Pradeep Eshwar: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಮಧ್ಯರಾತ್ರಿ ಕಲ್ಲು ತೂರಾಟ
ಚಿಕ್ಕಬಳ್ಳಾಪುರ, ಜೂನ್ 05: 2024ರ ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದ್ದ ಹೊತ್ತಲ್ಲೇ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ ನಡೆದಿದೆ.
ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿರುವ ಶಾಸಕ ಪ್ರದೀಪ್ ಮನೆಯ ಮೇಲೆ ನಿನ್ನೆ ತಡರಾತ್ರಿ ಕಿಡಿಗೇಡಿಗಳು ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದು, ಶಾಸಕರ ಮನೆಯ ಕಿಟಕಿ ಗಾಜುಗಳು ಪುಡಿಪುಡಿಯಾಗಿದೆ.

ನಿನ್ನೆ (ಜೂನ್ 04) ಮಂಗಳವಾರ ರಾತ್ರಿ 10.15 ಸಮಯದಲ್ಲಿ ನಾಲ್ಕು ಜನ ಹುಡುಗರು ಕಲ್ಲು ತೂರಾಟ ನಡೆಸಿದ್ದಾರೆ. ಸಿಸಿಟಿವಿ ಕ್ಯಾಮೆರಾ ಸೆನ್ಸರ್ ಆನ್ ಆಗುತ್ತಿದ್ದಂತೆ ಹುಡುಗರು ಓಡಿ ಹೋದರು. ನಾಲ್ಕೈದು ಕಲ್ಲುಗಳನ್ನು ಎಸೆದಿದ್ದಾರೆ. ಮನೆಯ ಕಿಟಕಿ ಪುಡಿ ಪುಡಿ ಆಗಿದೆ. ಇದೇ ಮೊದಲ ಬಾರಿಗೆ ಈ ರೀತಿಯ ಘಟನೆ ನಡೆದಿದೆ ಎಂದು ಶಾಸಕರ ಮನೆಯ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಪೊಲೀಸ್ ಉಪಾಧೀಕ್ಷಕ ಎಸ್. ಶಿವಕುಮಾರ್, ಪೊಲೀಸ್ ಇನ್ಸ್ಪೆಕ್ಟರ್ ಎಂ.ಮಂಜುನಾಥ ಹಾಗೂ ಸಿಬ್ಬಂದಿ ಶಾಸಕರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಶಾಸಕ ಪ್ರದೀಪ್ ಈಶ್ವರ್ ಅವರ ಮನೆಯ ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮನೆಯಲ್ಲಿದ್ದವರು ಹಾಗೂ ಸಿಬ್ಬಂದಿಗಳಿಂದ ಮಾಹಿತಿ ಕಲೆ ಹಾಕಿದ್ದಾರೆ.
ನಿನ್ನೆ 2024ರ ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಗೆದ್ದ ಸಂಭ್ರಮದಲ್ಲಿ ಡಾ.ಕೆ.ಸುಧಾಕರ್ ಬೆಂಬಲಿಗರು ಈ ರೀತಿಯ ಕೃತ್ಯ ಎಸೆಗಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ.
ಶಾಸಕ ಪ್ರದೀಪ್ ಈಶ್ವರ್ ರಾಜೀನಾಮೆಗೆ ಆಗ್ರಹ
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್ ಭಾರೀ ಮತದಿಂದ ಗೆಲುವು ಸಾಧಿಸಿದ ಬೆನ್ನಲ್ಲೇ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ರಾಜೀನಾಮೆ ನೀಡಬೇಕು ಎನ್ನುವ ಆಗ್ರಹ ಜೋರಾಗಿದೆ. ಸುಧಾಕರ್ ಒಂದು ಮತದ ಮುನ್ನಡೆ ಸಾಧಿಸಿದರು ಕೂಡ ನಾನು ರಾಜೀನಾಮೆ ಕೊಡುತ್ತೇನೆ ಎಂದು ಪ್ರದೀಪ್ ಈಶ್ವರ್ ಬಹಿರಂಗವಾಗಿ ಹೇಳಿದ್ದರು. ಇದೀಗ ಈ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.












Click it and Unblock the Notifications