋಣಗಳಿದ್ದವು. ಅವು 2022 ರ ಡಿಸೆಂಬರ್ ವೇಳೆಗೆ 1.15 ಕೋಟಿ ಇಳಿಕೆಯಾಗಿವೆ. ಈ 14 ಲಕ್ಷ ಜಾನುವಾರುಗಳು ಎಲ್ಲಿಗೆ ಹೋದವು..? ವರ್ಷದಿಂದ ವರ್ಷಕ್ಕೆ ಜಾನುವಾರುಗಳ ಸಂಖ್ಯೆ ಹೆಚ್ಚಾಗುವುದರ ಬದಲಿಗೆ ಕಡಿಮೆಯಾಗುವುದಕ್ಕೆ ಕಾರಣಗಳೇನು..? ಸರ್ಕಾರದ ಅನುದಾನದಿಂದ ನಡೆಯುತ್ತಿರುವ ಬಹುತೇಕ ಗೋಶಾಲೆಗಳಲ್ಲಿ ಗಂಡು ಕರುಗಳ ಪ್ರಮಾಣ ಶೇ.10 ಕ್ಕಿಂತ ಕಡಿಮೆ ಇದೆ. ನಿಸರ್ಗ ತತ್ವದ ಪ್ರಕಾರ ಶೇ.50 ರಷ್ಟು ಗಂಡು ಕರುಗಳು ಹುಟ್ಟುತ್ತವೆ. ಹಾಗಿದ್ದರೆ ಹುಟ್ಟಿದ ಗಂಡುಕರುಗಳು ಎಲ್ಲಿಗೆ ಹೋಗುತ್ತಿವೆ..? ಎಂದು ಕಿಡಿಕಾರಿದ್ದಾರೆ.

ಪ್ರತಿ ದಿನ 2 ಲಕ್ಷ ಲೀಟರುಗಳಷ್ಟು ಕಡಿಮೆ ಹಾಲು ಸಂಗ್ರಹ!
ರಾಜ್ಯದಲ್ಲಿ ಸುಮಾರು 25 ಲಕ್ಷ ನೋಂದಾಯಿತ ಹಾಲು ಉತ್ಪಾದಕರಿದ್ದಾರೆ. ಹಾಲನ್ನು ಯಥೇಚ್ಛವಾಗಿ ಉತ್ಪಾದಿಸುತ್ತಿದ್ದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ ಮುಂತಾದ ಜಿಲ್ಲೆಗಳ ರೈತರೆ ಹಸುಗಳನ್ನು ಸಾಕಲು ನಿರಾಸಕ್ತಿ ತೋರಿಸುತ್ತಿದ್ದಾರೆ. ಗ್ರಾಮೀಣ ಆರ್ಥಿಕತೆಯಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿರುವ ಹೈನುಗಾರಿಕೆಯ ಚೈತನ್ಯವನ್ನು ನಾಶ ಮಾಡಲು ಮನುವಾದಿ ಶಕ್ತಿಗಳು ಹಾಗೂ ಕಾರ್ಪೊರೇಟ್ ಶಕ್ತಿಗಳು ಒಂದಾಗಿ ಶ್ರಮಿಸುತ್ತಿವೆ.
ನಮ್ಮ ಸರ್ಕಾರ ಇದ್ದಾಗ 2013 ರಿಂದ 2018ರ ಅವಧಿಯಲ್ಲಿ ಹಾಲಿಗೆ ನೀಡುವ ಪ್ರೋತ್ಸಾಹ ಧನವನ್ನು ಲೀಟರಿಗೆ 5 ರೂಪಾಯಿಗಳಷ್ಟು ಹೆಚ್ಚಿಸಿದ್ದೆವು. ಆದರೆ ಬಿಜೆಪಿ ಸರ್ಕಾರ ಹಾಲು ಉತ್ಪಾದಕರಿಗೆ ನೀಡುವ ಸಹಾಯಧನವನ್ನು ಕೂಡ ವರ್ಷದಿಂದ ವರ್ಷಕ್ಕೆ ಕಡಿಮೆ ಮಾಡುತ್ತಿದೆ. ನಮ್ಮ ಸರ್ಕಾರದ ನಿರ್ಧಾರದಿಂದಾಗಿ 2012-13 ರಲ್ಲಿ 45 ಲಕ್ಷ ಲೀಟರ್ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣವು 2017 ರ ವೇಳೆಗೆ 73 ಲಕ್ಷ ಲೀಟರಿಗೆ (28 ಲಕ್ಷ ಲೀ.) ಏರಿಕೆಯಾಗಿತ್ತು. ಈಗ 2017 ಕ್ಕಿಂತ 2 ಲಕ್ಷ ಲೀಟರುಗಳಷ್ಟು ಕಡಿಮೆ ಹಾಲು ಪ್ರತಿ ದಿನ ಸಂಗ್ರಹವಾಗುತ್ತಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ರೈತರ ಜಾನುವಾರುಗಳು ಮೇಯಲು ಜಾಗ ಇಲ್ಲ!
'ರೈತರು ಬೆಳೆಯುವ ಮೆಕ್ಕೆ ಜೋಳ, ಗೋಧಿ, ಶೇಂಗಾ ಮುಂತಾದವುಗಳ ಬೆಲೆಗಳು 2017 ಕ್ಕೂ ಮೊದಲು ಇದ್ದ ಬೆಲೆಗಳಿಗಿಂತ ಕಡಿಮೆ ಇವೆ. ತಮ್ಮ ಬೆಳೆಗಳಿಗೂ ಉತ್ತಮ ಬೆಲೆಯನ್ನು ರೈತರು ಪಡೆಯುತ್ತಿಲ್ಲ. ಹಾಲು ಮಾರಾಟದಿಂದಲೂ ನಷ್ಟ ಅನುಭವಿಸುತ್ತಿದ್ದಾರೆ. ಆದರೂ ಹಿಂಡಿ, ಬೂಸಾ ಬೆಲೆ ಗಗನ ಮುಟ್ಟಿದೆ. ಇದಕ್ಕೆ ಮುಖ್ಯ ಕಾರಣ ಪೆಟ್ರೋಲ್, ಡೀಸೆಲ್ ಮೇಲಿನ ಮೋದಿ ಸಕಾರದ ತೆರಿಗೆ ಕಾರಣ. ಹಿಂಡಿಗೆ ಶೇ.5 ರಷ್ಟು ಜಿಎಸ್‍ಟಿಯನ್ನು ವಿಧಿಸಲಾಗುತ್ತಿದೆ. ಪಶು ಆಹಾರದ ಬೆಲೆ ಹೆಚ್ಚಾಗಿರುವುದಕ್ಕೆ ಕಾರಣ ಏನು? ' ಎಂದು ಸಿದ್ದರಾಮಯ್ಯ ಪ್ರಶ್ನಿಸುತ್ತಿದ್ದಾರೆ.
ಟಿಪ್ಪುಸುಲ್ತಾನನ ದೂರದೃಷ್ಟಿಯ ಕಾರಣದಿಂದ ಹಳೆ ಮೈಸೂರು ಭಾಗದಲ್ಲಿ ಲಕ್ಷಾಂತರ ಎಕರೆ ಭೂಮಿಯನ್ನು 'ಅಮೃತ್ ಮಹಲ್ ಕಾವಲು'ಗಳೆಂದು ಮೀಸಲಿರಿಸಲಾಗಿತ್ತು. ಇದರಲ್ಲಿ ಚಿತ್ರದುರ್ಗ ಜಿಲ್ಲೆಯೊಂದರಲ್ಲೆ 23,189 ಎಕರೆಗೂ ಹೆಚ್ಚಿನ ಭೂಮಿಯನ್ನು ಅಮೃತ್ ಮಹಲ್ ಕಾವಲ್ ಎಂದು ಕಾಯ್ದಿರಿಸಿದ್ದರು. ಬ್ರಿಟಿಷ್ ಸರ್ಕಾರ, ಮೈಸೂರು ಅರಸರ ಆಡಳಿತಗಳೂ ಕೂಡ ಕಾವಲುಗಳನ್ನು ಕಾಪಾಡಿಕೊಂಡು ಬಂದಿದ್ದವು. ಆದರೆ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಈ ಜಮೀನುಗಳ ಮೇಲೆ ಕಣ್ಣು ಹಾಕಿದೆ. ಚಿತ್ರದುರ್ಗದ ಪಶುಪಾಲಕರ ಬೆನ್ನಿಗೆ ಇರಿಯಲು ನಿಂತಿರುವ ಈ ಸರ್ಕಾರ ಸಾವಿರಗಟ್ಟಲೆ ಎಕರೆಗಳನ್ನು ಡಿನೋಟಿಫೈ ಮಾಡಲು ಮುಂದಾಗಿದೆ. ನಮ್ಮ ರೈತರ ಜಾನುವಾರುಗಳು ಮೇಯಲು ಜಾಗ ಇಲ್ಲದಂತಾಗಿದೆ. ಇದನ್ನು ಕೂಡಲೆ ನಿಲ್ಲಿಸಿ ರಾಜ್ಯದಲ್ಲಿರುವ ಎಲ್ಲ ಮೇವಿನ ಕ್ಷೇತ್ರಗಳನ್ನು ಉಳಿಸಬೇಕು ಎಂದು ಆಗ್ರಹಿಸಿದ್ದಾರೆ.












Click it and Unblock the Notifications