ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಎಣ್ಣೆ ಅಂಗಡಿ ವಿಷ್ಯ!
ಚೆನ್ನೈ, ಮಾರ್ಚ್ 16: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಎಣ್ಣೆ ಅಂಗಡಿಗಳನ್ನೆಲ್ಲ ಬಂದ್ ಮಾಡಿಸುವುದಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕಾಂಗ್ರೆಸ್ ಆಶ್ವಾಸನೆ ನೀಡಿದೆ.
ಚೆನ್ನೈನಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ರಾಜ್ಯಾಧ್ಯಕ್ಷ ಕೆ ಎಸ್ ಅಳಗಿರಿ ವಿಧಾನಸಭಾ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಲ್ಲಿ ಅಂತರ್ಜಾತಿ ವಿವಾಹ ಮತ್ತು ಮರ್ಯಾದಾ ಹತ್ಯೆಯನ್ನು ತಡೆಯುವ ದೃಷ್ಟಿಯಲ್ಲಿ ಪ್ರತ್ಯೇಕ ಕಾಯ್ದೆಗಳನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದರು.
Congress releases its manifesto for #TamilNaduElections2021 at the party office in Chennai. pic.twitter.com/KfvckCQcj6
— ANI (@ANI) March 16, 2021
ತಮಿಳುನಾಡಿನಲ್ಲಿ ನೀಟ್ ಪರೀಕ್ಷೆಗಳನ್ನು ರದ್ದುಗೊಳಿಸುವ ಬಗ್ಗೆಯೂ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೇ ಪ್ರತಿ ಜಿಲ್ಲೆಯಲ್ಲೂ ಸರ್ಕಾರಿ ಉದ್ಯೋಗಕ್ಕಾಗಿ 500 ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುವುದು. ನಾವು ಯುವಕರಿಗೆ ಉದ್ಯೋಗ ನೀಡುವ ಯೋಜನೆಗಳನ್ನು ಜಾರಿಗೊಳಿಸುತ್ತೇವೆ. ಸ್ಟಾರ್ಟ್‌ಅಪ್‌ಗಳಿಗೆ ಮತ್ತು ಹೊಸ ಉದ್ಯಮಿಗಳಿಗೆ ಕನಿಷ್ಠ 5 ವರ್ಷಗಳವರೆಗೆ ತೆರಿಗೆ ವಿನಾಯಿತಿ ನೀಡಲಾಗುತ್ತದೆ ಎಂದು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹೇಳಲಾಗಿದೆ.

ಎಐಎಡಿಎಂಕೆ ಪ್ರಣಾಳಿಕೆಯಲ್ಲಿ ಇರುವುದೇನು:
ಚೆನ್ನೈನಲ್ಲಿ ನಡೆದ ಪಕ್ಷದ ಸಭೆಯಲ್ಲಿ ಚುನಾವಣಾ ಪ್ರಣಾಳಿಕೆಯನ್ನು ಎಐಎಡಿಎಂಕೆ ಮುಖಂಡ ಸಿ. ಪೊನ್ನೈಯನ್ ಓದಿದರು. ಪ್ರತಿವರ್ಷ ಪ್ರತಿಯೊಂದು ಮನೆಗೆ ಕನಿಷ್ಠ ಆರು ಅಡುಗೆ ಸಿಲಿಂಡರ್ ಗಳನ್ನು ಸರ್ಕಾರದ ವತಿಯಿಂದ ಉಚಿತಾಗಿ ನೀಡಲಾಗುತ್ತದೆ ಎಂದು ಪ್ರಕಟಿಸಿದರು. ತಮಿಳುನಾಡಿನಲ್ಲಿ ನಡೆಯುತ್ತಿರುವ 2021ರ ವಿಧಾನಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಸರ್ಕಾರ ಅಸ್ತಿತ್ವಕ್ಕೆ ಬಂದರೆ ರಾಜ್ಯದ ಪ್ರತಿಯೊಂದು ಮನೆಯಲ್ಲಿ ಒಬ್ಬರಿಗೆ ಸರ್ಕಾರಿ ನೌಕರಿ ನೀಡಲಾಗುವುದು ಎಂದು ಪ್ರಣಾಳಿಕೆಯಲ್ಲಿ ಘೋಷಿಸಿದೆ.
ತಮಿಳುನಾಡಿನಲ್ಲಿ ಮೈತ್ರಿ ರಾಜಕಾರಣ:
ತಮಿಳುನಾಡಿನಲ್ಲಿ ಪ್ರಾದೇಶಿಕ ಪಕ್ಷಗಳೇ ಹೆಚ್ಚಿನ ಪ್ರಾಬಲ್ಯ ಹೊಂದಿವೆ. ರಾಷ್ಟ್ರೀಯ ಪಕ್ಷ ಎನಿಸಿರುವ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಚುನಾವಣೆ ಅಖಾಡಕ್ಕೆ ಇಳಿದಿವೆ. ಎಐಎಡಿಎಂಕೆ-ಬಿಜೆಪಿ ಹಾಗೂ ಡಿಎಂಕೆ-ಕಾಂಗ್ರೆಸ್ ಮೈತ್ರಿಯ ಮೂಲಕ ಚುನಾವಣೆ ಎದುರಿಸಲು ಅಣಿಯಾಗಿವೆ. ಇದರ ಮಧ್ಯೆ ಎಎಂಎಂಕೆ ಮತ್ತು ಡಿಎಂಡಿಕೆ ಪಕ್ಷವು ಮೈತ್ರಿಯೊಂದಿಗೆ ಚುನಾವಣೆ ಎದುರಿಸುವುದಾಗಿ ತಿಳಿಸಿವೆ.
ತಮಿಳುನಾಡಿನ 234 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನವನ್ನು ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗವು ಪ್ರಕಟಿಸಿದೆ. ಏಪ್ರಿಲ್ 06ರಂದು ಒಂದೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು, ಮೇ 02ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.












Click it and Unblock the Notifications