ಬೆಂಗಳೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ಬಿಬಿಎಂಪಿಯಿಂದ ವಿಶೇಷ ವ್ಯವಸ್ಥೆ
Ganesha Chaturthi: ಗಣೇಶ ಚತುರ್ಥಿಗೆ ಕ್ಷಣಗಣನೆ ಪ್ರಾರಂಭವಾಗಿದೆ. ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಬಿಬಿಎಂಪಿಯು ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ನೀಡುವ ಅನುಮತಿ ಹಾಗೂ ವಿಸರ್ಜನೆಗೆ ಸಂಬಂಧಿಸಿದಂತೆ ಸಿದ್ಧತೆಗಳನ್ನು ಬಹುತೇಕ ಪೂರ್ಣಗೊಳಿಸಿದೆ. ಇನ್ನು ಗಣೇಶ ಮೂರ್ತಿ ವಿಸರ್ಜನೆಗಾಗಿ ಸಂಚಾರಿ ವಾಹನ(ಮೊಬೈಲ್ ಟ್ಯಾಂಕ್) ಹಾಗೂ ಕಲ್ಯಾಣಿಗಳಲ್ಲಿ ವ್ಯವಸ್ಥೆ ಮಾಡಿಕೊಂಡಿರುವುದಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಾಹಿತಿ ನೀಡಿದೆ.
ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ ಅನುಮತಿ ಪಡೆಯಲು 63 ಏಕಗವಾಕ್ಷಿ ಕೇಂದ್ರಗನ್ನು ತೆರೆಯಲಾಗಿದೆ. ಗಣೇಶ ಮೂರ್ತಿಗಳ ವಿಸರ್ಜನೆಗಾಗಿ 41 ಕೆರೆಯ ಆವರಣದಲ್ಲಿ ಶಾಶ್ವತ ಅಥವಾ ತಾತ್ಕಾಲಿಕ ಕಲ್ಯಾಣಿಗಳು, 462 ತಾತ್ಕಾಲಿಕ ಮೊಬೈಲ್ ಟ್ಯಾಂಕ್‌ಗಳನ್ನು ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ಈ ವ್ಯವಸ್ಥೆ ಬೆಂಗಳೂರಿನ ಎಲ್ಲಾ ವಾರ್ಡ್‌ಗಳಲ್ಲೂ ಇರಲಿದೆ. ಹೀಗಾಗಿ, ಬಿಬಿಎಂಪಿ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.
ಗಣೇಶ ಮೂರ್ತಿಗಳ ವಿಸರ್ಜನೆಗೆ ಸಂಬಂಧಿಸಿದಂತೆ ಮೇಲ್ವಿಚಾರಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನೋಡಲ್ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ. ಯಾವ ವಲಯದಲ್ಲಿ ಯಾವ ಅಧಿಕಾರಿಗಳು ಇದ್ದಾರೆ ಹಾಗೂ ಅವರ ದೂರವಾಣಿ ಸಂಖ್ಯೆಯನ್ನು ತಿಳಿದುಕೊಳ್ಳಲು ಬಿಬಿಎಂಪಿಯ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಬಹುದು. ಇಲ್ಲವೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ವೆಬ್‌ಸೈಟ್ ಲಿಂಕ್ https://apps.bbmpgov.in/ganesh2024/ ಗೆ ಭೇಟಿ ನೀಡಬಹುದು.

63 ಏಕಗವಾಕ್ಷಿ ಕೇಂದ್ರಗಳ ಸ್ಥಾಪನೆ
ಇನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ ಅನುಮತಿ ನೀಡಲು ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲಾಗಿದೆ. 63 ಉಪವಿಭಾಗ ಕಚೇರಿಗಳಲ್ಲಿ ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲಾಗಿದೆ. ಪಾಲಿಕೆ, ಪೊಲೀಸ್, ಬೆಸ್ಕಾಂ ಹಾಗೂ ಅಗ್ನಿಶಾಮಕ ಅಧಿಕಾರಿಗಳು ಒಂದೇ ಸ್ಥಳದಲ್ಲಿರಲಿದ್ದಾರೆ. ಈ ಕೇಂದ್ರಕ್ಕೆ ಭೇಟಿ ನೀಡಿ ಅನುಮತಿ ಪತ್ರವನ್ನು ಪಡೆದುಕೊಳ್ಳಬಹುದಾಗಿದೆ.
ನಿಯಮ ಮೀರಿದರೆ ಕ್ರಿಮಿನಲ್ ಕೇಸ್: ಎಚ್ಚರಿಕೆ
ಗಣೇಶ ಚತುರ್ಥಿ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಪಿಒಪಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಬಾರದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸೂಚನೆ ನೀಡಿದ್ದಾರೆ. ಬಿಬಿಎಂಪಿ ಕೌನ್ಸಿಲ್ ಸಭೆಯ ನಿರ್ಣಯದ ಆಧಾರದ ಮೇಲೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕು. ಒಂದೊಮ್ಮೆ ಪ್ಲಾಸ್ಟರ್ ಆಫ್ ಪ್ಯಾರೀಸ್ (POP) ವಸ್ತುಗಳನ್ನು ಬಳಸಿ ಗಣೇಶ ಮೂರ್ತಿಗಳನ್ನು ತಯಾರಿಸಿದರೆ ಅಥವಾ ಮಾರಾಟ ಮಾಡಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಈ ರೀತಿ ನಿಯಮ ಉಲ್ಲಂಘನೆ ಮಾಡುವವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಬಿಬಿಎಂಪಿ ಎಚ್ಚರಿಸಿದೆ.
ವಾರ್ಡ್‌ವಾರು ಅಧಿಕಾರಿಗಳ ನೇಮಕ
ಗಣೇಶ ಚುತುರ್ಥಿ ಸಂದರ್ಭದಲ್ಲಿ ಜನರಿಗೆ ನೆರವಾಗಲು ಹಾಗೂ ಯಾವುದೇ ಗೊಂದಲಗಳ ಉಂಟಾಗಬಾರದು ಎಂದು ಎಚ್ಚರ ವಹಿಸಲಾಗಿದೆ. ಈ ನಿಟ್ಟಿನಲ್ಲಿ ಬಿಬಿಎಂಪಿ ವ್ಯಾಪ್ತಿಯ ಎಂಟೂ ವಲಯಗಳಲ್ಲಿ ವಲಯ ಆಯುಕ್ತರು ವಲಯಕ್ಕೆ ಒಬ್ಬರನ್ನು ಮೇಲುಸ್ತುವಾರಿಯಂತೆ 8 ಅಧಿಕಾರಿಯಗಳನ್ನು ನೇಮಿಸಲಾಗಿದೆ. ಗಣೇಶ ಮೂರ್ತಿ ವಿಸರ್ಜನೆಗೆ ಸಂಬಂಧಿಸಿದಂತೆ ಬೆಂಗಳೂರಿನ ಪ್ರತಿ ವಾರ್ಡ್‌ಗೆ ಒಬ್ಬರಂತೆ ನೋಡಲ್ ಅಧಿಕಾರಿಯನ್ನು ನೇಮಿಸಲು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸೂಚನೆ ನೀಡಿದ್ದಾರೆ.












Click it and Unblock the Notifications