ಚಿಕ್ಕಬಳ್ಳಾಪುರದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವ ಡಾ.ಕೆ. ಸುಧಾಕರ್
ಚಿಕ್ಕಬಳ್ಳಾಪುರ, ಫೆಬ್ರವರಿ 3: ಚಿಕ್ಕಬಳ್ಳಾಪುರ ನಗರವು ಅತೀ ವೇಗವಾಗಿ ಅಭಿವೃದ್ಧಿಯಾಗುತ್ತಿದ್ದು, ಅದನ್ನು ಮತ್ತಷ್ಟು ಮೇಲ್ದರ್ಜೆಗೇರಿಸಿ ಸುಂದರ ಮಾದರಿ ನಗರವನ್ನಾಗಿಸುವ ನಿಟ್ಟಿನಲ್ಲಿ ಗ್ರಾಮೀಣ ಭಾಗದಿಂದ ಚಿಕ್ಕಬಳ್ಳಾಪುರ ನಗರಕ್ಕೆ ಪ್ರವೇಶಿಸುವ ಪ್ರಮುಖ ರಸ್ತೆಗಳನ್ನು ಉತ್ತಮ ಗುಣಮಟ್ಟದ ಕಾಂಕ್ರೀಟ್ ರಸ್ತೆಗಳನ್ನಾಗಿ ನಿರ್ಮಿಸುವ ಕಾರ್ಯಕ್ಕೆ ಇಂದು (ಗುರುವಾರ) ನಗರದ ವಿವಿಧೆಡೆ ಭೂಮಿಪೂಜೆ ನೆರವೇರಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.
ಗುರುವಾರ ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದು, ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ನಗರಕ್ಕೆ ನಂದಿ, ಮುಸ್ಟೂರು, ಮೈಲಪ್ಪನಹಳ್ಳಿ ಮತ್ತು ಮಂಚನಬೆಲೆ ಕಡೆಯಿಂದ ಸಂಪರ್ಕಿಸುವ ರಸ್ತೆಗಳನ್ನು ಸುಸಜ್ಜಿತವಾಗಿ ಅಭಿವೃದ್ಧಿಪಡಿಸಿ ಉತ್ತಮ ಸಿ.ಸಿ ರಸ್ತೆ ಹಾಗೂ ರಸ್ತೆ ಇಕ್ಕೆಲಗಳಲ್ಲಿ ಚರಂಡಿ ವ್ಯವಸ್ಥೆ ಕಲ್ಪಿಸಲು ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ. ಈ ಅನುದಾನದಲ್ಲಿ ಗ್ರಾಮೀಣ ಭಾಗದಿಂದ ನಗರಕ್ಕೆ ಆಗಮಿಸುವವರಿಗೆ ನಗರ ಎಂಬ ಮನೋಭಾವನೆ ಉಂಟಾಗುವ ರೀತಿ ಮಾದರಿಯಾಗಿ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದರು.
ಬೆಂಗಳೂರಿನಿಂದ ಚಿಕ್ಕಬಳ್ಳಾಪುರ ನಗರಕ್ಕೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯ ಚತುಷ್ಪಥ ರೀತಿಯ ರಸ್ತೆಯು ಅನೇಕ ನಗರಗಳಿಗೆ ಇಲ್ಲ. ಗ್ರಾಮೀಣ ಭಾಗದಿಂದ ನಗರವನ್ನು ಸಂಪರ್ಕಿಸುವ ರಸ್ತೆಗಳನ್ನು ಸಹ ಗುಣಮಟ್ಟದಲ್ಲಿ ನಿರ್ಮಿಸಲು ಉದ್ದೇಶಿಸಿದ್ದು, ನಗರದ ವಿವಿಧೆಡೆ ರಸ್ತೆ ನಿರ್ಮಾಣಕ್ಕೆ ಇಂದು ಭೂಮಿಪೂಜೆ ನೆರವೇರಿಸಲಾಗಿದೆ ಎಂದು ಹೇಳಿದರು.

ನೂತನ ಮಳಿಗೆಗಳಿಂದ ಆದಾಯ
ಚಿಕ್ಕಬಳ್ಳಾಪುರ ನಗರಸಭೆ ವತಿಯಿಂದ ನಗರಸಭಾ ವ್ಯಾಪ್ತಿಯ ಕೃಷ್ಣಾ ಟಾಕೀಸ್ ಮುಂಭಾಗದಲ್ಲಿ ಐ.ಡಿ.ಎಸ್.ಎಮ್.ಟಿ ಯೋಜನೆಯಡಿ ನೂತನ 13 ಮಳಿಗೆಗಳನ್ನು ನಿರ್ಮಿಸಲಾಗಿದ್ದು, ಇದು ಭವ್ಯವಾದ ಸಂಕೀರ್ಣವಾಗಿದೆ. ಅಲ್ಲದೆ ನಗರದ ಹೃದಯ ಭಾಗದಲ್ಲಿರುವುದರಿಂದ ಹೆಚ್ಚು ಬೇಡಿಕೆಯೂ ಇದ್ದು, ವಾರದೊಳಗೆ ಹರಾಜು ಕರೆದು ಬಾಡಿಗೆಗೆ ನೀಡುವ ವ್ಯವಸ್ಥೆಯನ್ನು ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿದೆ. ಇದರಿಂದ ನಗರಸಭೆಯ ವರಮಾನ ಸಹ ಹೆಚ್ಚಾಗಲಿದ್ದು, ಸಂಪನ್ಮೂಲವನ್ನು ಕ್ರೂಢಿಕರಿಸಲು ಸಹಕಾರಿಯಾಗಲಿದೆ ಎಂದರು.
ನಗರಸಭೆ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಅಭಿನಂದನೆ
ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕನಸಿನ ಯೋಜನೆಗೆ ಪೂರಕವಾಗಿ ಬ್ಯಾಂಕ್ ಆಫ್ ಬರೋಡ ಅವರೊಂದಿಗೆ ಒಪ್ಪಂದ ಮಾಡಿಕೊಂಡು ನಗರಸಭೆ ಆವರಣದಲ್ಲಿ ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆ ಶಾಖೆಯನ್ನು ತೆರೆದಿರುವುದು ಉತ್ತಮ ಕಾರ್ಯವಾಗಿದೆ. ಡಿಜಿಟಲ್ ಕಾರ್ಡ್ ಮತ್ತು ಸ್ವೈಪಿಂಗ್ ವ್ಯವಸ್ಥೆ ಒದಗಿಸಿದ್ದು, ಹಣ ಪಾವತಿ ಮಾಡಲು ಸಾಲಿನಲ್ಲಿ ನಿಲ್ಲುವ ಹಾಗೂ ಇನ್ನಿತರ ತಾಂತ್ರಿಕ ಸಮಸ್ಯೆಗಳ ಪರಿಹಾರಕ್ಕೆ ಉತ್ತಮ ಮಾರ್ಗವಾಗಿದೆ. ಇದರಿಂದ ನಗರಸಭೆಗೆ ಕೂಡ ಹೆಚ್ಚು ಹಣ ಸಂದಾಯವಾಗುತ್ತದೆ. ಈ ಕಾರ್ಯಕ್ಕೆ ಸಹಕರಿಸಿದ ನಗರಸಭೆ ಅಧ್ಯಕ್ಷರು, ಸದಸ್ಯರು, ಪೌರಾಯುಕ್ತರು ಮತ್ತು ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಅಭಿನಂದನೆ ತಿಳಿಸಿದರು.

400 ಪಶು ವೈದ್ಯರ ನೇರ ನೇಮಕ
ಕ್ಯಾಬಿನೆಟ್ ಇತ್ತೀಚೆಗೆ 400 ಪಶು ವೈದ್ಯರನ್ನು ನೇಮಕ ಮಾಡಲು ಒಪ್ಪಿಗೆ ಸೂಚಿಸಿದೆ. ಅದನ್ನು ಕೆಪಿಎಸ್‌ಸಿ ಮೂಲಕ ನೇರ ನೇಮಕಾತಿ ಮಾಡಲಾಗುತ್ತದೆ ಎಂದು ತಿಳಿಸಿದರು.
ಜಿಲ್ಲಾಮಟ್ಟದ ಪಾಲಿಕ್ಲಿನಿಕ್ ಆಸ್ಪತ್ರೆ ನಿರ್ಮಾಣ
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸುಸಜ್ಜಿತವಾದ ಜಿಲ್ಲಾಮಟ್ಟದ ಪಾಲಿಕ್ಲಿನಿಕ್ ಆಸ್ಪತ್ರೆಯನ್ನು ನಿರ್ಮಿಸಲು ಮಂಚನಬಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊನ್ನೇನಹಳ್ಳಿ ಗ್ರಾಮದ ಸರ್ವೆ ನಂ.26ರಲ್ಲಿ 1.20 ಎಕರೆ ಜಮೀನನ್ನು ಜಿಲ್ಲಾಡಳಿತದಿಂದ ಮಂಜೂರು ಮಾಡಲಾಗಿದೆ. ಈ ಆಸ್ಪತ್ರೆ ನಿರ್ಮಾಣಕ್ಕೆ 2 ಕೋಟಿ ಅನುದಾನ ಕಾಮಗಾರಿಗಾಗಿ ಲಭ್ಯವಿದೆ. ಈ ಅನುದಾನದಲ್ಲಿ ಸುಸಜ್ಜಿತ ಪ್ರಯೋಗಾಲಯ, ಪ್ರಾಣಿಗಳ ತುರ್ತುಚಿಕಿತ್ಸೆಗಾಗಿ ಆಂಬ್ಯುಲೆನ್ಸ್ ಸೇವೆ ಹಾಗೂ ತಜ್ಞ ಪಶುವೈದ್ಯರಿಂದ ಜಾನುವಾರುಗಳಿಗೆ ಚಿಕಿತ್ಸೆ ನೀಡುವ ವ್ಯವಸ್ಥೆಯನ್ನು ನಿರ್ಮಾಣವಾಗಲಿದೆ ಎಂದು ತಿಳಿಸಿ, ಈ ಆಸ್ಪತ್ರೆಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೇರವೇರಿಸಿದರು.
Recommended Video

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಆರ್. ಲತಾ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಣಾಧಿಕಾರಿ ಪಿ.ಶಿವಶಂಕರ್, ಉಪವಿಭಾಗಾಧಿಕಾರಿ ಡಾ.ಜಿ. ಸಂತೋಷ್ ಕುಮಾರ್, ತಾಲ್ಲೂಕು ತಹಸೀಲ್ದಾರ್ ಗಣಪತಿ ಶಾಸ್ತ್ರಿ, ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷರಾದ ಕೆ.ವಿ. ನಾಗರಾಜು, ನಗರಸಭೆ ಅಧ್ಯಕ್ಷರಾದ ಆನಂದರೆಡ್ಡಿ ಬಾಬು, ಪೌರಾಯುಕ್ತ ಮಾಹಂತೇಶ್, ನಗರಸಭೆ ಸದಸ್ಯರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.












Click it and Unblock the Notifications