SIR: ಬೆಂಗಳೂರಲ್ಲಿ 49.53 ಲಕ್ಷ ಮತದಾರರ ಹೆಸರು ಡಿಲೀಟ್: ಮತದಾರರಿಗೆ ನಾಳೆಯೇ ಕೊನೆಯ ಅವಕಾಶ, ಏನು ಮಾಡಬೇಕು
SIR: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಹಂತ ತಲುಪಿದೆ. ಆದರೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಹಲವು ಗೊಂದಲ ಎದುರಾಗಿದೆ. ಕರ್ನಾಟಕದಲ್ಲಿ ಬರೋಬ್ಬರಿ 1.10 ಕೋಟಿ ಮತದಾರರ ಹೆಸರು ಡಿಲೀಟ್ ಆಗಿದೆ. ಇದು ಭಾರತದಲ್ಲೇ ಅತ್ಯಂತ ಹೆಚ್ಚು ಎಂದು ಹೇಳಲಾಗಿದೆ.
ಭಾರತದ ವಿವಿಧ ರಾಜ್ಯಗಳಲ್ಲಿ ಈಗಾಗಲೇ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ನಡೆದಿದೆಯಾದರೂ ಒಂದು ಕೋಟಿ ಮತದಾರರ ಹೆಸರು ಡಿಲೀಟ್ ಆಗಿಲ್ಲ. ಪಶ್ಚಿಮ ಬಂಗಾಳದಲ್ಲಿಯೇ ಅತ್ಯಂತ ಹೆಚ್ಚು ಮತದಾರರ ಹೆಸರು ಡಿಲೀಟ್ ಆಗಿತ್ತು. ಬೆಂಗಳೂರಿನಲ್ಲಿಯೇ 49.34 ಲಕ್ಷ ಹೆಸರುಗಳು ಡಿಲೀಟ್ ಆಗುವ ಸಾಧ್ಯತೆ ಇದೆ. ಮತದಾರರು ಆಗಸ್ಟ್ 8ರ ಒಳಗಾಗಿ ಬಿಎಲ್ಒಗಳನ್ನು ಸಂಪರ್ಕಿಸಿ ಹೆಸರು ಪರಿಶೀಲನೆ ಮಾಡಿಕೊಳ್ಳಬೇಕು ಎಂದು ಹೇಳಲಾಗಿದೆ. ಈ ಸಂಬಂಧ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹೇಳಿದ್ದೇನು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಗೈರಾಗಿರುವ, ಸ್ಥಳಾಂತರಗೊಂಡಿರುವ, ಮರಣ ಹೊಂದಿದ, ನಕಲು ಹಾಗು ಇತರೆ(ASDDO) ಸೇರಿದಂತೆ 49,53,020 (47.68%) ಮತದಾರರನ್ನು ಗುರುತಿಸಲಾಗಿದೆ ಎಂದು ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಸುಷಮಾ ಗೋಡಬೋಲೆ ಅವರು ತಿಳಿಸಿದ್ದಾರೆ.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026ರ ಪ್ರಕ್ರಿಯೆ ಪ್ರಗತಿಯಲ್ಲಿದೆ. ಈ ಸಂಬಂಧ BLOಗಳು ಮನೆ ಮನೆಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಣೆ ಮಾಡುವ ಕಾರ್ಯವನ್ನು 30ನೇ ಜೂನ್ 2026 ರಿಂದ ಕೈಗೊಳ್ಳಲಾಗಿದೆ. ಈ ಪ್ರಕ್ರಿಯೆಯಲ್ಲಿ ಗೈರಾಗಿರುವ, ಸ್ಥಳಾಂತರಗೊಂಡಿರುವ, ಮರಣ ಹೊಂದಿದ, ನಕಲು ಹಾಗೂ ಇತರೆ(ASDDO) ಮತದಾರರನ್ನು ಗುರುತಿಸಲಾಗಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಒಟ್ಟು 49,53,020 (47.68%) ಮತದಾರರನ್ನು ASSDO ವರ್ಗದಲ್ಲಿ ಗುರುತಿಸಲಾಗಿದೆ. ಇವರಲ್ಲಿ 7,98,416 ಮತದಾರರು ಮನೆಯಲ್ಲಿ ಗೈರು(Absent) ಆಗಿದ್ದು, 3384790 ಮತದಾರರು ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ (Permanent Shifting). ಇನ್ನು 3,15,175 ಮತದಾರರು ಮೃತ(Dead)ಪಟ್ಟಿದ್ದು, 60,005 ಮತದಾರರು ಈಗಾಗಲೇ ಮತ್ತೊಂದು ಸ್ಥಳದಲ್ಲಿ ನೋಂದಾಯಿತರಾಗಿರುವುದು(Duplicate) ಕಂಡುಬಂದಿದ್ದು, ಉಳಿದ 3,94,634 ಮತದಾರರು ಇತರೆ(Others) ವರ್ಗಕ್ಕೆ ಸೇರಿದ್ದಾರೆ ಎಂದು ಹೇಳಲಾಗಿದೆ.
ಮುಂದುವರಿದು ಈ ಮಾಹಿತಿಯನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ತನ್ನ ಅಧಿಕೃತ ಜಾಲತಾಣದಲ್ಲಿ http://gba.karnataka.gov.in ಅಪ್ಲೋಡ್ ಮಾಡಿದೆ. ಈ ಕುರಿತು ಯಾವುದೇ ದೂರುಗಳು ಅಥವಾ ಆಕ್ಷೇಪಣೆಗಳಿದ್ದಲ್ಲಿ, ಸಂಬಂಧಪಟ್ಟ ಬೂತ್ ಮಟ್ಟದ ಅಧಿಕಾರಿಗಳು (BLOs) ಅಥವಾ ಮತದಾರರ ನೋಂದಣಾಧಿಕಾರಿಗಳನ್ನು ಸಂಪರ್ಕಿಸಿ ಸಲ್ಲಿಸಬಹುದಾಗಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
SIR: ನಾಳೆಯ ಒಳಗಾಗಿ ಅರ್ಜಿಗಳನ್ನು ಸಲ್ಲಿಸಿ
ಈ ನಡುವೆ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದೆ. ಮತದಾರರು ಭರ್ತಿ ಮಾಡಿದ ಗಣತಿ (Enumeration) ನಮೂನೆಯನ್ನು ಸಲ್ಲಿಸದ ಮತದಾರರು, ತಮ್ಮ ವಿವರಗಳನ್ನು ಪರಿಶೀಲಿಸಿ 7ನೇ ಆಗಸ್ಟ್ 2026ರ ಒಳಗಾಗಿ ಸಂಬಂಧಪಟ್ಟ ಬೂತ್ ಮಟ್ಟದ ಅಧಿಕಾರಿ (BLO) ಅವರಿಗೆ ಸಲ್ಲಿಸುವಂತೆ ಕೋರಲಾಗಿದೆ. ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗಲು ಇದು ಕೊನೆಯ ಅವಕಾಶವಾಗಿದೆ. ನಮೂನೆಗಳನ್ನು ಡಿಜಿಟಲೀಕರಣಗೊಳಿಸಬೇಕಿರುವುದರಿಂದ, ಕೊನೆಯ ದಿನದವರೆಗೆ ಕಾಯದೆ ಆದಷ್ಟು ಬೇಗ ಸಲ್ಲಿಸಬೇಕು ಎಂದು ಬೆಂಗಳೂರಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Click it and Unblock the Notifications
