ಚಾಮರಾಜನಗರಕ್ಕೆ ಬಂದ್ರೆ ಅಧಿಕಾರಿ ಕಳೆದುಕೊಳ್ಳುತ್ತೇನೆ ಅನ್ನೋದು ಸುಳ್ಳು, ಇದು ಮೂಢನಂಬಿಕೆ; ಸಿಎಂ ಸಿದ್ದರಾಮಯ್ಯ
ಚಾಮರಾಜನಗರ, ಏಪ್ರಿಲ್, 25: ಚಾಮರಾಜನಗರಕ್ಕೆ ಸಿಎಂ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎನ್ನುವ ಮಾತಿತ್ತು. ಆದರೆ, ಸಿದ್ದಾರಾಮಯ್ಯ ಅವರು ಇದಕ್ಕೆ ಸೆಡ್ಡು ಹೊಡೆದು ಸಿಎಂ ಆದ ಬಳಿಕ ಹಲವು ಬಾರಿ ಭೇಟಿ ನೀಡಿದ್ದಾರೆ. ಹಾಗೆಯೇ ಸಚಿವ ಸಂಪುಟ ಸಭೆಯನ್ನು ಕೂಡ ಮಲೆ ಮಹದೇಶ್ವರ ಬೆಟ್ಟದಲ್ಲೇ ಮಾಡಿದ್ದು, ಬಳಿಕ ಇಂದು (ಏಪ್ರಿಲ್ 24) ದೇವಸ್ಥಾನಕ್ಕೂ ಭೇಟಿ ನೀಡಿದ್ದಾರೆ. ಅಲ್ಲದೆ, ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಸುತ್ತೂರು ಮಠಕ್ಕೆ ಭೇಟಿ ನೀಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಚಾಮರಾಜನಗರಕ್ಕೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆಯಾಗಿದೆ. ಇಲ್ಲಿಗೆ ಬಂದಾಗಲೆಲ್ಲ ನನ್ನ ಕುರ್ಚಿ ಗಟ್ಟಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು.

ಚಾಮರಾಜನಗರಕ್ಕೆ ಭೇಟಿ ನೀಡಿದರೆ ಅಧಿಕಾರ ಕಳಚುತ್ತದೆ ಎಂಬುದರಲ್ಲಿ ಯಾವುದೇ ಸತ್ಯ ಇಲ್ಲ. ಈ ಮೌಢ್ಯಗಳಿಂದಲೇ ಸಮಾಜದಲ್ಲಿ ಪ್ರಗತಿಗೆ ಅಡ್ಡಿ ಆಗಿದೆ. ನಾನು ಮೊದಲ ಬಾರಿಗೆ ಸಿಎಂ ಆಗಿದ್ದಾಗ ಹೆಚ್ಚು ಬಾರಿ ಜಿಲ್ಲೆಗೆ ಭೇಟಿ ನೀಡಿದ್ದೆ ಎಂದು ಹೇಳಿದರು.
ಹಾನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರದ ಸಭೆಯಲ್ಲಿ ಹಲವು ಸುಧಾರಣಾ ಕ್ರಮಗಳಿಗೆ ಸೂಚನೆ ನೀಡಿದ್ದೇನೆ. ಶುಚಿತ್ವ, ಮದ್ಯ ನಿಷೇಧ, ತಿರುಪತಿ ರೀತಿಯಲ್ಲಿ ಲಾಡುಗಳನ್ನು ತಯಾರಿಸಿ ಕಡಿಮೆ ದರದಲ್ಲಿ ನೀಡಲು ತಿಳಿಸಿದ್ದೇನೆ. ಮೂಲಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡುವಂತೆಯೂ ತಿಳಿಸಿದ್ದೇನೆ ಎಂದು ಹೇಳಿದರು.
ಹನೂರು ತಾಲ್ಲೂಕಿನಲ್ಲಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಸಚಿವ ಸಂಪುಟ ಸಭೆ ನಡೆಸಿದ ಬಳಿಕ ಇಂದು ಬೆಳಗ್ಗೆ ಅಂದರೆ ಶುಕ್ರವಾರ ಸಿಎಂ ಸಿದ್ದರಾಮಯ್ಯ ಅವರು ಮಾದಪ್ಪನ ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಈ ವೇಳೆ ಸಿಎಂ ಸಿದ್ದಾರಾಮಯ್ಯಗೆ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಮತ್ತು ಸಚಿವ ಹೆಚ್.ಸಿ.ಮಹದೇವಪ್ಪ ಸಾಥ್ ನೀಡಿದರು.
ಅಧಿಕಾರಿಗಳಿಗೆ ಖಡಕ್ ಸೂಚನೆ: ಮಲೆ ಮಹದೇಶ್ವರ ಬೆಟ್ಟ ಇನ್ಮುಂದೆ. ಮದ್ಯಪಾನ ಮುಕ್ತ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಿ ಮಹತ್ವದ ವಿಚಾರಗಳ ಬಗ್ಗೆ ಸಭೆ ನಡೆಸಿದ್ದು, ಇಲ್ಲಿಯವರೆಗೂ ಬೆಟ್ಟದಲ್ಲಿ, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಾರಾಟ ಮುಕ್ತವಿತ್ತು. ಆದರೆ ಇನ್ಮುಂದೆ ಹೊರಗಿನಿಂದ ತರುವುದನ್ನು ತಡೆಯಬೇಕು ಜಿಲ್ಲಾ ಮಟ್ಟದ ಮತ್ತು ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರವಾಸಿಗರ ಶೆಲ್ಟರ್ ಮತ್ತು ಶೌಚಾಲಯಗಳ ಕಾಮಗಾರಿ ಪೂರ್ಣಗೊಳ್ಳದ ಬಗ್ಗೆ ಸಿಎಂ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು. ಅಷ್ಟೇ ಅಲ್ಲದೆ, ಪ್ರಾಧಿಕಾರದ ಕೆಲಸ ಕಾರ್ಯಗಳು, ಕಾಮಗಾರಿಗಳು ಸೂಕ್ತವಾಗಿ, ವೇಗವಾಗಿ ನಡೆಯಲು ಒಬ್ಬ ಎಇಇಯನ್ನು ಪ್ರಾಧಿಕಾರಕ್ಕೆ ನೇಮಕ ಮಾಡಲು ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿಗೆ ಸೂಚನೆ ನೀಡಿದರು.
ಪ್ರಾಧಿಕಾರ ಮತ್ತು ಮಹದೇಶ್ವರ ಬೆಟ್ಟಕ್ಕೆ ಸೇರಿದ ಜಾಗದಲ್ಲಿ ನೆಲೆಸಿರುವ 13 ಕುಟುಂಬಗಳಿಗೆ ಪರ್ಯಾಯ ಸ್ಥಳ ಒದಗಿಸಿ ಸ್ಥಳಾಂತರಿಸುವ ಮತ್ತು ಉಳಿದಿರುವವರನ್ನು ಹಾಗೇ ಉಳಿಸಿ, ಹೊಸದಾಗಿ ವಾಣಿಜ್ಯ ಉದ್ದೇಶದ ನಿರ್ಮಾಣಗಳಿಗೆ ಅವಕಾಶ ಆಗದಂತೆ ತಡೆಯುವ ಬಗ್ಗೆ ಚರ್ಚೆ ನಡೆಸಿದರು. ಪ್ರಾಧಿಕಾರದಲ್ಲಿ ಕೆಲಸ ಮಾಡುವ 66 ಕಾರ್ಮಿಕ ಕುಟುಂಬಗಳಿಗೆ ತಲಾ 20 ಲಕ್ಷ ರೂಪಾಯಿ ವೆಚ್ಚದಲ್ಲಿ, ಒಟ್ಟು 12ರಿಂದ13 ಕೋಟಿ ರೂಪಾಯಿ ವೆಚ್ಚದಲ್ಲಿ ಆದಷ್ಟು ಬೇಗ ನೂತನ ಮನೆ ನಿರ್ಮಿಸಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಮಲೆ ಮಹದೇಶ್ವರ ಬೆಟ್ಟದ ಪ್ರಸಾದ ಲಾಡುಗೆ, ತಿರುಪತಿ ದೇವಸ್ಥಾನದ ಮಾದರಿಯಲ್ಲಿ ನಂದಿನಿ ತುಪ್ಪ ಬಳಸಿ, ಪ್ರಸಾದದ ಗುಣಮಟ್ಟವನ್ನು ಮತ್ತಷ್ಟು ಉನ್ನತೀಕರಿಸುವ ಬಗ್ಗೆ ಚರ್ಚೆ ಮಾಡಿದರು ಎಂದು ತಿಳಿದುಬಂದಿದೆ.












Click it and Unblock the Notifications