ನ.25 ರಂದು ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಲಿರುವ ಸಿಎಂ ಯಡಿಯೂರಪ್ಪ
ಚಾಮರಾಜನಗರ, ನವೆಂಬರ್ 25: ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಸಲುವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನ.25 ಮತ್ತು 26 ರಂದು ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ಯಡಿಯೂರಪ್ಪ ಮಲೆ ಮಹದೇಶ್ವರನ ದರ್ಶನ ಪಡೆಯಲಿದ್ದಾರೆ.
ಬುಧವಾರ ಸಂಜೆ 5 ಗಂಟೆಗೆ ಮೈಸೂರಿನಿಂದ ಹೆಲಿಕಾಫ್ಟರ್ ಮೂಲಕ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸಲಿರುವ ಸಿಎಂ, 5.30ಕ್ಕೆ ಅಧಿಕಾರಿಗಳೊಂದಿಗೆ ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರದ ಸಭೆ ನಡೆಸಲಿದ್ದಾರೆ. ಬಳಿಕ ಬೆಟ್ಟದಲ್ಲೇ ವಾಸ್ತವ್ಯ ಹೂಡಲಿರುವ ಸಿಎಂ ಯಡಿಯೂರಪ್ಪ, ನ.೨೬ರಂದು ಮಹದೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್ ಸೇರಿದಂತೆ ಹಲವರು ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ.

ಇದೇ ವೇಳೆ ಬೆಟ್ಟದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿರುವ ಸಿಎಂ, ಗುರುವಾರ ಮಧ್ಯಾಹ್ನ ಹೆಲಿಕಾಫ್ಟರ್ ಮೂಲಕ ಬೆಂಗಳೂರಿಗೆ ಹಿಂದಿರುಗಲಿದ್ದಾರೆ.












Click it and Unblock the Notifications