ಬುಧವಾರ ಡಾಲರ್ಸ್ ಕಾಲೋನಿಯಲ್ಲಿ ಏನಾಗಲಿದೆ?
ಬೆಂಗಳೂರು, ಸೆ.17 : ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ, ಕೆಜೆಪಿ ವಿಲೀನದ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ ಬುಧವಾರ ಕೆಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪಕ್ಷದ ಕೋರ್ ಕಮಿಟಿ ಸಭೆ ಕರೆದಿದ್ದಾರೆ. ಬಿಜೆಪಿ ಜೊತೆಗೆ ಕೈ ಜೋಡಿಸುವ ಕುರಿತು ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಬುಧವಾರ ಬಿ.ಎಸ್.ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿ ನಿವಾಸದಲ್ಲಿ ನಡೆಯಲಿರುವ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ, ಪಕ್ಷದ ಕಾರ್ಯಧ್ಯಕ್ಷೆ ಶೋಭಾ ಕರಂದ್ಲಾಜೆ, ಪಕ್ಷದ ನಾಯಕರಾದ ಧನಂಜಯ್ ಕುಮಾರ್, ಎಂ.ಡಿ.ಲಕ್ಷ್ಮೀನಾರಾಯಣ್, ಸಿ.ಎಂ.ಉದಾಸಿ ಸೇರಿದಂತೆ ಪ್ರಮುಖ ನಾಯಕರು ಪಾಲ್ಗೊಳ್ಳಲಿದ್ದಾರೆ.

ನರೇಂದ್ರ ಮೋದಿಯವರು ಪ್ರಧಾನಿ ಅಭ್ಯರ್ಥಿಯಾಗಿ ಘೋಷಣೆಯಾದ ಬಳಿಕ ಬಿ.ಎಸ್.ಯಡಿಯೂರಪ್ಪ ಮೋದಿ ಅವರಿಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ್ದಾರೆ. ಬುಧವಾರ ಸಭೆಯಲ್ಲಿ ಕೆಜೆಪಿಯನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸುವ ಕುರಿತು ಮಹತ್ವದ ಚರ್ಚೆ ನಡೆಯುಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಬುಧವಾರ ಪಕ್ಷದ ಮುಖಂಡರ ಅಭಿಪ್ರಾಯ ಸಂಗ್ರಹಿಸಲಿರುವ ಬಿ.ಎಸ್.ಯಡಿಯೂರಪ್ಪ, ಗುರುವಾರ ಪಕ್ಷದ ಜಿಲ್ಲಾಧ್ಯಕ್ಷರ ಸಭೆ ನಡೆಸಲಿದ್ದಾರೆ. ನಂತರ ಕೆಜೆಪಿಯೋ? ಅಥವ ಬಿಜೆಪಿಯೋ? ಎಂಬ ನಿರ್ಧಾರ ಪ್ರಕಟಿಸಲಿದ್ದಾರೆ. ಅಥವ ಬುಧವಾರವೇ ತಮ್ಮ ನಿರ್ಧಾರ ತಿಳಿಸುವ ಸಾಧ್ಯತೆ ಇದೆ.
ಕೆಜೆಪಿ ಪಕ್ಷದ ಕೆಲವು ನಾಯಕರು ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸುವಂತೆ ಯಡಿಯೂರಪ್ಪ ಅವರಿಗೆ ಸಲಹೆ ನೀಡಿದ್ದಾರೆ. ಆದರೆ, ಕೆಲವರು ಚುನಾವಣೆಯಲ್ಲಿ ಕೆಲವು ಕ್ಷೇತ್ರಗಳಲ್ಲಿ ಮೈತ್ರಿ ಮಾಡಿಕೊಳ್ಳೋಣ ಎಂದು ಸಲಹೆ ನೀಡಿದ್ದು, ಯಡಿಯೂರಪ್ಪ ಎರಡೂ ಸಲಹೆಗಳ ಕುರಿತು ಸಭೆಯಲ್ಲಿ ಚರ್ಚಿಸಲಿದ್ದಾರೆ.
ಬಿಜೆಪಿಯಲ್ಲಿ ಯಾವುದೇ ಹುದ್ದೆ ನೀಡದಿದ್ದರೆ, ಬಿಜೆಪಿಗೆ ಹೋಗುವುದು ಬೇಡ ಎಂಬುದು ಕೆಜೆಪಿಯ ನಾಯಕರು ಯಡಿಯೂರಪ್ಪ ಅವರಿಗೆ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಎಲ್ಲಾ ಸಲಹೆಗಳ ಕುರಿತು ಬುಧವಾರ ನಡೆಯಲಿರುವ ಸಭೆಯಲ್ಲಿ ಚರ್ಚೆ ನಡೆಯಲಿದೆ.
ಬುಧವಾರದ ಸಭೆಯ ಬಳಿಕ ಬಿ.ಎಸ್.ಯಡಿಯೂರಪ್ಪ ತಮ್ಮ ಮುಂದಿನ ರಾಜಕೀಯ ನಡೆಗಳನ್ನು ಘೋಷಿಸುವ ಸಾಧ್ಯತೆ ಇದೆ. ಆದ್ದರಿಂದ ಬುಧವಾರ ನಡೆಯುವ ಸಭೆ ಭಾರೀ ಮಹತ್ವ ಪಡೆದುಕೊಂಡಿದೆ. ಬುಧವಾರ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಏನಾಗಲಿದೆ ? ಎಂಬುದು ಕುತೂಹಲ ಮೂಡಿಸಿದೆ.












Click it and Unblock the Notifications