ಪ್ರಸಿದ್ಧ ಧಾರ್ಮಿಕ ಸ್ಥಳ ಮಲೆ ಮಾದಪ್ಪನ ಬೆಟ್ಟಕ್ಕೆ ಹೋಗುವ ಭಕ್ತರು ಗಮನಿಸಬೇಕಾದ ಪ್ರಮುಖ ಅಂಶಗಳು
ಚಾಮರಾಜನಗರ, ಜನವರಿ, 12: ಪ್ರಸಿದ್ಧ ಧಾರ್ಮಿಕ ಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಂಪೂರ್ಣ ಪ್ಲಾಸ್ಟಿಕ್ ಮುಕ್ತ ಪ್ರದೇಶವನ್ನಾಗಿ ಮಾಡಲು ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಹಾಗೂ ಡಿಎಫ್ಓ ಡಾ.ಸಂತೋಷ್ ಕುಮಾರ್ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಈಗಾಗಲೇ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತ ವಲಯ ಎಂದು ಘೋಷಣೆ ಮಾಡಲಾಗಿದೆ. ಆದರೂ ಸಹ ಸಂಪೂರ್ಣವಾಗಿ ಪ್ಲಾಸ್ಟಿಕ್ ಬಳಕೆ ತಡೆಗಟ್ಟಲು ಸಾಧ್ಯವಾಗಿರಲಿಲ್ಲ. ಈ ನಿಟ್ಟಿನಲ್ಲಿ ಹೇಗಾದರೂ ಪ್ಲಾಸ್ಟಿಕ್ ಬಳಕೆಯನ್ನು ತಡೆಗಟ್ಟಲು ಪ್ರಾಧಿಕಾರ ಹಾಗೂ ಅರಣ್ಯ ಇಲಾಖೆಯ ಸಹಯೋಗದಲ್ಲಿ ಚೆಕ್ ಪೋಸ್ಟ್ ನಿರ್ಮಾಣ ಮಾಡಲು ಅಧಿಕಾರಿಗಳು ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಚಾಮರಾಜನಗರದಲ್ಲಿ ಈ ಹಿಂದೆ ಜಿಲ್ಲಾಧಿಕಾರಿ ಆಗಿದ್ದ ಚಾರುಲತಾ ಅವರು ಅರಣ್ಯ ಇಲಾಖೆಗೆ ತಾಳುಬೆಟ್ಟದಲ್ಲಿ ಚೆಕ್ ಪೋಸ್ಟ್ ತೆರೆಯಲು ಆದೇಶ ನೀಡಿದ್ದರು. ಈ ನಿಟ್ಟಿನಲ್ಲಿ ಜಿಲ್ಲಾಡಳಿತದ ಆದೇಶದಂತೆ ತಾಳಬೆಟ್ಟ ಹಾಗೂ ವಡಕೆಹಳ್ಳದ ಬಳಿ ಸ್ಥಳ ಪರಿಶೀಲನೆ ಮಾಡಲಾಗಿದೆ.
ಚೆಕ್ ಪೋಸ್ಟ್‌ನಿಂದ ಅನುಕೂಲ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನ ತಾಳು ಬೆಟ್ಟದಲ್ಲಿ ಚೆಕ್ ಪೋಸ್ಟ್ ನಿರ್ಮಾಣ ಮಾಡಿದರೆ, ಭಕ್ತಾದಿಗಳು ತರುವ ಪ್ಲಾಸ್ಟಿಕ್ ಕವರ್‌ಗಳು, ಪ್ಲಾಸ್ಟಿಕ್ ಪದಾರ್ಥಗಳು, ತಿಂಡಿ ತಿನಿಸುಗಳ ಕವರ್‌ಗಳನ್ನು ತಾಳು ಬೆಟ್ಟದ ಚೆಕ್ಪೋಸ್‌ನಲ್ಲಿಯೇ ತಪಾಸಣೆ ಮಾಡಿ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ವಶಪಡಿಸಿಕೊಳ್ಳಲಾಗುತ್ತದೆ. ಈಗಾಗಲೇ ಅರಣ್ಯ ಇಲಾಖೆ, ಪರಿಸರ ಪ್ರಿಯರಿಂದ ಪ್ಲಾಸ್ಟಿಕ್ ತ್ಯಾಜ್ಯದಿಂದ ಆಗುವ ಅನಾಹುತದ ಬಗ್ಗೆ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ಆದರೂ ಸಹ ಭಕ್ತಾದಿಗಳು ಹಾಗೂ ಸಾರ್ವಜನಿಕರು ಎಚ್ಚೆತ್ತುಕೊಂಡಿಲ್ಲ.
ಕಮಿಟಿ ರಚನೆ: ಶ್ರೀ ಕ್ಷೇತ್ರದಲ್ಲಿ ಸಂಪೂರ್ಣ ಪ್ಲಾಸ್ಟಿಕ್ ನಿಷೇಧ ಮಾಡಲು ಪ್ರಾಧಿಕಾರದ ಉಪಾಧ್ಯಕ್ಷರು ಆದ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್ ಅಧ್ಯಕ್ಷತೆಯಲ್ಲಿ ಕಮಿಟಿ ರಚನೆ ಮಾಡಿ ಪ್ರಾಧಿಕಾರ, ಅರಣ್ಯ ಇಲಾಖೆ, ಅಬಕಾರಿ, ಪೊಲೀಸ್ ಇಲಾಖೆ ಗ್ರಾಮ ಪಂಚಾಯಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಪ್ಲಾಸ್ಟಿಕ್ ಬಳಕೆ ತಡೆಗಟ್ಟಲು ಕ್ರಮ ಕೈಗೊಳ್ಳಲು ಚಿಂತನೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಜಾತ್ರಾ ಮಹೋತ್ಸವ ಹಾಗೂ ಹಬ್ಬ ಹರಿದಿನಗಳಲ್ಲಿ ಬರುವ ಪಾದಯಾತ್ರಿಕರೂ ಸಹ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸಿಕ್ಕಸಿಕ್ಕಲಿ ಬಿಸಾಡದೆ ನಿಗದಿತ ಸ್ಥಳದಲ್ಲಿ ಹಾಕಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ತಮಿಳುನಾಡಿನ ಊಟಿ ಹಾಗೂ ತಿರುಪತಿ ದೇವಾಲಯಗಳಲ್ಲಿ ಬರುವ ಭಕ್ತಾದಿಗಳಿಗೆ ಹಾಗೂ ಪಾದಯಾತ್ರಿಕರಿಗೆ ಗಾಜಿನ ಬಾಟಲ್‌ಗಳಲ್ಲಿ ಕುಡಿಯುವ ನೀರು ಮಾರಾಟ ಮಾಡಲಾಗುತ್ತಿದೆ.
ಅದರಂತೆ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ಇದೇ ಮಾದರಿಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿದರೆ, ಪ್ಲಾಸ್ಟಿಕ್ ಬಾಟೆಲ್‌ಗಳನ್ನು ತಡೆಗಟ್ಟಬಹುದೆಂದು ಚರ್ಚೆ ನಡೆಸಲಾಗಿದೆ. ಪರಿಶೀಲನೆ ವೇಳೆ ಮಲೆ ಮಾದೇಶ್ವರ ವನ್ಯಜೀವಿಧಾಮದ ಉಪ ಸಂರಕ್ಷಣಾಧಿಕಾರಿ ಚಂದ್ರಶೇಖರ್ ಪಾಟೀಲ್, ವಲಯ ಅರಣ್ಯಾಧಿಕಾರಿ ಭಾರತಿ ನಂದಿಹಳ್ಳಿ ಹಾಗೂ ಇನ್ನಿತರರು ಹಾಜರಿದ್ದರು.
ಶ್ರೀ ಕ್ಷೇತ್ರದಲ್ಲಿ ಪ್ಲಾಸ್ಟಿಕ್ ತಡೆಗಟ್ಟಲು ಪ್ರಾಧಿಕಾರ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ಸ್ಥಳ ಪರಿಶೀಲನೆ ಮಾಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರ ಮಾರ್ಗದರ್ಶನದಲ್ಲಿ ಕಮಿಟಿ ರಚನೆ ಮಾಡಿ ಸಂಪೂರ್ಣ ಪ್ಲಾಸ್ಟಿಕ್ ನಿಷೇಧ ಮಾಡಲು ಮುಂದಿನ ದಿನಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಪ್ಲಾಸ್ಟಿಕ್ ನಿಷೇಧದ ಬಗ್ಗೆ ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ತಿಳಿಸಿದ್ದಾರೆ.












Click it and Unblock the Notifications