ಮಲೆ ಮಹದೇಶ್ವರ ಬೆಟ್ಟದ ತಪ್ಪಲಲ್ಲಿ ಆಡಿ ಕಾರ್ ಪಲ್ಟಿ; ಚಾಲಕ ಸಾವು, ಕಾನ್ಸ್‌ಟೇಬಲ್‌ಗೆ ಗಾಯ
ಚಾಮರಾಜನಗರ, ನವೆಂಬರ್, 27: ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಹಾಗೆಯೇ ಆಡಿ ಕಾರೊಂದು ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟು ಮತ್ತೋರ್ವನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ತಪ್ಪಲಾದ ತಾಳುಬೆಟ್ಟದಲ್ಲಿ ಇಂದು (ನವೆಂಬರ್ 27) ನಡೆದಿದೆ.
ಕಾರು ಚಲಾಯಿಸುತ್ತಿದ್ದ ಹರೀಶ್ ಗೌಡ ಎಂಬವರು ಸ್ಥಳದಲ್ಲೇ ಅಸುನೀಗಿದ್ದು, ಮೈಸೂರು ಪೊಲೀಸ್ ಕಾನ್ಸ್‌ಟೇಬಲ್ ವಿಜಯ್ ಕುಮಾರ್ ಎಂಬಾತ ತೀವ್ರವಾಗಿ ಗಾಯಗೊಂಡಿದ್ದಾರೆ. ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಮೂರನೇ ತಿರುವಿನಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಈ ಅವಘಡ ನಡೆದಿದೆ.

ಮೈಸೂರಿನಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಇವರಿಬ್ಬರು ಬರುತ್ತಿದ್ದರು ಎಂದು ತಿಳಿದುಬಂದಿದ್ದು, ಸದ್ಯ ಸ್ಥಳಕ್ಕೆ ಮಲೆ ಮಹದೇಶ್ವರ ಬೆಟ್ಟದ ಪೊಲೀಸರು ಭೇಟಿ ಕೊಟ್ಟು ಪ್ರಕರಣ ದಾಖಲು ಮಾಡಿದ್ದಾರೆ. ಇನ್ನು ಆಡಿ ಕಾರನ್ನು ಪೊಲೀಸರು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಕಾರು ಪಲ್ಟಿ, ಮಗು ಸಾವು: ಮದುವೆ ಮುಗಿಸಿಕೊಂಡು ವಾಪಸ್ ಹೋಗುವಾಗ ಕಾರು ಪಲ್ಟಿಯಾಗಿ ಓರ್ವ ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಚಳ್ಳಕೆರೆ ತಾಲೂಕಿನಲ್ಲಿ ನಡೆದಿದೆ.
ಚಳ್ಳಕೆರೆ ತಾಲೂಕಿನ ವೀರದೀಮ್ಮನಹಳ್ಳಿ ರಾಷ್ಟ್ರೀಯ ಹೆದ್ದಾರಿ 150ಎ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ. ಮೊಳಕಾಲ್ಮೂರು ತಾಲೂಕಿನ ರಾಂಪುರ ಗ್ರಾಮದಲ್ಲಿ ಮದುವೆ ಮುಗಿಸಿಕೊಂಡು ವಾಪಸ್ ಹೋಗುವಾಗ ಬೈಕ್ ಸವಾರ ಅಡ್ಡ ಬಂದಿದ್ದರಿಂದ ಬೈಕ್ ತಪ್ಪಿಸಲು ಹೋದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ.
ಗಾಯಗೊಂಡವರನ್ನು ಗೌರಿಬಿದನೂರಿನವರು ಎಂದು ತಿಳಿದುಬಂದಿದೆ. ರಾಂಪುರದಲ್ಲಿ ಸಂಬಂಧಿಕರ ಮದುವೆಗೆ ಬಂದಿದ್ದು, ವಾಪಸ್ ಊರಿಗೆ ಹೋಗುವಾಗ ಈ ಘಟನೆ ನಡೆದಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications