ಸುಧಾಕರ್ ಉಸ್ತುವಾರಿಯಲ್ಲಿ ಬಿಜೆಪಿ ದುರ್ಬಲ: ಮೂರು ಜಿಲ್ಲೆಗಳಲ್ಲಿ ಫಲಿಸುವುದೇ ಸಚಿವರ ತಂತ್ರ?
ಸಚಿವ ಡಾ.ಕೆ.ಸುಧಾಕರ್ ಅವರಿಗೆ ಕೋಲಾರ, ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದ್ದು, ಈ ಮೂರು ಜಿಲ್ಲೆಗಳಲ್ಲಿರುವ ಒಟ್ಟು 15 ವಿಧಾನಸಭಾ ಕ್ಷೇತ್ರಗಳಲ್ಲಿ ಅರ್ಧಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಕಮಲ ಅರಳಿಸಿರುವ ಯೋಜನೆ ರೂಪಿಸಿದ್
ಚಿಕ್ಕಬಳ್ಳಾಪುರ, ಮಾರ್ಚ್ 2: ಪ್ರಸ್ತುತ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾವು ಗೆಲ್ಲುವ ಜೊತೆಗೆ ತಮಗೆ ಜವಾಬ್ದಾರಿ ವಹಿಸಿದ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಶಾಸಕರನ್ನು ಗೆಲ್ಲಿಸುವ ಮೂಲಕ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮುಂದಾಗಿದ್ದು, ಈ ನಿಟ್ಟಿನಲ್ಲಿ ತಂತ್ರಗಳನ್ನು ಹೆಣೆಯಲು ಶ್ರಮಿಸುತ್ತಿದ್ದಾರೆ.
2018ರ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಗೆದ್ದಿದ್ದ ಸುಧಾಕರ್ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರುವ ಮೂಲಕ 2019ರ ಉಪಚುನಾವಣೆಗೆ ಕಾರಣರಾದರು. ಉಪಚುನಾವಣೆಯಲ್ಲಿ ಅತ್ಯಧಿಕ ಮತ ಪಡೆದು ಗೆಲುವು ಸಾಧಿಸುವ ಮೂಲಕ ಆರೋಗ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡ ಅವರು ರಾಜ್ಯ ಬಿಜೆಪಿ ಸರ್ಕಾರದಲ್ಲಿ ಪ್ರಭಾವಿ ಸಚಿವರಾಗಿ ಮುಂಚೂಣಿಯಲ್ಲಿದ್ದಾರೆ.
ಸಚಿವ ಡಾ.ಕೆ.ಸುಧಾಕರ್ ಅವರಿಗೆ ಕೋಲಾರ, ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದ್ದು, ಈ ಮೂರು ಜಿಲ್ಲೆಗಳಲ್ಲಿರುವ ಒಟ್ಟು 15 ವಿಧಾನಸಭಾ ಕ್ಷೇತ್ರಗಳಲ್ಲಿ ಅರ್ಧಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಕಮಲ ಅರಳಿಸಿರುವ ಯೋಜನೆ ರೂಪಿಸಿದ್ದಾರೆ.

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಬಾರಿ ಗೆಲುವು ಸಾಧಿಸುವ ಆರೋಗ್ಯ ಸಚಿವರು ಪ್ರಸ್ತುತ ಚುನಾವಣೆಯಲ್ಲಿ ತಮ್ಮ ಪರ ಪ್ರಚಾರ ನಡೆಸಿ ಗೆಲ್ಲಿಸಿ ವಿಧಾನಸಭೆಗೆ ಕಳಿಸುವಂತೆ ಸ್ಥಳೀಯ ಕಾರ್ಯಕರ್ತರಿಗೆ ಮತ್ತು ಮುಖಂಡರಿಗೆ ಕರೆ ನೀಡಿದ್ದಾರೆ.
ತಾವು ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ನಡೆಸಬೇಕಿದ್ದು, ತಮ್ಮ ಕ್ಷೇತ್ರಕ್ಕೆ ಹೆಚ್ಚಿನ ಸಮಯ ಮೀಸಲಿಡಲು ಸಾಧ್ಯವಾಗುವುದಿಲ್ಲ. ಹಾಗಾಗಿ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ತಾವೇ ಅಭ್ಯರ್ಥಿ ಎಂದು ಪರಿಗಣಿಸಿ ಪ್ರಚಾರ ನಡೆಸಿ, ಹೆಚ್ಚಿನ ಮತಗಳಿಂದ ತಮ್ಮನ್ನು ಗೆಲ್ಲಿಸುವಂತೆ ಅವರು ಈಗಾಗಲೇ ಮನವಿ ಮಾಡಿದ್ದಾರೆ.
ಸುಧಾಕರ್ ಅವರು ಜವಾಬ್ದಾರಿ ವಹಿಸಿಕೊಂಡಿರುವ ಮೂರು ಜಿಲ್ಲೆಗಳಲ್ಲಿಯೂ ಬಿಜೆಪಿ ಹೀನಾಯ ಸ್ಥಿತಿಯಲ್ಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದೇ ಆರೋಗ್ಯ ಸಚಿವರ ಜೊತೆಗೆ ಆಪರೇಷನ್ ಕಮಲಕ್ಕೆ ಬಿಜೆಪಿ ಸೇರಿದ ಎಂಟಿಬಿ ನಾಗರಾಜ್ ಹೊರತು ಪಡಿಸಿ ಮತ್ತೊಬ್ಬ ಶಾಸಕರಿಲ್ಲ. ಕೋಲಾರ ಜಿಲ್ಲೆಯಲ್ಲಿ ಪ್ರಸ್ತುತ ಬಿಜೆಪಿ ಶಾಸಕರಿಲ್ಲ.

ಇತ್ತ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಉಪಚುನಾವಣೆಯಲ್ಲಿ ಸುಧಾಕರ್ ಗೆಲುವು ಹೊರತು ಪಡಿಸಿ ಮತ್ತೊಂದು ಖಾತೆಯೂ ತೆರೆದಿಲ್ಲ. ಪರಿಸ್ಥಿತಿ ಹೀಗಿರುವಾಗ ಮೂರು ಜಿಲ್ಲೆಗಳಿಂದ ಕನಿಷ್ಠ 8 ಶಾಸಕರನ್ನು ಗೆಲ್ಲಿಸಲು ಸಚಿವ ಸುಧಾಕರ್ ಪಣ ತೊಟ್ಟಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಬೆಂಗಳೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ದೇವನಹಳ್ಳಿ, ದೊಡ್ಡಬಳ್ಳಾಪುರ ಮತ್ತು ನೆಲಮಂಗಲ ಕ್ಷೇತ್ರದಲ್ಲಿ ಕಮಲ ಅರಳಿಸುವ ನಿಟ್ಟಿನಲ್ಲಿ ಈಗಾಗಲೇ ಹಲವು ಮುಖಂಡರನ್ನು ಪಕ್ಷಕ್ಕೆ ಕರೆ ತರುವ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ಅದೇ ರೀತಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ರಾಜಕೀಯ ತಂತ್ರಗಾರಿಕೆ ಆರಂಭಿಸಿರುವ ಅವರು, ಬೇರೆ ಪಕ್ಷದ ಪ್ರಭಾವಿಗಳನ್ನು ಪಕ್ಷಕ್ಕೆ ಕರೆ ತರುವ ಕೆಲಸಕ್ಕೆ ಕೈ ಹಾಕಿದ್ದಾರೆ.
ಗುರುವಿನ ಸೋಲಿಗೆ ಶಿಷ್ಯನ ಉಸ್ತುವಾರಿ
ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಈಗಾಗಲೇ ಘೋಷಣೆ ಮಾಡಿದ್ದಾರೆ. ಇದಕ್ಕೆ ಪೂರಕವಾಗಿ ಅಗತ್ಯವಿರುವ ತಯಾರಿಯಲ್ಲಿ ಸಿದ್ದರಾಮಯ್ಯ ಮತ್ತು ಬೆಂಬಲಿಗರು ತೊಡಗಿದ್ದಾರೆ. ಆದರೆ, ಒಂದು ಕಾಲದಲ್ಲಿ ಇದೇ ಸಿದ್ದರಾಮಯ್ಯರ ಬಲಗೈ ಬಂಟನಂತಿದ್ದ ಸಚಿವ ಡಾ.ಕೆ.ಸುಧಾಕರ್ ಗುರುವಿನ ಸೋಲಿಸಲು ಗುರಿಯಾಗಿಸಿಕೊಂಡಿದ್ದಾರೆ.

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸಚಿವ ಸುಧಾಕರ್ ಅವರನ್ನು ಸೋಲಿಸುವಂತೆ ಇತ್ತೀಚೆಗೆ ನಡೆದ ಪ್ರಜಾಧ್ವನಿ ವೇದಿಕೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕರೆ ನೀಡಿದ್ದು, ಕೊನೆಯ ಚುನಾವಣೆಯನ್ನು ಗೆಲ್ಲುವಂತೆ ಸಚಿವ ಸುಧಾಕರ್ ಪರೋಕ್ಷವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ.
ಒಟ್ಟಿನಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಹಿಂದಿಗಿಂತಲೂ ಹೆಚ್ಚು ಮತಗಳಿಂದ ತಾವು ಗೆಲ್ಲುವ ಜೊತೆಗೆ ಚಿಕ್ಕಬಳ್ಳಾಪುರ, ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕೇಸರಿ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಲು ಕಮಲ ಪಾಳೆಯದಲ್ಲಿದ್ದು, ಇದು ಎಷ್ಟರ ಮಟ್ಟಿಗೆ ಫಲ ನೀಡಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.












Click it and Unblock the Notifications