ಉಕ್ರೇನ್‌ನಲ್ಲಿ ಉಳಿದ ವಿದ್ಯಾರ್ಥಿಗಳನ್ನು ರಾಜ್ಯಕ್ಕೆ ಸುರಕ್ಷಿತವಾಗಿ ಕರೆತರಲು ಕ್ರಮ: ಸಿಎಂ
ಬೆಂಗಳೂರು, ಫೆಬ್ರವರಿ 27: ಸದ್ಯ ಉಕ್ರೇನ್ ಹಾಗೂ ರಷ್ಯಾ ನಡುವೆ ನಡೆಯುತ್ತಿದ್ದು, ಹಲವಾರು ಕರ್ನಾಟಕದ ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ಸಿಲುಕಿದ್ದಾರೆ. ಈಗಾಗಲೇ ಕೆಲವು ವಿದ್ಯಾರ್ಥಿಗಳನ್ನು ಉಕ್ರೇನ್‌ನಿಂದ ವಾಪಾಸ್ ಕರೆದುಕೊಂಡು ಬರಲಾಗಿದೆ. ಇನ್ನು "ಉಕ್ರೇನ್‌ನಲ್ಲಿ ಇನ್ನುಳಿದ ವಿದ್ಯಾರ್ಥಿಗಳನ್ನು ರಾಜ್ಯಕ್ಕೆ ಸುರಕ್ಷಿತವಾಗಿ ಕರೆತರಲು ಕ್ರಮಕೈಗೊಳ್ಳುತ್ತಿದೆ," ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿ ಅವರ ಪುಣ್ಯತಿಥಿಯ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ದಿವಂಗತ ಕೆ.ಸಿ.ರೆಡ್ಡಿ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿ ಉಕ್ರೆನ್‌ನಲ್ಲಿ ಇನ್ನುಳಿದ ವಿದ್ಯಾರ್ಥಿಗಳನ್ನು ಕರೆತರುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.
"ಪಶ್ಚಿಮ ಭಾಗದಲ್ಲಿದ್ದ ವಿದ್ಯಾರ್ಥಿಗಳು ರೊಮೆನಿಯಾ ಮೂಲಕ ಭಾರತಕ್ಕೆ ಮರಳಿದ್ದಾರೆ. ಮುಂಬೈ ಹಾಗೂ ನವದೆಹಲಿಗೆ ಆಗಮಿಸಿರುವ ವಿದ್ಯಾರ್ಥಿಗಳನ್ನು ಬೆಂಗಳೂರಿಗೆ ಕರೆತರಲಾಗುತ್ತಿದೆ. ವಿಪತ್ತು ನಿರ್ವಹಣಾ ಇಲಾಖೆಯಿಂದಲೇ ವಿದ್ಯಾರ್ಥಿಗಳ ಪ್ರಯಾಣ ಹಾಗೂ ಇನ್ನಿತರ ವೆಚ್ಚಗಳನ್ನು ಭರಿಸಲಾಗುತ್ತಿದೆ," ಎಂದು ಹೇಳಿದರು.

"ಉಕ್ರೇನ್‌ನಿಂದ ಇನ್ನುಳಿದ ವಿದ್ಯಾರ್ಥಿಗಳನ್ನು ಕರೆತರಲು ಕೇಂದ್ರ ವಿದೇಶಾಂಗ ಸಚಿವರ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ. ಕೇಂದ್ರ ಹಾಗೂ ರಾಜ್ಯದ ಸಹಾಯವಾಣಿಗಳು ನಿರಂತರವಾಗಿ ಕಾರ್ಯನಿರ್ವಹಿಸುತ್ತಿವೆ. ಹಲವಾರು ವಿದ್ಯಾರ್ಥಿಗಳು ಹಾಗೂ ಪೋಷಕರ ಜೊತೆಗೆ ಚರ್ಚಿಸಲಾಗಿದೆ," ಎಂದು ತಿಳಿಸಿದರು.
ಯುದ್ಧ ಪರಿಸ್ಥಿತಿ ತಿಳಿಗೊಳ್ಳುವ ತನಕ ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ
"ಉಕ್ರೇನ್‌ನ ಕಾರ್ಕೈವ್‌ನಲ್ಲಿ ಬಹಳಷ್ಟು ವಿದ್ಯಾರ್ಥಿಗಳು ಸಿಲುಕಿದ್ದು, ಅದೇ ಪ್ರದೇಶದಲ್ಲಿ ಪ್ರಸ್ತುತ ಯುದ್ಧ ನಡೆಯುತ್ತಿರುವುದಾಗಿ ತಿಳಿದುಬಂದಿದೆ. ಅಲ್ಲಿನ ಮೆಟ್ರೋ, ಬಂಕರ್‌ಗಳಲ್ಲಿ ಬಹಳಷ್ಟು ಜನರನ್ನು ಇರಿಸಿರುವುದು ಆತಂಕದ ವಿಷಯ. ವಿದ್ಯಾರ್ಥಿಗಳ ಸುರಕ್ಷತೆಯ ಜೊತೆಗೆ ಊಟ ಮತ್ತು ನೀರಿನ ವ್ಯವಸ್ಥೆಯನ್ನು ಪೂರೈಸಲು ಕೇಂದ್ರ ವಿದೇಶಾಂಗ ಸಚಿವರನ್ನು ಮನವಿ ಮಾಡಲಾಗಿದೆ. ಯುದ್ಧದ ಪರಿಸ್ಥಿತಿ ತಿಳಿಗೊಳ್ಳುವ ತನಕ ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡುವ ಜೊತೆಗೆ ಅವರನ್ನು ಭಾರತಕ್ಕೆ ಕರೆತರುವ ಬಗ್ಗೆಯೂ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ. ರಾಜ್ಯದ ಅಧಿಕಾರಿಗಳು ಈ ನಿಟ್ಟಿನಲ್ಲಿ ನಿರಂತರವಾಗಿ ಸಂಪರ್ಕದಲ್ಲಿ ಇದ್ದಾರೆ," ಎಂದು ವಿವರಿಸಿದರು.
ಉಕ್ರೇನ್‌ನಿಂದ 250 ಭಾರತೀಯರನ್ನು ಹೊತ್ತ ಎರಡನೇ ವಿಮಾನ ರೊಮೇನಿಯಾದ ಬುಕಾರೆಸ್ಟ್‌ನಿಂದ ಭಾನುವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿದಿದೆ. ವಿಮಾನ ರೊಮೇನಿಯಾದ ಬುಕಾರೆಸ್ಟ್‌ನಿಂದ ಭಾನುವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿಯಿತು. ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 'ಆಪರೇಷನ್ ಗಂಗಾ' ಅಡಿಯಲ್ಲಿ ಭಾರತೀಯ ವಿದ್ಯಾರ್ಥಿಗಳನ್ನು ಯಶಸ್ವಿಯಾಗಿ ಕರೆತಂದಿದೆ.
ವಿವಿಧ ವಿಶ್ವವಿದ್ಯಾನಿಲಯಗಳಲ್ಲಿ ಕಲಿಯುತ್ತಿರುವ ಸುಮಾರು 15,000 ಭಾರತೀಯ ವಿದ್ಯಾರ್ಥಿಗಳು ಇನ್ನೂ ಯುದ್ಧ ಪೀಡಿತ ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದಾರೆ. ಇದಕ್ಕೂ ಮೊದಲು, ಶನಿವಾರ ಸಂಜೆ ರೊಮೇನಿಯಾದಿಂದ ಮೊದಲ ಏರ್ ಇಂಡಿಯಾ ವಿಮಾನದ ಮೂಲಕ 219 ಭಾರತೀಯರು ನವದೆಹಲಿಗೆ ಆಗಮಿಸಿದ್ದರು.
ಕಳೆದ ಕೆಲವು ದಿನಗಳಲ್ಲಿ 4000 ಭಾರತೀಯ ಪ್ರಜೆಗಳು ಈಗಾಗಲೇ ಉಕ್ರೇನ್ ತೊರೆದಿದ್ದಾರೆ. ದೆಹಲಿಯ ಎಂಇಎ ನಿಯಂತ್ರಣ ಕೊಠಡಿಗೆ 980 ಕರೆಗಳು ಮತ್ತು 850 ಇಮೇಲ್‌ಗಳು ಬಂದಿವೆ ಎಂದು ಕೂಡಾ ವಿದೇಶಾಂಗ ಕಾರ್ಯದರ್ಶಿ ಹರ್ಷ್ ವಿ ಶ್ರಿಂಗ್ಲಾ ತಿಳಿಸಿದ್ದಾರೆ. ಆನ್‌ಲೈನ್ ನೋಂದಣಿಯ ಆಧಾರದ ಮೇಲೆ 20,000 ಭಾರತೀಯ ಪ್ರಜೆಗಳು ಉಕ್ರೇಕ್‌ನಲ್ಲಿದ್ದಾರೆ ಎಂದು ನಾವು ಕಂಡುಕೊಂಡಿದ್ದೇವೆ ಎಂದು ವಿದೇಶಾಂಗ ಕಾರ್ಯದರ್ಶಿ ಹರ್ಷ್ ವಿ ಶ್ರಿಂಗ್ಲಾ ತಿಳಿಸಿದ್ದಾರೆ.
ಉಕ್ರೇನ್‌ನಿಂದ ಬೆಂಗಳೂರಿಗೆ ತಲುಪಿದ ವಿದ್ಯಾರ್ಥಿಗಳು
ಸದ್ಯ ಉಕ್ರೇನ್‌ನಿಂದ 12 ಕನ್ನಡಿಗರು ಬೆಂಗಳೂರಿಗೆ ಆಗಮಿಸಿದ್ದಾರೆ. ಇನ್ನೂ 18 ಜನರು ದೆಹಲಿಯಲ್ಲಿದ್ದು, ರಾಜ್ಯಕ್ಕೆ ಆಗಮಿಸಲಿದ್ದಾರೆ. ಭಾನುವಾರ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಸಚಿವ ಆರ್. ಅಶೋಕ ಮುಂಬೈ ಮೂಲಕ ರಾಜ್ಯಕ್ಕೆ ಆಗಮಿಸಿದ 12 ಜನರನ್ನು ಬರಮಾಡಿಕೊಂಡಿದ್ದಾರೆ. (ಒನ್‌ಇಂಡಿಯಾ ಸುದ್ದಿ)












Click it and Unblock the Notifications