ಬೀದರ್ ಅಪಘಾತ: ಐವರು ಮಹಿಳೆಯರು ಸೇರಿ ಆರು ಮಂದಿ ದುರ್ಮರಣ
ಬೀದರ್, ನವೆಂಬರ್ 5: ಬೀದರ್ ಜಿಲ್ಲೆಯ ಚಿಟಗುಪ್ಪ ತಾಲೂಕಿನ ಬೆಮ್ಮಳಖೇಡ ಬಳಿ ನಡೆದಿರುವ ಭೀಕರ ಅಪಘಾತದಲ್ಲಿ ಐವರು ಮಹಿಳೆಯರು ಸೇರಿದಂತೆ ಆರು ಮಂದಿ ಮೃತಪಟ್ಟಿರುವ ದಾರುಣ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಐಶರ್ ಮತ್ತು ಆಟೋದ ನಡುವೆ ಸಂಭವಿಸಿದ ಅಪಘಾತದಲ್ಲಿ ಐವರು ಕೂಲಿ ಕಾರ್ಮಿಕ ಮಹಿಳೆಯರು ಸೇರಿ ಆರು ಮಂದಿ ಸಾವನ್ನಪ್ಪಿದ್ದಾರೆ. ಮೃತರನ್ನು ಪ್ರಭಾವತಿ(36), ಜಕ್ಕಮ್ಮ(32), ರುಕ್ಮಿಣಿ (60), ಯಾದಮ್ಮ(40), ಗುಂಡಮ್ಮ(52) ಎಂದು ಗುರುತಿಸಲಾಗಿದ್ದು, ಮತ್ತೊಬ್ಬರ ಹೆಸರು ಪತ್ತೆಯಾಗಿಲ್ಲ. ಇದೇ ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಅಪಘಾತದಲ್ಲಿ ಮೃತಪಟ್ಟಿರುವ ಆರು ಮಂದಿ ಬೀದರ್ ಜಿಲ್ಲೆಯ ಚಿಟಗುಪ್ಪ ತಾಲೂಕಿನ ಉಡುಮನಳ್ಳಿ ಮೂಲದವರು ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಮಾಹಿತಿ ನೀಡಿದ್ದಾರೆ.

ಸ್ವಗ್ರಾಮಕ್ಕೆ ವಾಪಸ್ಸಾಗುತ್ತಿದ್ದ ವೇಳೆ ದುರ್ಘಟನೆ:
ಬೀದರ್ ನಲ್ಲಿ ನಡೆದಿರುವ ಅಪಘಾತದಲ್ಲಿ ಮೃತಪಟ್ಟವರೆಲ್ಲ ಕೂಲಿ ಕಾರ್ಮಿಕರೇ ಆಗಿದ್ದಾರೆ. ದಿನನಿತ್ಯದ ಕೂಲಿ ಕೆಲಸವನ್ನು ಮುಗಿಸಿಕೊಂಡು ಆಟೋದಲ್ಲಿ ಸ್ವಗ್ರಾಮಕ್ಕೆ ವಾಪಸ್ ಆಗುತ್ತಿದ್ದರು. ಈ ಸಂದರ್ಭದಲ್ಲಿ ಬೀದರ್ ಚಿಟಗುಪ್ಪ ತಾಲೂಕಿನ ಬೆಮ್ಮಳಖೇಡ ಬಳಿ ಐಶರ್ ವಾಹನವೊಂದು ಬಂದು ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಕೂಲಿ ಕಾರ್ಮಿಕ ಮಹಿಳೆಯರಲ್ಲಿ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ನಾಲ್ವರು ಆಸ್ಪತ್ರೆಗೆ ರವಾನಿಸುತ್ತಿದ್ದ ಮಾರ್ಗಮಧ್ಯದಲ್ಲಿ ಉಸಿರು ಚೆಲ್ಲಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ:
ಬೀದರ್ ಜಿಲ್ಲೆ ಚಿಟಗುಪ್ಪಾ ತಾಲ್ಲೂಕಿನ ಬೆಮ್ಮಳಖೇಡ ಬಳಿ ನಡೆದ ಅಪಘಾತದಲ್ಲಿ 7 ಜನ ಮೃತರಾಗಿ ಹಲವರು ಗಾಯಗೊಂಡಿರುವ ವಿಷಯ ತಿಳಿದು ತೀವ್ರ ದುಃಖಿತನಾಗಿದ್ದೇನೆ. ಮೃತರ ಆತ್ಮಗಳಿಗೆ ಶಾಂತಿಯನ್ನು ಕೋರುತ್ತೇನೆ. ಈ ಕುರಿತು ಬೀದರ ಜಿಲ್ಲಾಡಳಿತದೊಂದಿಗೆ ಮಾತನಾಡಿ ಗಾಯಗೊಂಡವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡಲು ಸೂಚಿಸಿದ್ದೇನೆ," ಎಂದು ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.












Click it and Unblock the Notifications