Breaking; ಚಿಕ್ಕಮಗಳೂರು ಪಿಯು ಪರೀಕ್ಷಾ ಕೇಂದ್ರಕ್ಕೆ ಸಚಿವರ ಭೇಟಿ
ಚಿಕ್ಕಮಗಳೂರು, ಏಪ್ರಿಲ್ 22; ಶುಕ್ರವಾರದಿಂದ ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಿವೆ. ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಸೇರಿದಂತೆ ಹಲವು ರಾಜಕೀಯ ನಾಯಕರು ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್ ಹೇಳಿದರು.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಚಿಕ್ಕಮಗಳೂರು ನಗರದ ಜ್ಯೂನಿಯರ್ ಕಾಲೇಜು ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದರು. ವಿದ್ಯಾರ್ಥಿಗಳ ಜೊತೆ ಮಾತುಕತೆ ನಡೆಸಿ ಶುಭ ಕೋರಿದರು.
ಹಿಜಾಬ್ ಸೇರಿದಂತೆ ಧಾರ್ಮಿಕ ಗುರುತು ಸೂಚಿಸುವ ವಸ್ತ್ರಗಳನ್ನು ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ ಇಲಾಖೆ ಹೇಳಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಪಡೆದ ವರದಿ ಕಡ್ಡಾಯವಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ರಾಜ್ಯಾದ್ಯಂತ ಒಟ್ಟು 1076 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯುತ್ತಿವೆ. ಪರೀಕ್ಷಾ ಕೇಂದ್ರದ ಸುತ್ತ 144 ಸೆಕ್ಷನ್ ಹಾಕಲಾಗಿದೆ. 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಹಿಜಾಬ್ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗುತ್ತದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕ ಆರ್. ರಾಮಚಂದ್ರನ್ ಹೇಳಿದ್ದಾರೆ.
ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ವಿದ್ಯಾರ್ಥಿಗಳು ಕೆಎಸ್ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಹಾಲ್ ಟಿಕೆಟ್ ತೋರಿಸಿ ಉಚಿತವಾಗಿ ಸಂಚಾರ ನಡೆಸಲು ಅವಕಾಶ ನೀಡಲಾಗಿದೆ.
ಹಿಜಾಬ್ ತೆಗೆಯಲು ಒಪ್ಪಿಗೆ; ಮಂಗಳೂರಿನ ರಥಬೀದಿಯ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಪರೀಕ್ಷೆ ಬರೆಯಲು ಆಗಮಿಸಿದ್ದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದ್ದರು. ಪರೀಕ್ಷಾ ಕೇಂದ್ರದ ಪ್ರವೇಶ ದ್ವಾರದಲ್ಲಿಯೇ ಪೊಲೀಸರು ಅವರನ್ನು ತಡೆದರು. ಹಿಜಾಬ್ ತೆಗದು ಬರುವಂತೆ ಪೊಲೀಸರು ಸೂಚನೆ ನೀಡಿದರು. ಇದಕ್ಕೆ ಒಪ್ಪಿದ ವಿದ್ಯಾರ್ಥಿಗಳು ಹಿಜಾಬ್ ತೆಗೆದಿಟ್ಟು ಪರೀಕ್ಷಾ ಕೇಂದ್ರಕ್ಕೆ ಹೋದರು.












Click it and Unblock the Notifications