ಹಿರಿಯ ಸಾಹಿತಿ ಡಾ.ಎನ್.ಎಸ್ ಲಕ್ಷ್ಮೀನಾರಾಯಣ ಭಟ್ಟ ನಿಧನ, ಸಿಎಂ ಸಂತಾಪ
ಬೆಂಗಳೂರು, ಮಾರ್ಚ್ 6: ಕನ್ನಡ ನಾಡಿನ ಅಗ್ರಮಾನ್ಯ ಸಾಹಿತಿ, ಕವಿ, ಏಟ್ಸ್, ಎಲಿಯಟ್, ಷೇಕ್ಸ್ಪಿಯರ್ನ ಕಾವ್ಯಗಳನ್ನು ಕನ್ನಡಕ್ಕೆ ಅನುವಾದಿಸಿದ್ದ ಡಾ.ಎನ್.ಎಸ್ ಲಕ್ಷ್ಮೀನಾರಾಯಣ ಭಟ್ಟ ಅವರು ಶನಿವಾರ ಬೆಳಿಗ್ಗೆ ನಿಧನರಾಗಿದ್ದಾರೆ.
ದೀರ್ಘ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಎನ್.ಎಸ್ ಲಕ್ಷ್ಮೀನಾರಾಯಣ ಭಟ್ಟರವರು ಶನಿವಾರ ನಸುಕಿನ ಜಾವ ಇಹಲೋಕ ತ್ಯಜಿಸಿದ್ದಾರೆ.
ಬೆಂಗಳೂರಿನ ಬನಶಂಕರಿಯ ಅವರ ನಿವಾಸದಲ್ಲಿ ಬೆಳಿಗ್ಗೆ 10.30 ರವರೆಗೆ ಅಂತಿಮ ದರ್ಶನ ಪಡೆಯಬುದು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಂತಾಪ
ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
"ಡಾ.ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರು, ಭಾವಗೀತೆ, ಸಾಹಿತ್ಯ ವಿಮರ್ಶೆ, ಅನುವಾದ, ನವ್ಯಕವಿತೆ, ಮಕ್ಕಳಿಗಾಗಿ ಗೀತೆಗಳ ರಚನೆ ಮುಂತಾದ ಹಲವರು ಪ್ರಕಾರಗಳಲ್ಲಿ ಸಾಹಿತ್ಯ ಕೃಷಿ ಮಾಡಿ ವ್ಯಾಪಕ ಮನ್ನಣೆ ಪಡೆದಿದ್ದಾರೆ. ಅವರ ಜನಪ್ರಿಯ ಭಾವಗೀತೆಗಳಿಂದ ಕನ್ನಡಿಗರ ಮನೆ ಮಾತಾಗಿದ್ದರು.''
"ಅವರ ನಿಧನದಿಂದ ಕನ್ನಡ ಸಾಹಿತ್ಯ ಕ್ಷೇತ್ರದ ತಾರೆಯೊಂದು ಕಳಚಿದಂತಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಭಗವಂತನು ಮೃತರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬ ವರ್ಗ ಹಾಗೂ ಅಪಾರ ಅಭಿಮಾನಿ ಬಳಗಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ'' ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.