ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 48 ಗಂಟೆ ಗುಡುಗು ಸಹಿತ ಮಳೆ ಸಾಧ್ಯತೆ
ಕರ್ನಾಟಕದ ಒಳನಾಡಿನ ಕೆಲವು ಸ್ಥಳಗಳು ಮತ್ತು ಕರಾವಳಿ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಶುಕ್ರವಾರವೂ ಭಾರೀ ಮಳೆಯಾಗುವ ನಿರೀಕ್ಷೆಯಿದೆ
ಬೆಂಗಳೂರು, ಮಾರ್ಚ್ 16: ಗುರುವಾರ ಮತ್ತು ಶುಕ್ರವಾರದಂದು ರಾಜ್ಯದ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಕರ್ನಾಟಕದ ಒಳನಾಡಿನ ಕೆಲವು ಸ್ಥಳಗಳು ಮತ್ತು ಕರಾವಳಿ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಶುಕ್ರವಾರವೂ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ (ಎನ್‌ಐಕೆ), ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ರಾಮನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುರುವಾರ ಸಂಜೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮೈಸೂರು, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಸೇರಿದಂತೆ ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶುಕ್ರವಾರ ಮಳೆಯಾಗಲಿದೆ.
ಇನ್ನು, ಕಲಬುರಗಿಯಲ್ಲಿ ರಾಜ್ಯದ ಅತಿ ಹೆಚ್ಚು ಗರಿಷ್ಠ ತಾಪಮಾನ 37.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ. ಬಾಗಲಕೋಟೆಯಲ್ಲಿ ಕನಿಷ್ಠ ತಾಪಮಾನ 13.0 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಶುಕ್ರವಾರ ಬೆಳಗಿನ ತನಕ ಕರಾವಳಿ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ರಾಜ್ಯದ ಸಾಮಾನ್ಯಕ್ಕಿಂತ ಎರಡು ಮೂರು ಡಿಗ್ರಿ ಸೆಲ್ಸಿಯಸ್‌ಗಿಂತ ಗರಿಷ್ಠ ತಾಪಮಾನವನ್ನು ಕಾಣಬಹುದು. ಆದರೆ ಉತ್ತರ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಮೂರರಿಂದ ನಾಲ್ಕು ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ಇರುತ್ತದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಲಘು ಮಳೆ ಆರಂಭವಾಗಿದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಕೆಲವು ಪ್ರದೇಶಗಳಲ್ಲಿ ಗುರುವಾರ ಮುಂಜಾನೆಯೇ ಮಂಜು ಕೂಡ ಹೆಚ್ಚಾಗಿತ್ತು. ಇದು ಶುಕ್ರವಾರವೂ ಮುಂದುವರೆಯಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32 ಮತ್ತು 19 ಡಿಗ್ರಿ ಸೆಲ್ಸಿಯಸ್ ಆಗಿದ್ದು, ಮುಂದಿನ 48 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ತಿಳಿಸಿದೆ.












Click it and Unblock the Notifications