ಮುದ್ದೇನಹಳ್ಳಿಗೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ; 400 ಬೆಡ್ಗಳ ಆಸ್ಪತ್ರೆಗೆ ಶಂಕುಸ್ಥಾಪನೆ
ಚಿಕ್ಕಬಳ್ಳಾಪುರ, ಮಾರ್ಚ್ 30: ಕೇಂದ್ರ ಸಹಕಾರ ಸಚಿವರೂ ಆಗಿರುವ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ (ಏ.1) ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಈ ವೇಳೆ ಆಡಳಿತರೂಢ ಬಿಜೆಪಿ ವತಿಯಿಂದ ಪಕ್ಷದ ಉನ್ನತ ಮಟ್ಟದ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಮುಖ್ಯವಾಗಿ ಏಪ್ರಿಲ್ 1ರಂದು ತುಮಕೂರಿನ ಸಿದ್ದಗಂಗಾ ಮಠದಲ್ಲಿ ಲಿಂಗೈಕ್ಯ ಡಾ. ಶಿವಕುಮಾರ ಶ್ರೀಗಳ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ಅದಾದ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ ತುಮಕೂರಿನ ಕಾರ್ಯಕ್ರಮ ಮುಗಿಸಿಕೊಂಡು ಮಧ್ಯಾಹ್ನ 2 ಗಂಟೆಗೆ ವಿಶೇಷ ಹೆಲಿಕಾಪ್ಟರ್ ಮೂಲಕ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಗ್ರಾಮದಲ್ಲಿರುವ ಶ್ರೀ ಸತ್ಯಸಾಯಿ ಆಶ್ರಮಕ್ಕೆ ಭೇಟಿ ನೀಡಿ, 400 ಬೆಡ್ಗಳ ಸತ್ಯಸಾಯಿ ಸರಳಾ ಮೇಮೊರಿಯಲ್ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಏಪ್ರಿಲ್ 1ರಂದು ಸಿದ್ಧಗಂಗಾ ಮಠಕ್ಕೆ ಅಮಿತ್ ಶಾ ಭೇಟಿ
ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ, ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ್ ಸೇರಿದಂತೆ ಇನ್ನೂ ಅನೇಕ ಸಚಿವರು, ಶಾಸಕರು ಸಾಥ್ ನೀಡಲಿದ್ದಾರೆ. ಅಮಿತ್ ಶಾ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮುದ್ದೇನಹಳ್ಳಿಯಲ್ಲಿ ಭರದ ಸಿದ್ಧತೆ ನಡೆದಿದ್ದು, ಬಿಗಿ ಭದ್ರತೆ ಏರ್ಪಾಡುಗಳನ್ನೂ ಕೈಗೊಳ್ಳಲಾಗಿದೆ.
ಸತ್ಯಸಾಯಿ ಸಮಾಗಮಾ ಕ್ರೀಡಾಂಗಣದಲ್ಲಿ 50 ನಿಮಿಷಗಳ ಕಾಲ ಆಶ್ರಮದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸತ್ಯಸಾಯಿ ಲೋಕಶಿಕ್ಷಣ ಸಂಸ್ಥೆಗಳು ಹಾಗೂ ಸತ್ಯಸಾಯಿ ಬಾಬಾ ಆಶ್ರಮದಿಂದ, ಆಶ್ರಮದ ಆವರಣದಲ್ಲಿ 400 ಬೆಡ್ಗಳ ಶ್ರೀ ಸತ್ಯಸಾಯಿ ಸರಳಾ ಮೆಮೋರಿಯಲ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿಪೂಜೆ ನೆರೆವೇರಿಸಲಿದ್ದಾರೆ.
ಅಮಿತ್ ಶಾಗೆ ಝಡ್+ ಕ್ಯಾಟಗರಿ ಭದ್ರತೆ
ಕೇಂದ್ರ ಗೃಹ ಹಾಗೂ ಸಹಕಾರಿ ಸಚಿವ ಅಮಿತ್ ಶಾ ಝಡ್+ ಕ್ಯಾಟಗರಿ ಭದ್ರತೆಯನ್ನು ಹೊಂದಿದ್ದಾರೆ. ಇದರಿಂದ ಇಂದು ಮುದ್ದೇನಹಳ್ಳಿಯ ಸತ್ಯಸಾಯಿ ಆಶ್ರಮಕ್ಕೆ ಎಎಸ್ಎಲ್ ತಂಡ, ಕೇಂದ್ರ ಗೃಹ ಇಲಾಖೆಯ ಅಧಿಕಾರಿಗಳು ಸೇರಿದಂತೆ ರಾಜ್ಯ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಚಿಕ್ಕಬಳ್ಳಾಪುರ ಎಸ್ಪಿ ಸಭೆ ನಡೆಸಿದರು.

ಕಾರ್ಯಕ್ರಮ ನಡೆಯುವ ಸ್ಥಳ ಹಾಗೂ ಹೆಲಿಪ್ಯಾಡ್ನಿಂದ ಕಾರ್ಯಕ್ರಮದ ವೇದಿಕೆಯವರೆಗೂ ಬಂದು ಹೋಗುವ ಸ್ಥಳ ಪರಿಶೀಲನೆ ನಡೆಸಿ, ಪೊಲೀಸ್ ಭದ್ರತೆಯ ಬಗ್ಗೆ ಚರ್ಚೆ ನಡೆಸಿದರು. ಕಾರ್ಯಕ್ರಮಕ್ಕೆ ಸಿಆರ್ಪಿಎಫ್, ರಾಜ್ಯ ಪೊಲೀಸ್ ಇಲಾಖೆ ಮತ್ತು ರಾಜ್ಯ ವಿಚಕ್ಷಣ ದಳ ಸೇರಿದಂತೆ ವಿವಿಧ ಏಜೆನ್ಸಿಗಳಿಂದ ಭದ್ರತೆಗೆ ಏರ್ಪಾಡು ಮಾಡಿಕೊಂಡಿದ್ದಾರೆ.
ಅಮಿತ್ ಶಾರವರು ಆಗಮಿಸುತ್ತಿರುವುದು ಖಾಸಗಿ ಕಾರ್ಯಕ್ರಮವಾದರೂ ರಾಜ್ಯದ ಮುಖ್ಯಮಂತ್ರಿ, ಕೇಂದ್ರ ಸಚಿವರುಗಳು, ಬಿಜೆಪಿ ರಾಜ್ಯಾಧ್ಯಕ್ಷರು ಆಗಮಿಸುತ್ತಿರುವ ಕಾರಣ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸಭೆಯಲ್ಲಿ ಹಾಜರಿದ್ದು, ಅಮಿತ್ಶಾ ಅವರ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಮನವಿ ಮಾಡಿದರು.