ಜಯಲಲಿತಾ ಪ್ರಕರಣ: ಜಪ್ತಿ ಮಾಡಲಾಗಿದ್ದ ಬೆಲೆಬಾಳುವ ವಸ್ತುಗಳ ವಿಲೇವಾರಿಗೆ ಎಸ್‌ಪಿಪಿ ನೇಮಕ
ಬೆಂಗಳೂರು. ಏಪ್ರಿಲ್ 8: ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ತಮಿಳುನಾಡು ಮಾಜಿ ಸಿಎಂ ಜೆ.ಜಯ ಲಲಿತಾ ಅವರಿಂದ ಜಪ್ತಿ ಮಾಡಲಾದ ಕೋಟ್ಯಂತರ ರೂಪಾಯಿ ಬೆಲೆಬಾಳುವ ವಸ್ತುಗಳ ವಿಲೇವಾರಿಗೆ ಕಾನೂನು ಪ್ರಕ್ರಿಯೆ ಕೈಗೊಳ್ಳಲು ರಾಜ್ಯ ಸರ್ಕಾರಿ ಅಭಿಯೋಜಕ ಕಿರಣ್ ಎಸ್. ಜವಳಿ ಅವರನ್ನು ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ಸರ್ಕಾರ ನೇಮಿಸಿದೆ.
ಜಯ ಲಲಿತಾ ವಿರುದ್ಧದ ಪ್ರಕರಣವನ್ನು ವಿಚಾರಣೆ ನಡೆಸಿದ್ದ ನಗರದ ವಿಶೇಷ ನ್ಯಾಯಾಲಯ (ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ) ಬರೆದ ಪತ್ರ ಆಧರಿಸಿ ರಾಜ್ಯ ಕಾನೂನು ಇಲಾಖೆ ಅಧೀನ ಕಾರ್ಯದರ್ಶಿ ಆದಿ ನಾರಾಯಣ ಅವರು ಮಾ.27ರಂದು ಈ ಆದೇಶ ಹೊರಡಿಸಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ನಗರದ ವಿಶೇಷ ನ್ಯಾಯಾಲಯವು ಜಯಲಲಿತಾಗೆ ನಾಲ್ಕು ವರ್ಷ ಜೈಲು ಮತ್ತು 100 ಕೋಟಿ ರೂಪಾಯಿ ದಂಡ ವಿಧಿಸಿ 2014ರ ಸೆಪ್ಟೆಂಬರ್ 27ರಂದು ಆದೇಶಿಸಿತ್ತು. ಜಪ್ತಿ ಮಾಡಲಾದ ಜಯಲಲಿತಾ ಅವರ ಬೆಲೆಬಾಳುವ ವಸ್ತುಗಳನ್ನು ಆರ್‌ಬಿಐ, ಎಸ್‌ಬಿಐಗೆ ಅಥವಾ ಸಾರ್ವಜನಿಕ ಹರಾಜು ಮೂಲಕ ಮಾರಾಟ ಮಾಡಬೇಕು. ಅದರಿಂದ ಬಂದ ಹಣವನ್ನು ದಂಡ ಮೊತ್ತಕ್ಕೆ ಹೊಂದಾಣಿಕೆ ಮಾಡಬೇಕು ಎಂದು ನಿರ್ದೇಶಿಸಿತ್ತು.

ಜಯಲಲಿತಾ ಅವರಿಂದ ಜಪ್ತಿ ಮಾಡಲಾಗಿದ್ದ ವಸ್ತುಗಳು ಯಾವುವು?
7040 ಗ್ರಾಂ ತೂಕದ 468 ಬಗೆಯ ಚಿನ್ನ ಹಾಗೂ ವಜ್ರ ಖಚಿತ ಆಭರಣಗಳು, 700 ಕೆ.ಜಿ. ತೂಕದ ಬೆಳ್ಳಿ ಆಭರಣಗಳು, 740 ದುಬಾರಿ ಚಪ್ಪಲಿಗಳು, 11, 344 ರೇಷ್ಮೆ ಸೀರೆಗಳು, 250 ಶಾಲು, 12 ರೆಫ್ರಿಜೆರೇಟರ್, 10 ಟಿ.ವಿ. ಸೆಟ್ , 8 ವಿಸಿಆರ್, 1 ವಿಡಿಯೋ ಕ್ಯಾಮೆರಾ, 4 ಸಿಡಿ ಪ್ಲೇಯರ್, 2 ಆಡಿಯೋ ಡೆಕ್, 24 ಟೂ-ಇನ್ ಒನ್ ಟೇಪ್‌ರೇಕಾರ್ಡರ್, 1040 ವಿಡಿಯೋ ಕ್ಯಾಸೆಟ್, 3 ಐರನ್ ಲಾಕರ್, 1,93,202 ರೂಪಾಯಿ ನಗದು ಸೇರಿದಂತೆ ಹಲವು ವಸ್ತುಗಳು ಜಯಲಲಿತಾ ಅವರಿಂದ ಜಪ್ತಿ ಮಾಡಲಾಗಿತ್ತು. ಸದ್ಯ ಅವುಗಳನ್ನು ವಿಲೇವಾರಿ ಮಾಡಬೇಕಿದೆ.











Click it and Unblock the Notifications