Ugadi Jatra 2024: ಮಲೆ ಮಾದಪ್ಪನ ಬೆಟ್ಟಕ್ಕೆ ಆಗಮಿಸಿದ ಭಕ್ತರ ದಂಡು
ಚಾಮರಾಜನಗರ, ಏಪ್ರಿಲ್, 07: ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಏಪ್ರಿಲ್ 6ರಿಂದ ಯುಗಾದಿ ಜಾತ್ರಾ ಮಹೋತ್ಸವ ಆರಂಭಗೊಂಡಿದೆ. ಈ ಜಾತ್ರೆ ನಾಲ್ಕು ದಿನಗಳ ಕಾಳ ನಡೆಯಲಿದ್ದು, ಲಕ್ಷಾಂತರ ಭಕ್ತರು ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆ ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸಕಲ ಸಿದ್ಧತೆ ಮಾಡಿಕೊಂಡಿದೆ.
ಏಪ್ರಿಲ್ 6ರಿಂದ ಯುಗಾದಿ ಜಾತ್ರಾ ಮಹೋತ್ಸವ ಪ್ರಾರಂಭವಾಗಿದ್ದು, ಇಂದು ಶ್ರೀ ಸ್ವಾಮಿಗೆ ಎಣ್ಣೆ ಮಜ್ಜನ ವಿಶೇಷ ಸೇವೆ ಉತ್ಸವಾದಿಗಳ ನಡೆಯಲಿದೆ. ಏಪ್ರಿಲ್ 8ರಂದು ಅಮಾವಾಸ್ಯೆ ಶ್ರೀ ಸ್ವಾಮಿಗೆ ವಿಶೇಷ ಸೇವೆ ಉತ್ಸವಾದಿಗಳು ಜರುಗಲಿದೆ. ಏಪ್ರಿಲ್ 9ರಂದು ಬೆಳಗ್ಗೆ ಮಹಾರಥೋತ್ಸವ ಬೆಳಗ್ಗೆ 7:30ರಿಂದ 9 ಗಂಟೆಯವರೆಗೆ ಜರುಗಲಿದೆ.

ಬಿಸಿಲಿನ ತಾಪಮಾನ ಹೆಚ್ಚಾಗಿರುವುದರಿಂದ ಶ್ರೀ ಕ್ಷೇತ್ರಕ್ಕೆ ಬರುವಂತಹ ಭಕ್ತಾದಿಗಳಿಗೆ ಶ್ರೀ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕುಡಿಯುವ ನೀರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಪ್ರಾಧಿಕಾರದ ಆವರಣ ಹಾಗೂ ಮುಖ್ಯ ರಸ್ತೆಗಳಲ್ಲಿ ಮಡಿಕೆಯಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ.
ಶ್ರೀ ಕ್ಷೇತ್ರದ ಎರಡು ಕಡೆಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಜನರಿಗೆ ದಿನದ 24 ಗಂಟೆಯೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. ದಾಸೋಹ ಭವನದಲ್ಲಿ ವಿಶೇಷ ದಾಸೋಹದ ವ್ಯವಸ್ಥೆ ಕಲ್ಪಿಸಲಾಗಿದ್ದು, ಒಂದು ಬಾರಿಗೆ 2 ಸಾವಿರಕ್ಕೂ ಹೆಚ್ಚು ಜನರು ಪ್ರಸಾದ ಸ್ವೀಕರಿಸಬಹುದಾಗಿದೆ. ಶ್ರೀ ಕ್ಷೇತ್ರಕ್ಕೆ ಬರುವ ಭಕ್ತಾದಿಗಳಿಗೆ ನಿರಂತರ ದಾಸೋಹದ ವ್ಯವಸ್ಥೆಯನ್ನು ಸಹ ಮಾಡಲಾಗಿದೆ.
ಶ್ರೀ ಕ್ಷೇತ್ರಕ್ಕೆ ಹೆಚ್ಚಿನ ಭಕ್ತಾದಿಗಳು ಆಗಮಿಸುವುದರಿಂದ ಸುಮಾರು 3 ಲಕ್ಷ ಲಾಡು ತಯಾರು ಮಾಡಿಕೊಳ್ಳಲಾಗಿದೆ. ಭಕ್ತಾದಿಗಳಿಗೆ ರಾಜಗೋಪುರದ ಎಡ ಹಾಗೂ ಬಲ ಭಾಗದಲ್ಲಿ ನೆರಳಿನ ವ್ಯವಸ್ಥೆ ಮಾಡಲಾಗಿದೆ. ದೇವರ ದರ್ಶನ ಪಡೆಯಲು ಸರತಿ ಸಾಲಿನಲ್ಲಿ ನಿಲ್ಲುವ ಸ್ಥಳದಲ್ಲಿ ಹಾಗೂ ದಾಸೋಹ ಮುಂಭಾಗದಲ್ಲಿ ಶಾಮಿಯಾನ ಅಳವಡಿಸಲಾಗಿದೆ. ಇದರ ಜೊತೆಗೆ ವಾಹನಗಳಿಗೆ ಪಾರ್ಕಿಂಗ್ ಸೌಲಭ್ಯ, ಜಾತ್ರಾ ಆವರಣದಲ್ಲಿ ಸ್ವಚ್ಛತೆ ಕಾಪಾಡಲು ಪೌರಕಾರ್ಮಿಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಯುಗಾದಿ ಜಾತ್ರಾ ಮಹೋತ್ಸವ ಪ್ರಯುಕ್ತ ಲಕ್ಷಾಂತರ ಭಕ್ತಾದಿಗಳು ಆಗಮಿಸುತ್ತಿದ್ದು, ಭಕ್ತರಿಗೆ ಎಲ್ಲಾ ರೀತಿಯ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಯುಗಾದಿ ಜಾತ್ರಾ ಮಹೋತ್ಸವಕ್ಕೆ ತಮಿಳುನಾಡಿನ ಭಕ್ತಾದಿಗಳು ಹೆಚ್ಚು ಬರುವುದರಿಂದ ಪಾಲಾರ್ ರಸ್ತೆಯಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.












Click it and Unblock the Notifications