Valmiki Case: 6 ದಿನ ಮಾಜಿ ಸಚಿವ ನಾಗೇಂದ್ರ ಇಡಿ ಕಸ್ಟಡಿಗೆ ವಹಿಸಿ ಕೋರ್ಟ್ ಆದೇಶ
ಬೆಂಗಳೂರು ಜುಲೈ 13: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಹೆಚ್ಚಿನ ವಿಚಾರಣೆಗೆ 6 ದಿನಗಳ ಕಾಲ ಇಡಿ ಕಸ್ಟಡಿಗೆ ವಹಿಸಿ ನ್ಯಾಯಾಲಯ ಆದೇಶಿದೆ.
ಕೋಟ್ಯಾಂತರ ರೂಪಾಯಿ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಶುಕ್ರವಾರ (ಜುಲೈ 12) ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕರಾದ ನಾಗೇಂದ್ ಅವರನ್ನು ವಶಕ್ಕೆ ಪಡೆದಿತ್ತು. ನಾಗೇಂದ್ರ ಅವರ ನಿವಾಸಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲನೆ ಮಾಡಿದ್ದರು.

ದಾಳಿ ವೇಳೆ ಸಿಕ್ಕ ಕೆಲ ಮಹತ್ವದ ದಾಖಲೆಗಳ ಬಗ್ಗೆ ಮಾಹಿತಿ ಪಡೆಯಲು ಇಡಿ, ಶುಕ್ರವಾರ ಬೆಳಗ್ಗೆ ನಾಗೇಂದ್ರನನ್ನು ವಶಕ್ಕೆ ಪಡೆದುಕೊಂಡಿತ್ತು. ಸಂಜೆವರೆಗೂ ತೀವ್ರ ವಿಚಾರಣೆಗೊಳಪಡಿಸಿದ ನಂತರ ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ಬಂಧಿಸಿದ್ದರು. ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ಕೋರ್ಟ್ ಹೆಚ್ಚಿನ ವಿಚಾರಣೆಗೆ ಜುಲೈ 18ರವರೆಗೆ ಇಡಿ ಕಸ್ಟಡಿಗೆ ನಾಗೇಂದ್ ಅವರನ್ನು ವಹಿಸಿ ಆದೇಶ ನೀಡಿದೆ.
ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನೂರಾರು ಕೋಟಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಮೂರು ದಿನ ವಿಚಾರಣೆ ಬಳಿಕ ಕಾಂಗ್ರೆಸ್ ಶಾಸಕ ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದರು. ಶುಕ್ರವಾರ ನಗರದ ಡಾಲರ್ಸ್ ಕಾಲೋನಿಯಲ್ಲಿರುವ ಅವರ ನಿವಾಸದಿಂದ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗಾಗಿ ಶಾಂತಿನಗರದ ಕಚೇರಿಗೆ ಇಡಿ ಅಧಿಕಾರಿಗಳು ಕರೆದೊಯ್ದಿದ್ದರು. ಈ ವೇಳೆ ಅವರನ್ನು ಬಂಧಿಸಲಾಗಿದೆ.
ಇಡಿ ವಶಕ್ಕೆ ಪಡೆಯುತ್ತಿದ್ದಂತೆ ನಾಗೇಂದ್ರ ಅವರು, 'ನನ್ನನ್ನು ಸುಮ್ಮನೆ ಕರೆದುಕೊಂಡು ಬಂದಿದ್ದಾರೆ ನನಗೇನು ಗೊತ್ತಿಲ್ಲ' ಎಂದು ಹೇಳಿದ್ದಾರೆ. ಬುಧವಾರ ನಾಗೇಂದ್ರ ಅವರ ಪಿಎ ಹರೀಶ್ ಅವರನ್ನು ಜಾರಿ ನಿರ್ದೇಶನಾಲಯ(ED)ದ ಅಧಿಕಾರಿಗಳು ವಶಕ್ಕೆ ಪಡೆದಿದ್ದರು.
ನಾಗೇಂದ್ರ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಮುನ್ನ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಯಿತು. ಇದಕ್ಕಾಗಿ ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ಬೌರಿಂಗ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು, ಅಲ್ಲಿಂದ ನೇರವಾಗಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು.
ವಾಲ್ಮೀಕಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣದಿಂದ ಬೇಸತ್ತು ನಿಗಮದ ಅಧೀಕ್ಷಕ ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಗರಣ ಬೆಳಕಿಗೆ ಬಂದ ಬೆನ್ನಲ್ಲೇ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಪ್ರಕರಣದ ತನಿಖಾಗಿ ರಾಜ್ಯ ಸರ್ಕಾರ ಎಸ್ಐಟಿ ರಚಿಸಿದೆ. ಎಸ್ಐಟಿ ಅಧಿಕಾರಿಗಳು ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ಅತ್ತ ಸಿಬಿಐ ಕೂಡ ಪ್ರಕರಣದ ತನಿಖೆಯನ್ನು ನಡೆಸುತ್ತಿದೆ. ಇದೀಗ ಜಾರಿ ನಿರ್ದೇಶನಾಲಯ ಏಕಾಏಕಿ ಮಾಜಿ ಸಚಿವ ಬಿ ನಾಗೇಂದ್ರ ಮತ್ತು ಬಸನಗೌಡ ದದ್ದಲ್ ಮನೆ ಮತ್ತು ಕಚೇರಿ ಮೇಲೆ ದಾಳಿ ಮಾಡಿದ್ದು, ಅವರನ್ನು ಬಂಧಿಸಿದೆ.












Click it and Unblock the Notifications