ಬೆಂಗಳೂರಿನಲ್ಲಿ ಅಕ್ರಮ ಕಟ್ಟಡ ಕಟ್ಟಬೇಡಿ
ಬೆಂಗಳೂರು, ಮೇ 22 : ಬೆಂಗಳೂರು ನಗರದಲ್ಲಿ ನಿರ್ಮಾಣವಾಗುತ್ತಿರುವ ಅಕ್ರಮ ಕಟ್ಟಡಗಳಿಗೆ ಬ್ರೇಕ್ ಹಾಕಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ನಕ್ಷೆ ಉಲ್ಲಂಘಿಸಿ ನಿರ್ಮಾಣ ಮಾಡುವ ಕಟ್ಟಡಗಳಿಗೆ ನೀರು, ವಿದ್ಯುತ್, ಒಳಚರಂಡಿ ಸಂಪರ್ಕ ನೀಡಬೇಡಿ ಎಂದು ಬಿಬಿಎಂಪಿ ಆಯುಕ್ತರಿಗೆ ಸಿಎಂ ಸೂಚನೆ ನೀಡಿದ್ದಾರೆ.
ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ಬಿಬಿಎಂಪಿ ಆಯುಕ್ತ ಎಂ.ಡಿ.ಲಕ್ಷ್ಮೀನಾರಾಯಣ ಅವರರೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಂಗಳೂರು ನಗರದಲ್ಲಿ ಅಕ್ರಮವಾಗಿ ತಲೆ ಎತ್ತುತ್ತಿರುವ ಕಟ್ಟಡಗಳಿಗೆ ಕಡಿವಾಣ ಹಾಕಬೇಕು ಎಂದು ತಿಳಿಸಿದರು.

ನಗರದಲ್ಲಿ ನಕ್ಷೆ ಉಲ್ಲಂಘಿಸಿ ನಿರ್ಮಾಣ ಮಾಡುವ ಕಟ್ಟಡಗಳಿಗೆ ವಿದ್ಯುತ್, ಒಳಚರಂಡಿ ಮತ್ತು ವಿದ್ಯುತ್ ಸೌಲಭ್ಯ ಒದಗಿಸಬಾರದು. ಅಕ್ರಮ ಕಟ್ಟಡ ನಿರ್ಮಾಣಗಳನ್ನು ಮೊದಲ ಹಂತದಲ್ಲಿಯೇ ಪತ್ತೆ ಹಚ್ಚಬೇಕು. ಅಕ್ರಮ ಕಟ್ಟಡಗಳಿಂದ ಯಾವುದೇ ರೀತಿಯ ಆದಾಯ ಬರುವುದಿಲ್ಲ. ಅಕ್ರಮ ಕಟ್ಟಡ ನಿರ್ಮಾಣಕ್ಕೆ ಬಿಬಿಎಂಪಿ ಕಡಿವಾಣ ಹಾಕಬೇಕು ಎಂದು ಸಿಎಂ ಹೇಳಿದರು. [ಅಕ್ರಮ-ಸಕ್ರಮ ಮಾರ್ಗಸೂಚಿ ಸಿದ್ಧ]
ನಗರದಲ್ಲಿನ ಅಕ್ರಮ ಕಟ್ಟಡಗಳನ್ನು ಸಕ್ರಮಗೊಳಿಸಲು ಅಕ್ರಮ-ಸಕ್ರಮ ಯೋಜನೆ ಜಾರಿಗೆ ಬರಲಿದೆ. ಮುಂದಿನ ಮೂರು ತಿಂಗಳಿನಲ್ಲಿ ಈ ಯೋಜನೆ ಜಾರಿಗೆ ಬರಲಿದ್ದು, ದಿನಾಂಕ ನಿಗದಿ ಮಾಡಿರುವ ಅವಧಿಯಲ್ಲಿ ಕಟ್ಟಿರುವ ಕಟ್ಟಡಗಳನ್ನು ಮಾತ್ರ ಸಕ್ರಮಗೊಳಿಸಬೇಕು. ಈ ಗಡುವನ್ನು ವಿಸ್ತರಿಸಲು ಸಾಧ್ಯವಿಲ್ಲ. ನಗರದಲ್ಲಿ ಅಕ್ರಮ ಕಟ್ಟಡಗಳು ನಿರ್ಮಾಣಗೊಂಡರೆ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ.
ಅಕ್ರಮ ಕಟ್ಟಡಗಳ ನಿರ್ಮಾಣವನ್ನು ತಡೆಯುವಾಗ ಯಾವುದೇ ರಾಜಕೀಯ ಹಸ್ತಕ್ಷೇಪ ಉಂಟಾದರೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ರಾಜಕೀಯ ಪ್ರಭಾವಗಳಿಗೆ ಒಳಗಾಗಬಾರದು ಎಂದು ಸಿಎಂ ಹೇಳಿದ್ದಾರೆ. ಇಂತಹ ಕಾರ್ಯದಲ್ಲಿ ರಾಜಕೀಯ ಹಸ್ತಕ್ಷೇಪ ಉಂಟಾದಂತೆ ನೋಡಿಕೊಳ್ಳಬೇಕು ಎಂದು ಬೆಂಗಳೂರು ನಗರ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಅವರಿಗೂ ಸಿಎಂ ತಿಳಿಸಿದ್ದಾರೆ.












Click it and Unblock the Notifications