Kichcha Sudeep: ವಿ. ಸೋಮಣ್ಣ ಪರ ಕಿಚ್ಚ ಸುದೀಪ್ ಪ್ರಚಾರ; ಎಲ್ಲಿ? ಯಾವಾಗ?
2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕೆಲವೇ ದಿನಗಳು ಮಾತ್ರ ಬಾಕಿ ಇರುವಾಗ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ಗೆಲುವಿಗಾಗಿ ಕೊನೆಯ ಹಂತದ ಪ್ರಯತ್ನ ನಡೆಸುತ್ತಿದ್ದಾರೆ.
ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳ ಗೆಲುವಿಗೆ ರಾಜ್ಯ ನಾಯಕರೊಂದಿಗೆ ರಾಷ್ಟ್ರೀಯ ನಾಯಕರೂ ಕ್ಷೇತ್ರಗಳಲ್ಲಿ ಭರ್ಜರಿ ಸಮಾವೇಶ ಹಾಗೂ ರೋಡ್ ಶೋ ಮೂಲಕ ಮತಯಾಚನೆ ಮಾಡುತ್ತಿದ್ದಾರೆ. ಮೇ 10ರಂದು ನಡೆಯುವ ಮತದಾನಕ್ಕೂ ಮುನ್ನ ಮತದಾರರ ಮನಗೆಲ್ಲಲು ನಾನಾ ಕಸರತ್ತು ನಡೆಸುತ್ತಿದ್ದಾರೆ.

ಈ ಬಾರಿಯ ಚುನಾವಣೆಯಲ್ಲಿ ರಾಜಕೀಯ ನಾಯಕರು ಮಾತ್ರವಲ್ಲದೆ, ಸಿನಿಮಾ ತಾರೆಯರು ಪ್ರಚಾರದ ಅಖಾಡದಲ್ಲಿ ಧೂಳೆಬ್ಬಿಸುತ್ತಿದ್ದಾರೆ. ಕಳೆದ ಹತ್ತು ದಿನಗಳಿಂದ ಬಿಜೆಪಿ ಅಭ್ಯರ್ಥಿಗಳ ಪರ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ.
ಇದೇ ವೇಳೆ ಚಂದನವನದ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್, ನಟಿಯರಾದ ರಮ್ಯಾ ಮತ್ತು ನಿಶ್ವಿಕಾ ನಾಯ್ಡು ಅವರು ಮಾಜಿ ಸಿಎಂ ಹಾಗೂ ವರುಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಪರ ಭರ್ಜರಿ ಪ್ರಚಾರದಲ್ಲಿ ಭಾಗವಹಿಸಿದರು.
ಸಿದ್ದರಾಮಯ್ಯ ಪರ ಶಿವರಾಜಕುಮಾರ್ ಪ್ರಚಾರ ಮಾಡಿರುವುದಕ್ಕೆ ವರುಣಾ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯಗೆ ಸೋಲಿನ ಭೀತಿ ಎದುರಾಗಿದ್ದು, ಸಿನಿಮಾ ಸ್ಟಾರ್‌ಗಳೊಂದಿಗೆ ಕ್ಷೇತ್ರಕ್ಕೆ ಬಂದಿದ್ದಾರೆ ಎಂದು ಹೇಳಿದ್ದಾರೆ.

ಇನ್ನು ಬೆಂಗಳೂರಿನ ಗೋವಿಂದರಾಜನಗರದಲ್ಲಿ ಪುನೀತ್ ರಾಜಕುಮಾರ್ ಹೆಸರಿನಲ್ಲಿ ದೊಡ್ಡ ಆಸ್ಪತ್ರೆ ಕಟ್ಟಿಸಿದ್ದೇನೆ. ಆದರೂ, ಶಿವರಾಜಕುಮಾರ್ ಅವರು ನನ್ನ ವಿರುದ್ಧ ಪ್ರಚಾರ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ವಿ. ಸೋಮಣ್ಣ ಪರ ಕಿಚ್ಚ ಸುದೀಪ್ ಪ್ರಚಾರ
ಇನ್ನು ಕಿಚ್ಚ ಸುದೀಪ್ ಅವರು ವಿ. ಸೋಮಣ್ಣ ಅವರು ಸ್ಪರ್ಧಿಸುತ್ತಿರುವ ಇನ್ನೊಂದು ಕ್ಷೇತ್ರ ಚಾಮರಾಜನಗರದಲ್ಲಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಚಾಮರಾಜನಗರ ಕ್ಷೇತ್ರದಲ್ಲಿ ರೋಡ್ ಶೋ ಮೂಲಕ ಬಿಜೆಪಿ ಅಭ್ಯರ್ಥಿ ಪರ ಮತಯಾಚನೆ ಮಾಡಲಿದ್ದಾರೆ.
ಚಾಮರಾಜನಗರ ಕ್ಷೇತ್ರ ಪ್ರಚಾರದ ಅಖಾಡಕ್ಕೆ ಕಿಚ್ಚ ಸುದೀಪ್ ಎಂಟ್ರಿ ಕೊಡಲಿದ್ದು, ಚಾಮರಾಜನಗರ ಜಿಲ್ಲೆಯ ಮೂರು ಕ್ಷೇತ್ರಗಳಲ್ಲಿ ರೋಡ್ ಶೋ ಮೂಲಕ ಬಿಜೆಪಿ ಅಭ್ಯರ್ಥಿಗಳ ಪರ ಮತಬೇಟೆ ನಡೆಸಲಿದ್ದಾರೆ. ಚಾಮರಾಜನಗರ ಜಿಲ್ಲಾದ್ಯಂತ ಇರುವ ನಾಯಕ ಸಮುದಾಯ ಮತ್ತು ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಗಾಳ ಹಾಕಲೂ ಬಿಜೆಪಿ ತಂತ್ರ ರೂಪಿಸಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಅಭ್ಯರ್ಥಿ ನಿರಂಜನ್ ಕುಮಾರ್, ಚಾಮರಾಜನಗರದ ವಿ. ಸೋಮಣ್ಣ ಮತ್ತು ಕೊಳ್ಳೇಗಾಲದ ಎನ್. ಮಹೇಶ್ ಪರವಾಗಿ ಕಿಚ್ಚ ಸುದೀಪ್ ರೋಡ್ ಶೋ ಮೂಲಕ ಮತ ಪ್ರಚಾರ ನಡೆಸಲಿದ್ದು, ರೋಡ್ ಶೋ ವೇಳೆ ಸ್ಥಳೀಯ ಬಿಜೆಪಿ ನಾಯಕರ ಸಾಥ್ ನೀಡಲಿದ್ದಾರೆ.
2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಾಗಲೇ ನಾಮಪತ್ರ ಸಲ್ಲಿಕೆ, ಪರಿಶೀಲನೆ ಮತ್ತು ನಾಮಪತ್ರ ವಾಪಸ್ ಪ್ರಕ್ರಿಯೆ ಕೊನೆಗೊಂಡಿದೆ. ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದರೆ, ಮೇ 13ರಂದು ಫಲಿತಾಂಶ ಪ್ರಕಟವಾಗಲಿದ್ದು, ಬಳಿಕ ಯಾವ ಪಕ್ಷ ರಾಜ್ಯದಲ್ಲಿ ಸರ್ಕಾರ ರಚಿಸಲಿದೆ ಎಂಬ ಕುತೂಹಲ ಮೂಡಿದೆ.












Click it and Unblock the Notifications