ಚಿಕ್ಕಬಳ್ಳಾಪುರ: ವಿಶೇಷ ರೀತಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲು ಸಿದ್ಧತೆ
ಚಿಕ್ಕಬಳ್ಳಾಪುರ, ಅಕ್ಟೋಬರ್, 30: ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆ ಈ ವರ್ಷದ ಕನ್ನಡ ರಾಜ್ಯೋತ್ಸವವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಗುತ್ತಿದ್ದು, ಸಾರ್ವಜನಿಕರು ಮನೆಗಳ ಮುಂದೆ ರಂಗೋಲಿ ಹಾಕಿ, ಗಾಳಿಪಟಗಳನ್ನು ಹಾರಿಸಿ, ಹಣತೆ ಹಚ್ಚುವ ಮೂಲಕ ಕನ್ನಡ ಜ್ಯೋತಿ ಬೆಳಗಿಸುವುದರೊಂದಿಗೆ ರಾಜ್ಯೋತ್ಸವ ಸಂಭ್ರಮ ಹೆಚ್ಚಿಸಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಮನವಿ ಮಾಡಿದ್ದಾರೆ.
ಕರ್ನಾಟಕ ಸಂಭ್ರಮ-50ರ ಅಂಗವಾಗಿ ನವೆಂಬರ್ 1ರಂದು ಸಂಭ್ರಮದಲ್ಲಿ ಎಲ್ಲ ಸಾರ್ವಜನಿಕರೂ ತೊಡಗಿಸಿಕೊಳ್ಳಬೇಕು ಎಂಬ ಸುದುದ್ದೇಶದಿಂದ ಸರ್ಕಾರ ಅಂದಿನ ದಿನದಂದು ವೈವಿಧ್ಯಮಯ ಚಟುವಟಿಕೆಗಳ ಮೂಲಕ ಕನ್ನಡ ರಾಜ್ಯೋತ್ಸವ ಆಚರಣೆ ನಡೆಯುವಂತಾಗಲು ಹಲವು ನಿರ್ದೇಶನಗಳನ್ನು ನೀಡಿದೆ. ಅದರಂತೆ ಈ ಬಾರಿಯ ರಾಜ್ಯೋತ್ಸವನ್ನು ವಿಶಿಷ್ಟ ರೀತಿಯಲ್ಲಿ ನವೆಂಬರ್ 1ರಂದು ರಾಜ್ಯದ ಎಲ್ಲಾ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಗಳನ್ನು ಬಿಡಿಸಿ ಕರ್ನಾಟಕ ಸಂಭ್ರಮ-50 "ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ" ಎಂಬ ಘೋಷ ವಾಕ್ಯವನ್ನು ಬರೆಯುವಂತೆ ನಾಗರಿಕರಲ್ಲಿ ವಿನಂತಿಸಿದ್ದಾರೆ.

ನವೆಂಬರ್ 1ರ ಬೆಳಗ್ಗೆ 9 ಗಂಟೆಗೆ ಎಲ್ಲಾ ಆಕಾಶವಾಣಿ ಕೇಂದ್ರಗಳಲ್ಲಿ (ರೇಡಿಯೋ) ನಾಡಗೀತೆಯನ್ನು ಪ್ರಸಾರ ಮಾಡಲಾಗುವುದು. ಆ ಸಮಯದಲ್ಲಿ ಕನ್ನಡ ನಾಡಿನ ಸಮಸ್ತ ನಾಗರಿಕರು ಎದ್ದು ನಿಂತು ರಾಷ್ಟ್ರ ಗೀತೆಗೆ ಗೌರವ ಸಲ್ಲಿಸುವ ರೀತಿಯಲ್ಲಿ ನಾಡ ಗೀತೆಗೂ ಗೌರವ ಸಲ್ಲಿಸಬೇಕು ಎಂದಿ ಮನವಿ ಮಾಡಿದ್ದಾರೆ.
ಅದೇ ರೀತಿ ನವೆಂಬರ್ 1ರ ಸಂಜೆ 5 ಗಂಟೆಗೆ ನಿಮ್ಮ-ನಿಮ್ಮ ಜಿಲ್ಲೆಗಳ ಎಲ್ಲಾ ಗ್ರಾಮಗಳ ಮೈದಾನಗಳಲ್ಲಿ ಕೆಂಪು ಹಳದಿ ಬಣ್ಣದ ಗಾಳಿಪಟಗಳನ್ನು ಆಕಾಶಕ್ಕೆ ಹಾರಿ ಬಿಡುವ ಮೂಲಕ ಸುವರ್ಣ ಸಂಭ್ರಮ ಗಾಳಿಪಟ ಉತ್ಸವ ಆಚರಿಸಬೇಕು. ಹಾಗೂ ನವೆಂಬರ್ 1 ರ ಸಂಜೆ 7.00 ಗಂಟೆಗೆ ನಿಮ್ಮ-ನಿಮ್ಮ ಜಿಲ್ಲೆಗಳ ಎಲ್ಲಾ ಗ್ರಾಮಗಳ ಮನೆಗಳು, ಕಚೇರಿಗಳು, ಅಂಗಡಿ-ಮಳಿಗೆಗಳ ಮುಂದೆ ಹಣತೆ (ದೀಪ) ಹಚ್ಚುವ ಮೂಲಕ ಕನ್ನಡ ಜ್ಯೋತಿ ಬೆಳಗಬೇಕು ಎಂದರು.
ಜಿಲ್ಲೆಯ ಎಲ್ಲಾ ನಾಗರಿಕರ ಹಾಗೂ ಸಂಘ ಸಂಸ್ಥೆಗಳು ರಂಗೋಲಿ, ಗಾಳಿಪಟ ಉತ್ಸವ ಹಾಗೂ ಕನ್ನಡ ಜ್ಯೋತಿ ಬೆಳಗುವ ಮೂಲಕ ರಾಜ್ಯೋತ್ಸವದ ಸಂಭ್ರಮದಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅವರು ನಾಗರೀಕರಲ್ಲಿ ಮನವಿ ಮಾಡಿದ್ದಾರೆ.
ಜಿಲ್ಲಾಡಳಿತದ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ನವೆಂಬರ್ 1 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಸರ್.ಎಂ.ವಿ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಮಾನ್ಯ ಉನ್ನತ ಶಿಕ್ಷಣ ಸಚಿವರು ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಸುಧಾಕರ್ ಅವರು ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ಶಾಸಕರಾದ ಪ್ರದೀಪ್ ಈಶ್ವರ್ ಪಿ.ಇ ಅವರು ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಾನ್ಯ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ಎನ್.ಬಚ್ಚೇಗೌಡ, ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಸ್.ಮುನಿಸ್ವಾಮಿ, ವಿಧಾನಸಭಾ ಕ್ಷೇತ್ರಗಳ ಶಾಸಕರುಗಳಾದ ಎಸ್.ಎನ್.ಸುಬ್ಬಾರೆಡ್ಡಿ, ಬಿ.ಎನ್.ರವಿಕುಮಾರ್, ಕೆ.ಹೆಚ್.ಪುಟ್ಟಸ್ವಾಮಿಗೌಡ, ವಿಧಾನ ಪರಿಷತ್ ಶಾಸಕರಾದ ಡಾ.ವೈ.ಎ.ನಾರಾಯಣಸ್ವಾಮಿ, ಚಿದಾನಂದ ಎಂ. ಗೌಡ, ಎಂ.ಎಲ್.ಅನಿಲ್ ಕುಮಾರ್ ರವರು ಭಾಗವಹಿಸುವರು.
ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿಗಳು, ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿಗಳು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ.ಎನ್. ಮಂಜುಳ ಅವರು ಭಾಗವಹಿಸಲಿದ್ದಾರೆ. ಈ ವೇಳೆ ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಸರ್ಕಾರಿ ನೌಕರರ ಸಂಘ ಮತ್ತು ಕನ್ನಡಪರ ಸಂಘಟನೆಗಳ ಮತ್ತು ಇತರೆ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಮಸ್ತ ನಾಗರಿಕರು ಭಾಗವಹಿಸಲಿದ್ದಾರೆ.












Click it and Unblock the Notifications