ಕಾಂಗ್ರೆಸ್, ಬಿಜೆಪಿ ಪಾಲಿಗೆ ಕಗ್ಗಂಟಾಗಿರುವ ಕ್ಷೇತ್ರ ಯಾವುದು?
ಬೆಂಗಳೂರು, ಜ.15 : ಲೋಕಸಭೆ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ತಯಾರಿಸುತ್ತಿರುವ ಕಾಂಗ್ರೆಸ್ ಮತ್ತು ಬಿಜೆಪಿಗೆ ಕಗ್ಗಟಾಂಗಿರುವ ಕ್ಷೇತ್ರ ಬೆಂಗಳೂರು ಸೆಂಟ್ರಲ್ ಮತ್ತು ಬೆಂಗಳೂರು ದಕ್ಷಿಣ. ಹೌದು. ಉಭಯ ಪಕ್ಷಗಳಿಗೂ ಈ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಸವಾಲಿನ ಕೆಲಸವಾಗಿದೆ.
ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಸದ್ಯ ಬಿಜೆಪಿಯಿಂದ ಪಿಸಿ ಮೋಹನ್ ಸಂಸದರಾಗಿದ್ದು ಅವರಿಗೆ ಪುನಃ ಟಿಕೆಟ್ ನೀಡಲು ಪಕ್ಷ ಸಿದ್ಧತೆ ನಡೆಸಿದೆ. ಆದರೆ, ಕಾಂಗ್ರೆಸ್ ಪಕ್ಷದಲ್ಲಿ ಹೆಚ್ಚಿನ ಅಭ್ಯರ್ಥಿಗಳಿದ್ದು, ಯಾರಿಗೆ ಟಿಕೆಟ್ ನೀಡಬೇಕು ಎಂದು ಪಕ್ಷದ ನಾಯಕರು ಆಲೋಚಿಸುತ್ತಿದ್ದಾರೆ. [ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳು]

ಬೆಂಗಳೂರು ಸೆಂಟ್ರಲ್ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಮಾಜಿ ಸಂಸದ ಎಚ್.ಟಿ.ಸಾಂಗ್ಲಿಯಾನ, ಸಿ.ಕೆ.ಜಾಫರ್ ಫರೀಫ್ ಮತ್ತು ಯುವ ಕಾಂಗ್ರೆಸ್ ಅಧ್ಯಕ್ಷ ರಿಜ್ವಾನ್ ಅರ್ಷದ್ ಅವರ ಹೆಸರು ಕೇಳಿಬರುತ್ತಿದೆ. ಆದ್ದರಿಂದ ಯಾರಿಗೆ ಟಿಕೆಟ್ ನೀಡಬೇಕು ಎಂದು ಕಾಂಗ್ರೆಸ್ ನಾಯಕರು ತಲೆಕೆಡಿಸಿಕೊಂಡಿದ್ದಾರೆ. [ಬಿಜೆಪಿ ಸಂಭಾವ್ಯ ಪಟ್ಟಿ]
ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಎಚ್.ಟಿ.ಸಾಂಗ್ಲಿಯಾನ ಅವರಿಗೆ ಟಿಕೆಟ್ ನೀಡಬೇಕು ಎಂದು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ. ಆದರೆ, ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಎರಡನೇ ಬಾರಿ ಆಯ್ಕೆಯಾದ ರಿಜ್ವಾನ್ ಅರ್ಷದ್ ಅವರನ್ನು ಕಡೆಗಣಿಸುವಂತಿಲ್ಲ. ಅದರಲ್ಲೂ ಯುವಕರಿಗೆ ಆದ್ಯತೆ ಎಂದು ಹೇಳಿರುವ ಪಕ್ಷ ರಿಜ್ವಾನ್ ಅವರಿಗೆ ಟಿಕೆಟ್ ನಿರಾಕರಿಸುವುದು ಕಷ್ಟವಾಗಿದೆ.
ಬಿಜೆಪಿ ಕಥೆ ಏನು : ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಬಿಜೆಪಿ ಪಾಲಿಗೆ ಸವಾಲಾಗಿದೆ. ಈ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್, ಶೋಭಾ ಕರಂದ್ಲಾಜೆ ಮತ್ತು ಮಾಜಿ ಸಿಎಂ ಡಿವಿ ಸದಾನಂದ ಗೌಡರ ಹೆಸರುಗಳಿವೆ. [ಶೋಭಾ ಕರಂದ್ಲಾಜೆ ಸ್ಪರ್ಧೆ ಯಾವ ಕ್ಷೇತ್ರದಿಂದ ]
ಡಿವಿ ಸದಾನಂದ ಗೌಡರನ್ನು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದ್ದು ಕ್ಷೇತ್ರದ ಒಬ್ಬರು ಆಕಾಂಕ್ಷಿಗಳನ್ನು ಕಡಿಮೆಗೊಳಿಸಿದೆ. ಆದರೆ, ಆರ್.ಅಶೋಕ್ ಮತ್ತು ಶೋಭಾ ಕರಂದ್ಲಾಜೆ ಅವರಲ್ಲಿ ಯಾರಿಗೆ ಉತ್ತರ ಕ್ಷೇತ್ರದಲ್ಲಿ ಟಿಕೆಟ್ ನೀಡಬೇಕು ಎಂಬುದನ್ನು ಪಕ್ಷವಿನ್ನು ತೀರ್ಮಾನಿಸಿಲ್ಲ. ಆದ್ದರಿಂದ ಉತ್ತರ ಕ್ಷೇತ್ರದ ಟಿಕೆಟ್ ಹಂಚಿಕೆ ಸವಾಲಾಗಿದೆ.
ಉತ್ತರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಯಾರು : ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಾಲಿಗೂ ಹಲವಾರು ಜನ ಆಕಾಂಕ್ಷಿಗಳಿದ್ದಾರೆ. ರಮೇಶ್ ಜಿ.ಗೌಡ, ಬಿ.ಎಲ್.ಶಂಕರ್ ಮತ್ತು ರಾಜೀವ್ ಗೌಡ ಹೆಸರು ಕ್ಷೇತ್ರಕ್ಕೆ ಕೇಳಿಬರುತ್ತಿದೆ. ಆದರೆ, ಬಿಜೆಪಿ ಅಭ್ಯರ್ಥಿಯನ್ನು ನೋಡಿಕೊಂಡು ತೀರ್ಮಾನಿಸೋಣ ಎಂದು ಕಾಂಗ್ರೆಸ್ ನಾಯಕರು ಕಾದು ಕುಳಿತಿದ್ದಾರೆ.












Click it and Unblock the Notifications