Cyclone Asna: ಸೆ. 5ರ ತನಕ ಮಳೆ, ಕರ್ನಾಟಕದಲ್ಲಿ ಅಧಿಕಾರಿಗಳಿಗೆ ಖಡಕ್ ಸೂಚನೆ
ಬೀದರ್, ಸೆಪ್ಟೆಂಬರ್ 01: ದೇಶದ ವಿವಿಧ ರಾಜ್ಯಗಳಲ್ಲಿ ಅಸ್ನಾ ಚಂಡಮಾರುತದ ಪ್ರಭಾವದಿಂದ ಭಾರೀ ಮಳೆಯಾಗುತ್ತಿದೆ. ಪ್ರವಾಹ ಪರಿಸ್ಥಿತಿಯ ಕಾರಣ ಗುಜರಾತ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಭಾರತೀಯ ಹವಾಮಾನ ಇಲಾಖೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರ ತನಕ ಮಳೆಯಾಗುವ ಮುನ್ಸೂಚನೆ ನೀಡಿದೆ. ಆದ್ದರಿಂದ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಲಾಗಿದ್ದು, ಪರಿಸ್ಥಿತಿ ಎದುರಿಸಲು ಸಿದ್ಧವಾಗಿರುವಂತೆ ನಿರ್ದೇಶನ ನೀಡಲಾಗಿದೆ.
ಗುಜರಾತ್ ರಾಜ್ಯದಲ್ಲಿ ಈಗಾಗಲೇ ಅಸ್ನಾ ಚಂಡಮಾರುತದ ಕಾರಣ ಭಾರೀ ಮಳೆಯಾಗುತ್ತಿದೆ. ಕಚ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮೂಲಕ ಅಸ್ನಾ ಚಂಡಮಾರುತ ಚಲಿಸುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ. ಕರ್ನಾಟಕದ ವಿವಿಧ ಜಿಲ್ಲೆಯಲ್ಲಿಯೂ ಈ ಚಂಡಮಾರುತದ ಪ್ರಭಾವದಿಂದ ಸೆಪ್ಟೆಂಬರ್ 2ರ ತನಕ ಭಾರೀ ಮತ್ತು ಬಳಿಕ ಕೆಲವು ದಿನ ಸಾಧಾರಣ ಮಳೆ ಮುನ್ಸೂಚನೆ ಕೊಡಲಾಗಿದೆ.

ಸಚಿವ ಈಶ್ವರ ಖಂಡ್ರೆ ಸೂಚನೆ: ಅರಣ್ಯ ಮತ್ತು ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಚಂಡಮಾರುತದ ಹಿನ್ನಲೆಯಲ್ಲಿ ಅಧಿಕಾರಿಗಳಿಗೆ ಖಡಕ್ ಸೂಚನೆಯನ್ನು ನೀಡಿದ್ದಾರೆ. 'ಜಿಲ್ಲೆಯ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲಿದ್ದು ಜನರ ಸುರಕ್ಷೆತೆಗೆ ಬೇಕಾಗುವ ಎಲ್ಲಾ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದೇನೆ' ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ.
'ಅಸ್ನಾ ಚಂಡಮಾರುತದ ಪರಿಣಾಮ ಬೀದರ ಜಿಲ್ಲೆಯಲ್ಲಿ ಸೆಪ್ಟೆಂಬರ್ 2ರ ವರೆಗೆ ಭಾರೀ ಮಳೆಯ ನಿರೀಕ್ಷೆಯಿದೆ, ಹಾಗೆಯೇ ಮಳೆಯು ಇನ್ನಷ್ಟು ದಿನಗಳ ಕಾಲ ಮುಂದುವರಿಯುವ ಸಾಧ್ಯತೆ ಇರುವದರಿಂದ ಜಿಲ್ಲೆಯ ರೈತರು ನಾಗರಿಕರು ಎಚ್ಚರಿಕೆಯಿಂದ ಇದ್ದು ಸುರಕ್ಷಿತ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಮಳೆಯಿಂದಾಗುವ ಬೆಳೆ ನಷ್ಟವನ್ನು ತಕ್ಷಣವೇ ಸಂಬಂಧ ಪಟ್ಟ ಅಧಿಕಾರಿಗಳಿಗೆ ವರದಿ ಮಾಡುವಂತೆ ಮನವಿ ಮಾಡುತ್ತೇನೆ' ಎಂದು ಹೇಳಿದ್ದಾರೆ.
ಪಾಕಿಸ್ತಾನ ಹೆಸರಿಸಿರುವ 'ಅಸ್ನಾ' ಚಂಡಮಾರುತ ಮುಂಗಾರು ಮಳೆ ಅವಧಿಯಲ್ಲಿ ಅಪರೂಪದ ಬೆಳವಣಿಗೆಯಾಗಿದೆ ಎಂದು ಹವಾಮಾನ ಇಲಾಖೆ ತಜ್ಞರು ವಿಶ್ಲೇಷಿಸಿದ್ದಾರೆ. 1976ರ ಬಳಿಕ ಮೊದಲ ಬಾರಿಗೆ ಈ ಮಾದರಿಯ ಚಂಡಮಾರುತ ಅರಬ್ಬಿ ಸಮುದ್ರದಲ್ಲಿ ಮುಂಗಾರು ಅವಧಿಯಲ್ಲಿ ರೂಪಗೊಂಡಿದೆ. ಈಗಾಗಲೇ ಕರ್ನಾಟಕದಲ್ಲಿ ಜುಲೈ, ಆಗಸ್ಟ್‌ನಲ್ಲಿ ಸಾಕಷ್ಟು ಮಳೆಯಾಗಿದ್ದು, ಈಗ ಮತ್ತೆ ಮಳೆಯಾದರೆ ಜನರು ಸಂಕಷ್ಟಕ್ಕೆ ಸಿಲುಕಲಿದ್ದಾರೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಭಾನುವಾರ ಉತ್ತರ ಕನ್ನಡ, ಬೀದರ್, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಅತಿ ಹೆಚ್ಚು (115.5-204.5 ಮಿ. ಮೀ) ಮಳೆಯಾಗುವ ಮುನ್ಸೂಚನೆ ನೀಡಿದೆ. ಆದ್ದರಿಂದ ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಅಲ್ಲದೇ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ. ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.












Click it and Unblock the Notifications