ಲೋಕಾಸಭಾ ಚುನಾವಣೆ: ತಾವು ಸ್ಪರ್ಧಿಸುವ ಕ್ಷೇತ್ರದ ಬಗ್ಗೆ ಗುಟ್ಟು ಬಿಟ್ಕೊಟ್ರಾ ಜಗದೀಶ್ ಶೆಟ್ಟರ್?
ಚಾಮರಾಜನಗರ, ಫೆಬ್ರವರಿ, 14: ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು, ನಾನು ಟಿಕೆಟ್ ಆಕಾಂಕ್ಷಿಯೇ ಅಲ್ಲ, ಒಂದು ವೇಳೆ ಪಕ್ಷದ ವರಿಷ್ಠರು ಹೇಳಿದರೆ ಹೈಕಮಾಂಡ್ ಸೂಚನೆಯಂತೆ ನಡೆದುಕೊಳ್ಳುತ್ತೇನೆ ಎಂದಿದ್ದಾರೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಇಂದು ಮಾಧ್ಯಗಳೊಂದಿಗೆ ಮಾತನಾಡಿದ ಶೆಟ್ಟರ್, ಹಾಸನ ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆ ಗೊಂದಲದ ಬಗ್ಗೆಯೂ ಮಾತನಾಡಿದ್ದು, ಪ್ರೀತಂಗೌಡ ಹೇಳಿಕೆ ವೈಯುಕ್ತಿಕವಾಗಿದೆ. ಪಕ್ಷದಲ್ಲಿ ವರಿಷ್ಠರ ತೀರ್ಮಾನವೇ ಅಂತಿಮ. ವರಿಷ್ಠರು ಏನು ಹೇಳುತ್ತಾರೆ ಅದಕ್ಕೆ ಎಲ್ಲರೂ ತಲೆ ಬಾಗಲೇಬೇಕು ಎಂದು ನಿಲುವು ವ್ಯಕ್ತಪಡಿಸಿದರು.

ಈ ಬಗ್ಗೆ ಅಮಿತ್ ಶಾ ಅವರು ಸಭೆಯಲ್ಲಿ ಏನು ಹೇಳಿರಬಹುದು ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ. ಅವರು ಪ್ರಮುಖವಾಗಿ ಸುತ್ತೂರು ಮಠದ ಕಾರ್ಯಕ್ರಮಕ್ಕೆ ಬಂದಿದ್ದರು. ಆ ಸಮಯದಲ್ಲಿ ಪಕ್ಷ ಸಂಘಟನೆ ಬಗ್ಗೆ ಕೆಲವು ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಆ ಸಂದರ್ಭದಲ್ಲಿ ನಾನು ಬೇರೆ ಬೇರೆ ಕಾರ್ಯಕ್ರಮಗಳಲ್ಲಿ ಬ್ಯುಸಿಯಾಗಿದ್ದ ಕಾರಣ ಅಮಿತ್ ಶಾ ಅವರನ್ನು ಭೇಟಿ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದರು.
ಅಲ್ಲದೇ ದೆಹಲಿಯ ಹಾದಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲೆ ಲಾಟಿ ಪ್ರಹಾರ ನಡೆಸುವ ಮೂಲಕ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ ಎಂಬ ಪ್ರತಿಪಕ್ಷಗಳ ಆರೋಪದ ಬಗ್ಗೆ ಉತ್ತರಿಸಿದ ಜಗದೀಶ್ ಶೆಟ್ಟರ್, ಅಲಿಗೇಶನ್ ಮಾಡುವವರು ಮಾಡುತ್ತಲೇ ಇರುತ್ತಾರೆ ಎಂದರು.
ಆದರೆ ವಾಸ್ತವವಾಗಿ ಕೇಂದ್ರ ಸರ್ಕಾರ ರೈತರ ಬೇಡಿಕೆಗಳಿಗೆ ಈ ಹಿಂದೆಯೂ ಸ್ಪಂದಿಸಿದೆ, ಮುಂದೆಯೂ ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸ್ಪಂದನೆ ನೀಡುತ್ತಾರೆ. ರೈತರ ಜೊತೆ ಚರ್ಚೆಗೆ ಕೇಂದ್ರ ಸರ್ಕಾರ ಸಿದ್ಧವಿದೆ. ರೈತ ಮುಖಂಡರು ಸಂಬಂಧಪಟ್ಟ ಸಚಿವರ ಜೊತೆ ಕುಳಿತು ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾಡುಗೊಲ್ಲರಿಗೆ ಎಸ್ಟಿ ಭಾಗ್ಯ: ಲೋಕಸಭಾ ಚುನಾವಣೆ ಮುಗಿದ ಬಳಿಕ ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲಾಗುವುದು. ಇದಕ್ಕೆ ಕೇಂದ್ರ ಸರ್ಕಾರದ ಸಹಮತ ಇದೆ. ಕೇಂದ್ರ ಸರ್ಕಾರದ ಮೇಲೆ ನಂಬಿಕೆ ಇಡಿ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಭರವಸೆ ನೀಡಿದ್ದರು.
ನಿನ್ನೆ (ಫೆಬ್ರವರಿ 13) ಬೆಂಗಳೂರಿನ ಜೆಡಿಎಸ್ ಪಕ್ಷದ ಕಛೇರಿಯಲ್ಲಿ ಹಿರಿಯೂರು, ಚಿತ್ರದುರ್ಗ, ತುಮಕೂರು, ಚಿಕ್ಕನಾಯಕನಹಳ್ಳಿ, ಶಿರಾ, ವಿವಿಧ ಭಾಗಗಳ ಮುಖಂಡರ ಜೊತೆ ನಡೆದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದ್ದರು.
ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿರುವ ಈ ಸಣ್ಣ ಜನಾಂಗದ ಸ್ಥಿತಿಗತಿಗಳನ್ನು ಅರಿತುಕೊಂಡು ಸಮುದಾಯಕ್ಕೆ ನ್ಯಾಯ ಕೊಡಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಇವರಿಗೆ ಪತ್ರ ಬರೆದು, ಭೇಟಿ ಮಾಡಿ ಮಾತುಕತೆ ನಡೆಸಿ, ಕೈಮುಗಿದು ಮನವಿ ಮಾಡಲಾಯಿತು ಎಂದಿದ್ದರು.
ಮನವಿಗೆ ಸ್ಪಂದಿಸಿದ ಪ್ರಧಾನಿ ಹಾಗೂ ಗೃಹ ಸಚಿವರು ಕಾಡುಗೊಲ್ಲರಿಗೆ ನ್ಯಾಯ ಒದಗಿಸಲಾಗುವುದು ಎಂದು ಭರವಸೆ ಕೊಟ್ಟಿದ್ದಾರೆ. ಸಮುದಾಯ ಧೃತಿಗೆಡದಬಾರದು ಎಂದು ತಿಳಿಸಿದರು. ಇನ್ನು ನಿಮಗೆ ಮೀಸಲಾತಿ ಕಲ್ಪಿಸಲು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಚಿಕ್ಕನಾಯಕನಹಳ್ಳಿ ಶಾಸಕ ಸುರೇಶ್ ಬಾಬು, ಎಂಎಲ್ಸಿ ತಿಪ್ಪೇಸ್ವಾಮಿ ಅವರ ಶ್ರಮ ಸಾಕಷ್ಟಿದ್ದು, ನನಗೆ ಸಮುದಾಯದ ವಿಚಾರಗಳನ್ನು ಎಳೆ ಎಳೆಯಾಗಿ ಮನವರಿಕೆ ಮಾಡಿಕೊಟ್ಟಿದ್ದರು. ನಿಮಗೆ ಪ್ರತಿಫಲ ಸಿಗುತ್ತದೆ ಎಂದು ಧೈರ್ಯ ತುಂಬಿದ್ದರು.
ರಾಜ್ಯದಲ್ಲಿರುವ ಅತ್ಯಂತ ತುಂಬಾ ಹಿಂದುಳಿದಿರುವ ಹಾಗೂ ಸಂಕಷ್ಟಕ್ಕೆ ಸಿಲುಕಿರುವ ಬುಡಕಟ್ಟು ಕಾಡುಗೊಲ್ಲ ಜನಾಂಗದವರಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ರಾಜ್ಯಸಭೆಯಲ್ಲಿ ಸಮುದಾಯದ ಪರವಾಗಿ ಧ್ವನಿ ಎತ್ತಲಾಯಿತು. ಕೈ ಮುಗಿದು ಕಳಾಕಳಿಯಿಂದ ಮನವಿ ಮಾಡಿದೆ. ಈ ವಿಷಯ ಚರ್ಚೆ ಆಗಬೇಕಾಯಿತು.
ಆದರೆ ಸದನದಲ್ಲಿ ಕೇಂದ್ರ ಸರ್ಕಾರದ ಸಾಧನೆಯ ಶ್ರೀರಾಮ ಮಂದಿರ ನಿರ್ಮಾಣ, ಸರ್ಕಾರದ ಸಾಧನೆಯ ಬಗ್ಗೆ ಶ್ವೇತಪತ್ರ ಹೊರಡಿಸಿದ್ದರು. ಇದಕ್ಕೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕಪ್ಪುಪತ್ರ ಪ್ರದರ್ಶನ ಮಾಡಿದ ಹಿನ್ನೆಲೆಯಲ್ಲಿ ಎಸ್ಟಿ ವಿಚಾರ ಚರ್ಚೆಗೆ ಬರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಲೋಕಸಭಾ ಚುನಾವಣೆ ಮುನ್ನ ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಯಲ್ಲಿ ಪ್ರವಾಸ ಮಾಡಿ, ಕಾಡುಗೊಲ್ಲರ ಮನೆಯಲ್ಲಿ ಊಟ ಮಾಡಿಕೊಂಡು ಬರುತ್ತೇನೆ. ಚುನಾವಣೆ ಮುಗಿದ ಬಳಿಕ ನಿಮಗೆ ಎಸ್ಟಿ ಭಾಗ್ಯ ದೊರೆಯಲಿದೆ. ಮೇನಲ್ಲಿ ಚುನಾವಣೆ ಮುಗಿದ ನಂತರ ಮತ್ತೆ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ನನಗೆ ಸಂಪೂರ್ಣ ವಿಶ್ವಾಸವಿದೆ ಎಂದಿದ್ದರು.
ನಾನು ಕೊಟ್ಟ ಮಾತು ತಪ್ಪುವುದಿಲ್ಲ. ನಾನು ಇನ್ನೂ ಎರಡೂವರೆ ವರ್ಷ ಬದುಕೀರುತ್ತೇನೆ. ನನ್ನ ಮೇಲೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಸಂಪೂರ್ಣ ನಂಬಿಕೆ ಇಡಿ ಎಂದು ಪಕ್ಕದಲ್ಲಿ ಕುಳಿತಿದ್ದವರ ಕೈಹಿಡಿದು ಭರವಸೆ ಕೊಟ್ಟರು.
ಬಿಜೆಪಿ ಜೊತೆ ಜೆಡಿಎಸ್ ಪಕ್ಷ ಮೈತ್ರಿ ಮಾಡಿಕೊಂಡಿದ್ದು, ಎರಡು ಪಕ್ಷಗಳು ಚುನಾವಣೆಯನ್ನು ಒಟ್ಟಿಗೆ ಎದುರಿಸಲಿವೆ. ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳನ್ನು ಬೆಂಬಲಿಸುವ ಮೂಲಕ ನಮ್ಮ ಜೊತೆಯಲ್ಲಿರಿ, ನಿಮಗೆ ನ್ಯಾಯ ಸಿಗಲಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಹೇಳಿದ್ದರು.












Click it and Unblock the Notifications