ಚಾಮರಾಜನಗರ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ರೈತರ ಪ್ರತಿಭಟನೆ
ಚಾಮರಾಜನಗರ, ಡಿಸೆಂಬರ್ 09: ರೈತರ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘ ಸದಸ್ಯರು ಇಂದು ( ಡಿಸೆಂಬರ್ 09) ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿದರು. ಚಾಮರಾಜನಗರದ ಜಿಲ್ಲಾಡಳಿತ ಭವನದ ಮುಖ್ಯ ಗೇಟ್ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆಯಲ್ಲಿ ಜಿಲ್ಲಾಡಳಿತ ಭವನಕ್ಕೆ ತೆರಳಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ವೇಳೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ರೈತರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ದೆಹಲಿಯಲ್ಲಿ ರೈತರ ಪರ ಹೋರಾಟ ನಡೆಸುತ್ತಿರುವ ಜಗಜಿನ ಸಿಂಗ್ ದಲೈವಾಲ ಉಪವಾಸ ಸತ್ಯಾಗ್ರಹ 14ನೇ ದಿನಕ್ಕೆ ಮುಂದುವರೆದಿದ್ದು ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಪಂಜಾಬ್, ಹರಿಯಾಣ ಭಾಗದಲ್ಲಿ ನಿರಂತರವಾಗಿ ಚಳವಳಿ ನಡೆಸುತ್ತಿರುವ ರೈತರು ಎರಡು ದಿನಗಳ ಹಿಂದೆ ದೆಹಲಿಗೆ ಕಾಲ್ನಡಿಗೆ ಮೂಲಕ ಹೋಗಲು ಬರುತ್ತಿದ್ದಾಗ ಪೊಲೀಸರು ತಡೆದು ಅಶ್ರುವಾಯು ಸಿಡಿಸಿ, ಜಲ ಪಿರಂಗಿ ಪ್ರಯೋಗ ಮಾಡಿದ್ದಾರೆ. ಇದರಿಂದಾಗಿ ಹಲವು ರೈತರು ಆಸ್ಪತ್ರೆ ಸೇರಿದ್ದಾರೆ. ಇಂತಹ ದಬ್ಬಾಳಿಕೆಯ ಪೊಲೀಸ್ ದೌರ್ಜನ್ಯ ಖಂಡನೀಯ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

ರೈತ ಮುಖಂಡ ದಲೈವಾಲ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು ಈ ಸಂಬಂಧ ಅಧಿವೇಶನದಲ್ಲಿ ಯಾವುದೇ ಸಂಸದರು ಧ್ವನಿ ಎತ್ತದಿರುವುದು ವಿಪರ್ಯಾಸ, ಕೇಂದ್ರ ಸರ್ಕಾರವು ಪ್ರತಿಭಟನಾನಿರತರನ್ನು ಮಾತುಕತೆಗೆ ಆಹ್ವಾನಿಸದೆ ನಿರ್ಲಕ್ಷತನ ತೋರುತ್ತಿದೆ. ಕೂಡಲೇ ಸಂಸದರು ಕೇಂದ್ರ ಸರ್ಕಾರದ ಗಮನ ಸೆಳೆದು ರೈತರ ಹಿತ ಕಾಪಾಡಬೇಕು ಎಂದು ಪ್ರತಿಭಟನಾ ನಿರತ ರೈತರು ಆಗ್ರಹಿಸಿದರು.
ಎಲ್ಲ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಗೆ ತರಬೇಕು. ಡಾ ಸ್ವಾಮಿನಾಥನ್ ವರದಿಯಂತೆ ಕನಿಷ್ಠ ಬೆಂಬಲ ಬೆಲೆ ನಿಗದಿಯಾಗಬೇಕು. ರೈತರ ಸಾಲ ಸಂಪೂರ್ಣ ಮನ್ನಾ ಆಗಬೇಕು. 60 ವರ್ಷ ತುಂಬಿದ ರೈತರಿಗೆ ಪಿಂಚಣಿ ಯೋಜನೆ ಜಾರಿಗೆ ಬರಬೇಕು. ರೈತರಿಗಾಗಿ ಹೋರಾಟ ಮಾಡಿದ ರೈತರ ಮೇಲೆ ಇರುವ ಎಲ್ಲ ಕೇಸುಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಾಪಸ್ ಪಡೆಯಬೇಕು. ಫಸಲ್ ಭೀಮಾ ಬೆಳೆ ವಿಮೆ ಯೋಜನೆ ತಿದ್ದುಪಡಿಯಾಗಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನಾ ಸ್ಥಳಕ್ಕಾಗಮಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಮೂಲಕ ರೈತರ ಸಮಸ್ಯೆಗಳ ಕುರಿತು ಅಧಿವೇಶನದಲ್ಲಿ ಚರ್ಚಿಸುವಂತೆ ಸಂಸದ ಸುನೀಲ್ ಬೋಸ್ ಅವರಿಗೆ ಮನವಿ ಸಲ್ಲಿಸಿ ಪ್ರತಿಭಟನೆಯನ್ನು ಅಂತ್ಯಗೊಳಿಸಲಾಯಿತು. ಪ್ರತಿಭಟನೆಯಲ್ಲಿ ಒಕ್ಕೂಟದ ಹೊನ್ನೂರು ಪ್ರಕಾಶ್, ಉಡಿಗಾಲ ರೇವಣ್ಣ, ಪಟೇಲ್ ಶಿವಮೂರ್ತಿ, ಮೂಕಹಳ್ಳಿ ಮಹದೇವಸ್ವಾಮಿ, ಸತೀಶ್, ಶಿವಸ್ವಾಮಿ, ನಾಗೇಂದ್ರ, ಮಹೇಶ್, ಮಾದೇಶ್, ರಘು, ಸುಂದ್ರಪ್ಪ, ರಾಜು ಸೇರಿದಂತೆ ಇತರರು ಭಾಗವಹಿಸಿದ್ದರು.












Click it and Unblock the Notifications