ಸಾಮಾಜಿಕ- ಶೈಕ್ಷಣಿಕ ಸಮೀಕ್ಷೆ: ನೇಮಕವಾದ ನೋಡಲ್ ಅಧಿಕಾರಿಗಳಿಗೆ ಅಗತ್ಯ ತರಬೇತಿ: GBA
ಬೆಂಗಳೂರು, ಅಕ್ಟೋಬರ್ 04: ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಕ್ಟೋಬರ್-03 ರಿಂದ ಆರಂಭವಾಗಲಿದೆ. ಈ ಸಂಬಂಧ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA)ದ ಪಶ್ಚಿಮ ನಗರ ಪಾಲಿಕೆಯು ಒಟ್ಟು 9 ಮಂದಿ ಕೆ.ಎ.ಎಸ್. ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳಾಗಿ ನಿಯೋಜಿಸಿದೆ. ಈ ಸಿಬ್ಬಂದಿಗೆ ಎರಡು ಹಂತಗಳಲ್ಲಿ ಅಗತ್ಯ ತರಬೇತಿ ನೀಡಲಾಗುವುದು ಎಂದು ಪಾಲಿಕೆ ಆಯುಕ್ತ ಡಾ. ರಾಜೇಂದ್ರ ಕೆ.ವಿ ತಿಳಿಸಿದರು.
ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯ 2 ವಲಯಗಳಲ್ಲಿನ ವಿಧಾನಸಭಾ ಕ್ಷೇತ್ರಗಳ 64 ವಾರ್ಡ್‌ಗಳ ಒಟ್ಟು 14.65 ಲಕ್ಷ ಮನೆಗಳು ಈ ಸಮೀಕ್ಷೆಗೆ ಒಳಪಡಲಿವೆ. ಸಮೀಕ್ಷೆ ಸುಗಮವಾಗಿ ನಡೆಯಲು ಒಟ್ಟು 9 ಮಂದಿ ಕೆ.ಎ.ಎಸ್. ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳಾಗಿ ನಿಯೋಜಿಸಲಾಗಿದೆ.

ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಗೆ ವಿಧಾನಸಭಾ ಕ್ಷೇತ್ರಗಳಾದ ಮಲ್ಲೇಶ್ವರಂ, ರಾಜಾಜಿನಗರ, ಮಹಾಲಕ್ಷ್ಮೀ ಲೇಔಟ್, ಗೋವಿಂದರಾಜನಗರ, ವಿಜಯನಗರ, ಬಸವನಗುಡಿ, ಪದ್ಮನಾಭನಗರ (ಭಾಗಶಃ), ರಾಜರಾಜೇಶ್ವರಿ ನಗರ, ಯಶವಂತಪುರ ಹಾಗೂ ದಾಸರಹಳ್ಳಿ (ಭಾಗಶಃ) ಸೇರಿವೆ ಎಂದರು.
ಹಿಂದುಳಿದ ವರ್ಗಗಳ ಆಯೋಗ ಮತ್ತು ಸರ್ಕಾರದ ನಿರ್ದೇಶನದಂತೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮಾರ್ಗದರ್ಶನದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025 ನಡೆಸಲು ಎಲ್ಲಾ ಪೂರ್ವ ತಯಾರಿಗಳನ್ನು ಮಾಡಲಾಗಿದೆ. ಸಮೀಕ್ಷೆಗೆ ವಿವಿಧ ಇಲಾಖೆಗಳ ಅಧಿಕಾರಿಗಳು/ನೌಕರರನ್ನು ನಿಯೋಜಿಸಲಾಗಿದ್ದು, ಅವರಿಗೆ ಅಗತ್ಯ ತರಬೇತಿ ನೀಡಲಾಗಿದೆ ಎಂದು ತಿಳಿಸಿದರು.
ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯ ನಾಗರಿಕರು, ಸಮೀಕ್ಷಾದಾರರು ಮನೆಗೆ ಭೇಟಿ ನೀಡಿದಾಗ ಅಗತ್ಯ ಮಾಹಿತಿ ಹಾಗೂ ದಾಖಲೆಗಳನ್ನು ನೀಡಿ ಸಮೀಕ್ಷೆಯಲ್ಲಿ ಸಹಕರಿಸಬೇಕೆಂದು ಅವರು ಮನವಿ ಮಾಡಿದರು.
6 ಜನ ನೋಡಲ್ ಅಧಿಕಾರಿಗಳ ನೇಮಕ
ಇನ್ನೂ ಕೇಂದ್ರ ನಗರ ಪಾಲಿಕೆ ವ್ಯಾಪ್ತಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭವಾಗಿದೆ. ಈ ಸಂಬಂಧ 6 ಜನ ಕೆ.ಎ.ಎಸ್. ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಅಗತ್ಯ ಎರಡು ಹಂತದ ತರಬೇತಿ ನೀಡಿ ಸಮೀಕ್ಷೆಗೆ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಹೇಳಿದರು.
ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ 6 ವಿಧಾನಸಭಾ ಕ್ಷೇತ್ರಗಳ 2 ವಲಯಗಳಲ್ಲಿ 42 ವಾರ್ಡ್ ಗಳ ಒಟ್ಟು 5.61 ಲಕ್ಷ ಮನೆಗಳು ಸಮೀಕ್ಷೆಗೆ ಒಳಪಡಲಿವೆ. ಆರು ವಿಧಾನಸಭಾ ಕ್ಷೇತ್ರಗಳಾದ ಸಿ.ವಿ. ರಾಮನ್ ನಗರ, ಶಾಂತಿನಗರ, ಶಿವಾಜಿನಗರ, ಗಾಂಧಿನಗರ, ಚಾಮರಾಜಪೇಟೆ, ಚಿಕ್ಕಪೇಟೆ ಕ್ಷೇತ್ರಗಳಲ್ಲಿ ಹಿಂದುಳಿದ ವರ್ಗಗಳ ಆಯೋಗದ ಮತ್ತು ಸರ್ಕಾರದ ನಿರ್ದೇಶನದಂತೆ ಮತ್ತು ಜಿಬಿಎ ಸೂಚನೆಯಂತೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕೆ-2025ಕ್ಕೆ ಬೇಕಾದ ಎಲ್ಲಾ ಪೂರ್ವ ತಯಾರಿಗಳನ್ನು ಮಾಡಿಕೊಳ್ಳಲಾಯಿತು.
ವಿವಿಧ ಇಲಾಖೆಗಳ ಅಧಿಕಾರಿ/ನೌಕರರನ್ನು ಸಮೀಕ್ಷೆ ಕಾರ್ಯಕ್ಕೆ ನೇಮಿಸಿತು. ಸಮೀಕ್ಷೆದಾರರಿಗೆ ಅಗತ್ಯ ತರಬೇತಿಯನ್ನು ನೀಡಲಾಗಿದೆ ಎಂದ ಅವರು, ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ನಾಗರೀಕರು ಗಣತಿದಾರರು ಸಮೀಕ್ಷೆಗೆ ಆಗಮಿಸಿದ ಸಂದರ್ಭದಲ್ಲಿ ಅವರಿಗೆ ಅಗತ್ಯ ಮಾಹಿತಿ ಒದಗಿಸುವುದರೊಂದಿಗೆ ಸಮೀಕ್ಷೆಗೆ ಸಹಕಾರ ನೀಡುವಂತೆ ಅವರು ನಾಗರಿಕರಲ್ಲಿ ವಿನಂತಿಸಿದರು.












Click it and Unblock the Notifications