Karnataka Budget 2025: ಬಜೆಟ್‌ನಲ್ಲಿ ಚಿಕ್ಕಬಳ್ಳಾಪುರಕ್ಕೆ ಹೈಟೆಕ್ ಹೂವಿನ ಮಾರುಕಟ್ಟೆ ಘೋಷಣೆ
ಪುಷ್ಪೋದ್ಯಮದಲ್ಲಿ ತೊಡಗಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ಜನರು ಹಲವು ವರ್ಷಗಳಿಂದ ಹೈಟೆಕ್ ಹೂವಿನ ಮಾರುಕಟ್ಟೆ ನಿರ್ಮಿಸಲು ಬೇಡಿಕೆ ಇಟ್ಟಿದ್ದರು. ಇಂದು ಮಂಡನೆಯಾದ ರಾಜ್ಯ ಬಜೆಟ್‌ನಲ್ಲಿ ಈ ಬೇಡಿಕೆ ಕೊನೆಗೂ ಈಡೇರಿದೆ. ಚಿಕ್ಕಬಳ್ಳಾಪುರದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ವತಿಯಿಂದ ಅಂತರರಾಷ್ಟ್ರೀಯ ಮಟ್ಟದ ಹೈಟೆಕ್ ಹೂವಿನ ಮಾರುಕಟ್ಟೆ ನಿರ್ಮಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹೂವು ಬೆಳೆಗಾರರ ಸಂಖ್ಯೆ ಹೆಚ್ಚಾಗಿದೆ. ಆದರೆ, ಮಾರುಕಟ್ಟೆಗಾಗಿ ಬೆಂಗಳೂರುವರೆಗೆ ಪ್ರಯಾಣಿಸಬೇಕಿತ್ತು. ಇದರಿಂದ ಲಾಭ ಗಳಿಸಲು ಕಷ್ಟವಾಗುತ್ತಿತ್ತು. ಹೀಗಾಗಿ ಜಿಲ್ಲೆಯಲ್ಲೇ ಒಂದು ಹೈಟೆಕ್ ಹೂವಿನ ಮಾರುಕಟ್ಟೆ ನಿರ್ಮಿಸಬೇಕು ಎಂದು ಹೂವು ಬೆಳೆಗಾರರು ಬೇಡಿಕೆ ಇಟ್ಟಿದ್ದರು. ಈ ಬಜೆಟ್‌ನಲ್ಲಿ ಕೊನೆಗೂ ಬೇಡಿಕೆ ಈಡೇರಿದೆ. ಶೀಘ್ರದಲ್ಲೇ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ವತಿಯಿಂದ ಅಂತರರಾಷ್ಟ್ರೀಯ ಮಟ್ಟದ ಹೈಟೆಕ್ ಹೂವಿನ ಮಾರುಕಟ್ಟೆ ನಿರ್ಮಾಣವಾಗಲಿದೆ. ಇದರಿಂದ ಚಿಕ್ಕಬಳ್ಳಾಪುರ ರೈತರಿಗೆ ಭಾರಿ ಅನುಕೂಲವಾಗಲಿದೆ.

ಚಿಕ್ಕಬಳ್ಳಾಪುರ ಜೊತೆಗೆ ಕೋಲಾರ ಜಿಲ್ಲೆಯ ಕೆ.ಜಿ.ಎಫ್‌ನಲ್ಲೂ ರೈತರ ಆಧುನಿಕ ಮಾರುಕಟ್ಟೆಯನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ. ಕುರಿ ಮತ್ತು ಮೇಕೆ ಸಾಕಾಣಿಕೆದಾರರಿಗೆ ಅನುಕೂಲವಾಗುವಂತೆ ಬೆಂಗಳೂರಿನಲ್ಲಿ ಸುಸಜ್ಜಿತ ಕುರಿ ಮತ್ತು ಮೇಕೆ ಮಾರುಕಟ್ಟೆಯನ್ನು ಕೂಡ ಪ್ರಾರಂಭಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.
ಎಲ್ಲೆಲ್ಲಿ ಮಾರುಕಟ್ಟೆ ನಿರ್ಮಾಣ?: ಬೆಂಗಳೂರಿನಲ್ಲಿರುವ ಮಾರುಕಟ್ಟೆ ಸಮಿತಿಗಳಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿರುವುದರಿಂದ ಬೆಂಗಳೂರಿನ ಹೊರವಲಯದಲ್ಲಿ ಹೊಸ ಸ್ಯಾಟಲೈಟ್ ಮಾರ್ಕೆಟ್ ಸ್ಥಾಪಿಸಲಾಗುವುದು. ಕೊಪ್ಪಳ ಜಿಲ್ಲೆಯ ಬೂದುಗುಂಪ ಗ್ರಾಮದಲ್ಲಿ ಕುರಿ ಮತ್ತು ಮೇಕೆ ಮಾರುಕಟ್ಟೆಯನ್ನು ಕೆಕೆಆರ್‌ಡಿಬಿ ವತಿಯಿಂದ 25 ಕೋಟಿ ರೂಪಾಯಿ ವೆಚ್ಚದಲ್ಲಿ ಅಗತ್ಯ ಮೂಲಸೌಲಭ್ಯಗಳೊಂದಿಗೆ ಸ್ಥಾಪಿಸಲಾಗುವುದು ಎಂದು ಬಜೆಟ್‌ನಲ್ಲಿ ಘೋಷಿಸಿದ್ದಾರೆ.
ಹೈನುಗಾರಿಕೆಗೆ ಒತ್ತು: ರಾಜ್ಯದ ಎಲ್ಲ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಪರವಾನಿಗೆ ಪಡೆದು ಕಾರ್ಯನಿರ್ವಹಿಸುತ್ತಿರುವ ಶ್ರಮಿಕರು ಮೃತರಾದಾಗ ಅವರ ವಾರಸುದಾರರಿಗೆ ಒಂದು ಲಕ್ಷ ರೂಪಾಯಿವರೆಗೆ ವಿಮಾ ಮೊತ್ತವನ್ನು ನೀಡಲಾಗುತ್ತಿದ್ದು, ಸದರಿ ವಿಮಾ ಮೊತ್ತವನ್ನು ಐದು ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೈನುಗಾರಿಕೆಯನ್ನು ಉತ್ತೇಜಿಸಲು 10 ಕೋಟಿ ರೂಪಾಯಿ ಅನುದಾನವನ್ನು ಪ್ರಥಮ ಹಂತದಲ್ಲಿ ನೀಡಲಾಗುವುದು. ಕಲಬುರಗಿಯಲ್ಲಿ ನೂತನ ಮೆಗಾ ಡೈರಿಯನ್ನು ಪ್ರಾರಂಭಿಸಲು ಕೆಕೆಆರ್‌ಡಿಬಿ ವತಿಯಿಂದ 50 ಕೋಟಿ ರೂಪಾಯಿ ಅನುದಾನ ಒದಗಿಸಲಾಗುವುದು. ಕಲಬುರಗಿಯಲ್ಲಿ ಪ್ರಾದೇಶಿಕ ಸಹಕಾರ ಭವನವನ್ನು 10 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿದೆ ಎಂದು ವಿವರಿಸಿದ್ದಾರೆ.

ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಪೂರ್ಣಗೊಂಡಿರುವ ಉಗ್ರಾಣಗಳ ನಿರ್ಮಾಣ ಹಾಗೂ ಮೂಲಸೌಕರ್ಯ ಕಾಮಗಾರಿಗಳನ್ನು ಪೂರ್ಣಗೊಳಿಸಲು 376 ಕೋಟಿ ರೂ. ಸಹಾಯಾನುದಾನವನ್ನು ಕಳೆದ ಬಜೆಟ್‌ನಲ್ಲಿ ಘೋಷಿಸಿದ್ದೇನೆ. ಅದರಂತೆ, ಈಗಾಗಲೇ 329 ಕೋಟಿ ರೂ. ಬಿಡುಗಡೆಗೊಳಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ, ಬಾಕಿ ಇರುವ 47 ಕೋಟಿ ರೂಪಾಯಿ ಮೊತ್ತವನ್ನು ಒದಗಿಸಲಾಗುವುದು ಎಂದು ಹೇಳಿದ್ದಾರೆ.












Click it and Unblock the Notifications