ಕೇವಲ 30 ದಿನದಲ್ಲಿ ಮಾದಪ್ಪನ ಹುಂಡಿಯಲ್ಲಿ ಸಂಗ್ರಹವಾದ ಹಣ ಎಷ್ಟು ಕೋಟಿ ಗೊತ್ತಾ?-ಇಲ್ಲಿದೆ ಅಂಕಿಸಂಶಗಳ ವಿವರ
ಚಾಮರಾಜನಗರ, ಮೇ, 30: ಹನೂರು ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ ನಡೆದಿದ್ದು, ಈ ಬಾರಿ ಕೇವಲ 30 ದಿನಗಳ ಅವಧಿಯಲ್ಲಿ 2.58 ಕೋಟಿ ರೂಪಾಯಿ ಸಂಗ್ರಹವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದರೆ ಈ ಯಾವೆಲ್ಲ ಮೂಲಗಳಿಂದ ಬಂದಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿರವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಣಾವಲಿನಲ್ಲಿ ಎಣಿಕೆ ಕಾರ್ಯ ನಡೆಯಿತು.

ಈ ಬಾರಿ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆ ಇದ್ದಿದ್ದರಿಂದ ಪೋಷಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಅಲ್ಲದೆ, ಸರ್ಕಾರಿ ರಜಾ ದಿನಗಳು ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಇದರಿಂದ ಹರಕೆಯ ರೂಪದಲ್ಲಿ 2,58,44,097 ನಗದು 93 ಗ್ರಾಂ ಚಿನ್ನ ಹಾಗೂ 3.350 ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ.
ಇದಲ್ಲದೆ, ಸೌದಿ ಅರೇಬಿಯಾ, ಜಪಾನ್, ನೇಪಾಳ, ಕತಾರ್ ದೇಶದ 4 ವಿದೇಶಿ ನೋಟುಗಳು, ಚಲಾವಣೆಯಲ್ಲಿ ಇಲ್ಲದ 2,000 ರೂಪಾಯಿ ಮುಖಬೆಲೆಯ 25 ನೋಟುಗಳು ಹುಂಡಿಯಲ್ಲಿ ಪತ್ತೆಯಾಗಿದೆ. ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.
ದಾಖಲೆ ಮಟ್ಟದಲ್ಲಿ ಹಣ ಸಂಗ್ರಹ: ಹಾಗೆಯೇ ಇತ್ತೀಚೆಗಷ್ಟೇ ಹನೂರು ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾರ್ಚ್ 27ರಂದು ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಈ ವೇಳೆ ಕೇವಲ 25 ದಿನಗಳ ಅವಧಿಯಲ್ಲಿ ದಾಖಲೆ ಮಟ್ಟದಲ್ಲಿ ಹಣ ಸಂಗ್ರಹವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿತ್ತು. ಹಾಗಾದರೆ ಎಷ್ಟು ಎನ್ನುವ ಅಂಕಿಅಂಶಗ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಮಲೆ ಮಹದೇಶ್ವರನಿಗೆ ಕೇವಲ 25 ದಿನಗಳ ಅವದಿಯಲ್ಲಿ ದಾಖಲೆಯ 3.13 ಕೋಟಿ ರೂಪಾಯಿ ಸಂಗ್ರಹವಾಗಿದೆ. ಮಲೆ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಮಂಗಳವಾರ (ಮಾರ್ಚ್ 27) ಬೆಳಗ್ಗೆ 8 ಗಂಟೆಗೆ ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು. ಎಣಿಕೆ ಕಾರ್ಯವು ರಾತ್ರಿ 10:30ರ ವರೆಗೂ ನಡೆಯಿತು.
ಈ ಬಾರಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ, ಸರ್ಕಾರಿ ರಜಾ ದಿನಗಳು ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಹೆಚ್ಚಿನ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ ಹಣ ಚಿನ್ನ ಹಾಗೂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ. ಹುಂಡಿಗಳ ಎಣಿಕೆಯಲ್ಲಿ ಈ ಬಾರಿ 3,13,00,931 ರೂಪಾಯಿ ಸಂಗ್ರಹವಾಗಿದೆ. ಹಾಗೂ ಚಿನ್ನ 47 ಗ್ರಾಂ ಮತ್ತು ಬೆಳ್ಳಿ 2 ಕೆಜಿ 309 ಗ್ರಾಂ ಸಂಗ್ರಹವಾಗಿದೆ ಎಂದು ತಿಳಿದುಬಂದಿದೆ.
ಅಷ್ಟೇ ಅಲ್ಲದೆ, ಯುಎಸ್‌ಎ, ಬಾಂಗ್ಲಾದೇಶ, ನೇಪಾಳ, ಮಲೇಶಿಯಾ ಸೇರಿದಂತೆ 7 ವಿದೇಶಿ ನೋಟುಗಳು, ಇದಲ್ಲದೆ ಚಲಾವಣೆಯಲ್ಲಿ ಇಲ್ಲದ 2,000 ಮುಖಬೆಲೆಯ 26 ನೋಟುಗಳು ಹುಂಡಿಯಲ್ಲಿ ಹಾಕಿದ್ದಾರೆ. ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್, ಲೆಕ್ಕ ಅಧೀಕ್ಷಕ ನಾಗೇಶ್, ಬ್ಯಾಂಕ್ ಆಫ್ ಬರೋಡ ನೌಕರರು ಹಾಗೂ ಪ್ರಾಧಿಕಾರದ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.












Click it and Unblock the Notifications