ಸಿದ್ದರಾಮಯ್ಯ - ಡಿಕೆ ಶಿವಕುಮಾರ್ ಪ್ರಮಾಣ ವಚನ: ಇಲ್ಲಿದೆ ಅತಿಥಿಗಳ ಪಟ್ಟಿ
ಕಾಂಗ್ರೆಸ್ ಸಿಎಂ ಆಯ್ಕೆ ಗೊಂದಲ ಮುಕ್ತಾಯವಾಗಿದ್ದು, ಸರ್ಕಾರ ರಚನೆ ಮಾಡಲು ಮುಹೂರ್ತ ಫಿಕ್ಸ್ ಆಗಿದೆ. ಮೇ 20 ರಂದು ಸಿದ್ದರಾಮಯ್ಯ ರಾಜ್ಯದ ಮುಖ್ಯಮಂತ್ರಿಯಾಗಿ ಎರಡನೇ ಬಾರಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, 10 ಸಚಿವರು ಕೂಡ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ದೇಶದ ಹಲವು ಗಣ್ಯರನ್ನು ಕಾಂಗ್ರೆಸ್ ಆಹ್ವಾನಿಸಿದೆ.
ಮೇ 20 ರಂದು ಶನಿವಾರ ಮಧ್ಯಾಹ್ನ 12.30 ಗಂಟೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಈ ಅದ್ಧೂರಿ ಸಮಾರಂಭ ನಡೆಯಲಿದೆ. ಭರ್ಜರಿ ಬಹುಮತ ಪಡೆದು ಸರ್ಕಾರ ರಚನೆ ಮಾಡುತ್ತಿರುವ ಕಾಂಗ್ರೆಸ್ ಅದ್ದೂರಿಯಾಗಿಯೇ ಪ್ರಮಾಣ ವಚನ ಕಾರ್ಯಕ್ರಮ ನಡೆಸಲು ನಿರ್ಧರಿಸಿದೆ, ಈಗಾಗಲೇ ಕಂಠೀರವ ಕ್ರೀಡಾಂಗಣದಲ್ಲಿ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಕಾರ್ಯಕ್ರಮದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಭಾಗವಹಿಸುವ ಪ್ರಮುಖರಾಗಿದ್ದಾರೆ. ಇದರ ಜೊತೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಘೆಲ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು, ಪುದುಚೆರಿ ಮುಖ್ಯಮಂತ್ರಿ ಎನ್. ರಂಗಸ್ವಾಮಿ, ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್, ಜಾರ್ಖಂಡ್ ಸಿಎಂ ಹೇಂಮಂತ್ ಸೊರೆನ್ ಈ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಪೊಲೀಸರಿಂದ ಬಿಗಿ ಬಂದೋಬಸ್ತ್
ಎಲ್ಲಾ ಗಣ್ಯರಿಗೆ ಈಗಾಗಲೇ ಬಿಗಿ ಭದ್ರತೆ ನೀಡಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. 12 ಎಸಿಪಿ ಅಧಿಕಾರಿಗಳು, 11 ಆರ್ ಪಿಐ, 11 ಆರ್ ಎಸ್‌ಐ, 24 ಎಆರ್ ಎಸ್‌ಐ, ಮತ್ತು 206 ಪೊಲೀಸ್ ಪೇದೆಗಳನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ. ಕಂಠೀರವ ಸುತ್ತಮುತ್ತ ಪೊಲೀಸರು ಬಿಗಿ ಭದ್ರತೆ ಏರ್ಪಡಿಸಲಿದ್ದಾರೆ. ಸಿದ್ಧತೆಯ ಸಮಯದಲ್ಲಿ ಕೂಡ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಸಿಎಂ ಆಯ್ಕೆಯಲ್ಲಿ ಸಿದ್ದರಾಮಯ್ಯ ಮತ್ತು ಡಿಕೆಶಿ ಪೈಪೋಟಿ ಇದ್ದ ಕಾರಣ ಸರ್ಕಾರ ರಚನೆ ವಿಳಂಬವಾಗಿದೆ. ಮೇ 18ರಂದು ಪ್ರಮಾಣ ವಚನ ಕಾರ್ಯಕ್ರಮ ನಡೆಯಬೇಕಿತ್ತು, ಆದರೆ ಸಿಎಂ ಆಯ್ಕೆ ತಡವಾದ ಕಾರಣ ಮೇ 20ರಂದು ಪ್ರಮಾಣ ವಚನ ನಡೆಯಲಿದೆ.












Click it and Unblock the Notifications