ಮಾ. 25ರಂದು ಸತ್ಯಸಾಯಿ ಮೆಡಿಕಲ್ ಕಾಲೇಜು ಉದ್ಘಾಟನೆ: ಚಿಕ್ಕಬಳ್ಳಾಪುರಕ್ಕೆ ಪ್ರಧಾನಿ ನರೇಂದ್ರ ಮೋದಿ
ಸುಮಾರು 350ಕೋಟಿ ರೂಪಾಯಿ ವೆಚ್ಚದಲ್ಲಿ ಶ್ರೀಮಧುಸೂದನ ಸಾಯಿ ವೈದ್ಯಕೀಯ ಮತ್ತು ಸಂಶೋಧನಾ ಸಂಸ್ಥೆ ನಿರ್ಮಾಣ ಮಾಡಲಾಗಿದ್ದು, ಮಾರ್ಚ್ 25ರಂದು ಪ್ರಧಾನಿ ನರೇಂದ್ರ ಮೋದಿಯವರು ಲೋಕಾರ್ಪಣೆ ಮಾಡಲಿದ್ದಾರೆ.
ಚಿಕ್ಕಬಳ್ಳಾಪುರ, ಮಾರ್ಚ್ 9: ಮಾರ್ಚ್ 25ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಗ್ರಾಮದಲ್ಲಿ ಸುಮಾರು 350 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಶ್ರೀಮಧುಸೂದನ ಸಾಯಿ ವೈದ್ಯಕೀಯ ಮತ್ತು ಸಂಶೋಧನಾ ಸಂಸ್ಥೆಯ ಉದ್ಘಾಟನೆಗಾಗಿ ಕರ್ನಾಟಕಕ್ಕೆ ಆಗಮಿಸಲಿದ್ದಾರೆ.
ಸುಮಾರು 350ಕೋಟಿ ರೂಪಾಯಿ ವೆಚ್ಚದಲ್ಲಿ ವೈದ್ಯಕೀಯ ಮಹಾವಿದ್ಯಾಲಯದ ಕಟ್ಟಡವನ್ನು ನಿರ್ಮಾಣ ಮಾಡಲಾಗಿದೆ. ಅಂತಿಮ ಹಂತದ ಕಾಮಗಾರಿಗಳು ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಲೋಕಾರ್ಪಣೆ ಮಾಡಲಿದ್ದಾರೆ. ಕಳೆದ ವರ್ಷದ ಏಪ್ರಿಲ್ ತಿಂಗಳಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಿದ್ದರು. ಈಗ ಒಂದು ವರ್ಷಕ್ಕೂ ಮುನ್ನವೇ ಮೆಡಿಕಲ್ ಕಾಲೇಜು ಉದ್ಘಾಟನೆಗೆ ಸಿದ್ಧವಾಗಿದೆ.

400 ಹಾಸಿಗೆ ಸಾಮರ್ಥ್ಯದ ಮೆಡಿಕಲ್ ಕಾಲೇಜನ್ನು ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮದಲ್ಲಿ ವಿನೂತನ ಶೈಲಿಯಲ್ಲಿ 450 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕಾಲೇಜು ಕಟ್ಟಡ ನಿರ್ಮಾಣ ಮಾಡಲಾಗಿದೆ. ಕಟ್ಟಡಕ್ಕೆ ಶ್ರೀಸತ್ಯಸಾಯಿ ರಾಜೇಶ್ವರಿ ಕಟ್ಟಡ ಎಂದು ನಾಮಕರಣ ಮಾಡಲಾಗಿದೆ. ಮೆಡಿಕಲ್ ಕಾಲೇಜು ಆರಂಭಕ್ಕೆ ಅನುಮತಿ ನೀಡಲಾಗಿದ್ದು, 2022-23 ನೇ ಸಾಲಿನಲ್ಲಿ ದಾಖಲಾತಿ ಆರಂಭವಾಗುವ ನಿರೀಕ್ಷೆ ಇದೆ.
ಇದೇ ತಿಂಗಳ 17 ರಂದು ಸರಕಾರಿ ಮೆಡಿಕಲ್ ಕಾಲೇಜು ಉದ್ಘಾಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸಲಿದ್ದಾರೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದರು. ಇದೀಗ ಮುದ್ದೇನಹಳ್ಳಿಯ ಮೆಡಿಕಲ್ ಕಾಲೇಜು ಉದ್ಘಾಟನೆಗೆ ಮಾರ್ಚ್ 25 ರಂದು ಪ್ರಧಾನಿ ಮೋದಿ ಆಗಮಿಸಲಿದ್ದಾರೆ ಎಂದು ಮುದ್ದೇನಹಳ್ಳಿ ಸತ್ಯಸಾಯಿ ಲೋಕಸೇವಾ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಸದ್ಗುರು ಶ್ರೀಮಧುಸೂದನ ಸಾಯಿಯವರೇ ಪ್ರಧಾಮಂತ್ರಿ ಮೋದಿಯವರನ್ನು ಭೇಟಿಯಾಗಿ ಆಹ್ವಾನಿಸಿದ್ದು, ಉದ್ಘಾಟನೆಗೆ ಬರಲು ಮೋದಿ ಒಪ್ಪಿದ್ದಾರೆ ಎಂದು ಸತ್ಯಸಾಯಿ ಲೋಕಸೇವಾ ಸಂಸ್ಥೆಯ ಪ್ರಧಾನ ಸಂಪರ್ಕ ಅಧಿಕಾರಿ ಪಿ.ವಿ.ಗೋವಿಂದರೆಡ್ಡಿ ತಿಳಿಸಿದ್ದಾರೆ.
400 ಬೆಡ್‌ಗಳ ಸುಸಜ್ಜಿತ ಆಸ್ಪತ್ರೆ: ಉಚಿತ ಚಿಕಿತ್ಸೆ
ಚಿಕ್ಕಮಗಳೂರು ತಾಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ಈಗಾಗಲೇ ಸಾರ್ವಜನಿಕರಿಗೆ 350 ಬೆಡ್‌ಗಳ ವಿನೂತನ ಆಸ್ಪತ್ರೆ ಕಾರ್ಯನಿರ್ವಹಣೆ ಮಾಡುತ್ತಿದ್ದು, ಎಲ್ಲರಿಗೂ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಪ್ರತಿದಿನ ಸಾವಿರಾರು ಜನ ರೋಗಿಗಳು ಆಸ್ಪತ್ರೆಗೆ ಭೇಟಿ ನೀಡಿ ಉಚಿತ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗ ಉಚಿತ ವೈದ್ಯಕೀಯ ಕಾಲೇಜು ಸಹ ಉದ್ಘಾಟನೆಗೆ ಸಜ್ಜಾಗಿದೆ.
ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯು ಭಾರತ ರತ್ನ ಸರ್ ಎಂ.ವಿಶ್ವೇಶ್ವರಯ್ಯ ಮುದ್ದೇನಹಳ್ಳಿ ಗ್ರಾಮದ ಬಳಿ ಸತ್ಯಸಾಯಿ ಲೋಕಸೇವಾ ಸಂಸ್ಥೆ ಇದೆ. ಸಂಸ್ಥೆಯ ಅಧೀನದಲ್ಲಿ ಪ್ರಾಥಮಿಕ ಪ್ರೌಢ ಹಾಗೂ ಉನ್ನತ ವಿದ್ಯಾಭ್ಯಾಸದ ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಪುಟ್ಟಪರ್ತಿಯ ಸತ್ಯ ಸಾಯಿ ಬಾಬಾರ ಅನುಯಾಯಿಗಳು, ಭಕ್ತರು ಸಂಸ್ಥೆಯನ್ನು ನಿರ್ವಹಿಸುತ್ತಿದ್ದು, ಶ್ರೀ ಮಧುಸೂದನ್ ಸಾಯಿ, ಸಾಯಿ ಬಾಬ ಪ್ರತಿನಿಧಿಯಾಗಿ ಸಂಸ್ಥೆಗಳನ್ನು ಮುನ್ನಡೆಸುತ್ತಿದ್ದಾರೆ.
ಕಳೆದ ಕೆಲವು ತಿಂಗಳ ಹಿಂದೆ ಕೇಂದ್ರ ಗೃಹ ಸಚಿವ ಅಮೀತ್ ಶಾ ಆಶ್ರಮಕ್ಕೆ ಭೇಟಿ ನೀಡಿ 400 ಬೆಡ್‌ಗಳ ಆಸ್ಪತ್ರೆಗೆ ಶಂಕು ಸ್ಥಾಪನೆ ಮಾಡಿದ್ದು ಆಸ್ಪತ್ರೆ ಕಾಮಗಾರಿ ಪ್ರಗತಿಯಲ್ಲಿದೆ. ಮುದ್ದೇನಹಳ್ಳಿಯಲ್ಲಿ ಕಾಲೇಜು ಆರಂಭವಾಗುವುದರಿಂದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸರ್ಕಾರದ 1 ಹಾಗೂ ಖಾಸಗಿ 1 ಒಟ್ಟು ಎರಡು ಮೆಡಿಕಲ್ ಕಾಲೇಜುಗಳು ಆರಂಭವಾದಂತೆ ಆಗುತ್ತದೆ.












Click it and Unblock the Notifications