ಲಭ್ಯವಿರುವ ಭೂಮಿಯಲ್ಲೇ ಬಳ್ಳಾರಿ ರಸ್ತೆ ಅಗಲೀಕರಣಕ್ಕೆ ಸರ್ಕಾರ ನಿರ್ಧಾರ
ಬೆಂಗಳೂರು, ಸೆ.22: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ನಗರದ ಬಳ್ಳಾರಿ ರಸ್ತೆಯನ್ನು ಸದ್ಯ ಲಭ್ಯವಿರುವ ಭೂಮಿಯಲ್ಲೇ ಅಗಲೀಕರಣ ಮಾಡಲಾಗುವುದು ಎಂದು ಹೈಕೋರ್ಟ್‌ಗೆ ಕರ್ನಾಟಕ ಸರ್ಕಾರ ತಿಳಿಸಿದೆ. ಈ ಕುರಿತಂತೆ ರಾಜ್ಯ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಸಲ್ಲಿಸಿರುವ ಪ್ರಮಾಣ ಪತ್ರ ಸಲ್ಲಿಸಿದ್ದಾರೆ.
ಪ್ರಮಾಣ ಪತ್ರವನ್ನು ಪರಿಶೀಲಿಸಿದ ನ್ಯಾಯಪೀಠ, ಅಗಲೀಕರಣ ಯಾವ ರೀತಿ ಕ್ರಮ ಕೈಗೊಳ್ಳಲಾಗುವುದು ಎಂಬ ಬಗ್ಗೆ ಸಮಗ್ರ ಮಾಹಿತಿಯುಳ್ಳ ಪ್ರಮಾಣಪತ್ರವನ್ನು ಮೂರು ವಾರದಲ್ಲಿ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಬಳ್ಳಾರಿ ರಸ್ತೆ ಅಗಲೀಕರಣ ಕಾಮಗಾರಿ ಕೈಗೊಳ್ಳಲು ಕೋರಿ ಸಮರ್ಪಣಾ ಸಾಂಸ್ಕೃತಿಕ ಮತ್ತು ಸಾಮಾಜಿಕ ಸಂಘಟನೆ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಹೊಸಮನಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಆಲೋಕ್ ಆರಾಧೆ ನೇತೃತ್ವದ ವಿಭಾಗೀಯಪೀಠ ವಿಚಾರಣೆ ನಡೆಸಿತು.
ಪ್ರಮಾಣಪತ್ರದ ಸಾರಾಂಶ: ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ಸರ್ಕಾರದ ಪ್ರಮಾಣಪತ್ರ ಸಲ್ಲಿಸಿದರು. ಅದರಲ್ಲಿ ರಸ್ತೆ ಅಗಲೀಕರಣಕ್ಕಾಗಿ ಈಗಾಗಲೇ ಭೂಮಿ ನೀಡಿರುವ ಮಾಲೀಕರಿಗೆ ವರ್ಗಾಯಿಸಬಹುದಾದ ಅಭಿವೃದ್ಧಿ ಹಕ್ಕು (ಟಿಡಿಆರ್) ಪ್ರಮಾಣ ಪತ್ರ ವಿತರಣೆಗೆ ಸಂಬಂಧಿಸಿದ ವ್ಯಾಜ್ಯವು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿದೆ.

ಬಳ್ಳಾರಿ ರಸ್ತೆಯಲ್ಲಿ ಸಂಚಾರಿ ದಟ್ಟಣೆ ಸಮಸ್ಯೆ ಪರಿಹರಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಹೈಕೋರ್ಟ್ ನೀಡಿರುವ ನಿರ್ದೇಶನ ಪ್ರಕಾರ 2022ರ ಸೆ.16ರಂದು ಸಿಎಂ ನೇತೃತ್ವದಲ್ಲಿ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳ ಸಭೆ ನಡೆಸಲಾಗಿದೆ ಎಂದು ತಿಳಿಸಲಾಗಿದೆ.
ಸದ್ಯ ಸರ್ಕಾರದ ಬಳಿ ಎಷ್ಟು ಭೂಮಿ ಲಭ್ಯವಿದೆಯೋ ಅಲ್ಲಿಯವರೆಗೆ ರಸ್ತೆ ಅಗಲೀಕರಣ ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ರಸ್ತೆ ಅಗಲೀಕರಣ ಕಾಮಗಾರಿ ನಡೆಸುವ ಮುನ್ನ ಭೂ ಮಾಲೀಕರಿಗೆ ಟಿಡಿಆರ್ ನೀಡಬೇಕಿದೆ. ಅದಕ್ಕಾಗಿ ದೊಡ್ಡ ಪ್ರಮಾಣದ ಹಣ ಅಗತ್ಯವಿದೆ. ರಸ್ತೆ ಅಗಲೀಕರಣ ಮಾಡಿ ಸಂಚಾರ ಸುಗಮಗೊಳಿಸುವ ಆಯ್ಕೆಗಳ ಬಗ್ಗೆ ಚರ್ಚಿಸಲಾಗಿದೆ ಎಂದು ವಿವರಿಸಲಾಗಿದೆ.
ಪರ್ಯಾಯ ಮಾರ್ಗ: ಸದ್ಯ ರಾಜ್ಯ ಸರ್ಕಾರದ ಬಳಿ ಲಭ್ಯವಿರುವ ಭೂಮಿಯಲ್ಲಿ ಕೂಡಲೇ ರಸ್ತೆ ಅಗಲೀಕರಣ ಕಾಮಗಾರಿ ಪ್ರಾರಂಭಿಸುವ ವಿಚಾರವನ್ನು ಮೊದಲ ಆದ್ಯತೆಯಾಗಿ ಪರಿಗಣಿಸಲಾಗುವುದು. ಅದರಂತೆ ಈ ಮಾರ್ಗದಲ್ಲಿ ಅಗತ್ಯವಿರುವಲ್ಲಿ ಮೇಲ್ಸೇತುವೆ ಮತ್ತು ಅಂಡರ್ ಪಾಸ್ ನಿರ್ಮಿಸಲು ಪರಿಶೀಲಿಸಲಾಗುವುದು. ಅರಮನೆ ಮೈದಾನದಲ್ಲಿರುವ ಕಲ್ಯಾಣ ಮಂಟಪಗಳ ಪ್ರವೇಶಕ್ಕೆ ಪರ್ಯಾಯ ಮಾರ್ಗ ಒದಗಿಸುವ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ಪ್ರಮಾಣಪತ್ರದಲ್ಲಿ ತಿಳಿಸಲಾಗಿದೆ.
ಈ ಪ್ರಮಾಣ ಪತ್ರ ಪರಿಶೀಲಿಸಿದ ನ್ಯಾಯಪೀಠ, ಸರ್ಕಾರದ ಬಳಿ ಎಷ್ಟು ಭೂಮಿ ಲಭ್ಯವಿದೆ? ಎಲ್ಲಿಂದ-ಎಲ್ಲಿಯವರೆಗೆ ಮತ್ತು ಹೇಗೆ ಅಗಲೀಕರಣ ಕಾಮಗಾರಿ ಕೈಗೊಳ್ಳಲಾಗುತ್ತದೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ನೀಡಿಲ್ಲ. ಆದ್ದರಿಂದ ಅಗಲೀಕರಣಕ್ಕೆ ಕೈಗೊಳ್ಳುವ ಕ್ರಮಗಳ ಕುರಿತು ಪ್ರಮಾಣಪತ್ರ ಸಲ್ಲಿಸಬೇಕು ಎಂದು ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಅ.17ಕ್ಕೆ ಮುಂದೂಡಿತು.
ಪ್ರಕರಣದ ವಿವರ: ನಗರದಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ ಬಳ್ಳಾರಿ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಿಪರೀತ ವಾಹನ ದಟ್ಟಣೆ ಸಮಸ್ಯೆ ಉಂಟಾಗುತ್ತಿದೆ. 2016ರಲ್ಲಿ ಸರ್ಕಾರ ತಿಳಿಸಿರುವಂತೆ ರಸ್ತೆಯಲ್ಲಿ ನಿತ್ಯವೂ 60 ರಿಂದ75 ಸಾವಿರ ವಾಹನಗಳು ಸಂಚರಿಸುತ್ತವೆ.
ಅರಮನೆ ಮೈದಾನದಲ್ಲಿ ಮದುವೆ ಕಾರ್ಯಕ್ರಮಗಳನ್ನು ಏರ್ಪಡಿಸುವುದರಿಂದ ವಾಹನ ಸಂಚಾರ ಮತ್ತಷ್ಟು ಕಠಿಣವಾಗುತ್ತಿದೆ. ಸಂಜೆ ಮತ್ತು ಬೆಳಗ್ಗೆ ಸಮಯದಲ್ಲಿ ಹೆಬ್ಬಾಳದಿಂದ ಬಿಡಿಎ ಜಂಕ್ಷನ್‌ವರೆಗೆ ವಾಹನಗಳ ಸಂಚರಿಸುವುದೇ ಕಷ್ಟವಾಗಿದೆ. ಆದ್ದರಿಂದ ರಸ್ತೆ ಅಗಲೀಕರಣಕ್ಕೆ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶಿಸುವಂತೆ ಅರ್ಜಿಯಲ್ಲಿ ಕೋರಲಾಗಿದೆ.












Click it and Unblock the Notifications