ಮೂರು ತಿಂಗಳುಗಳ ಕಾಲ ಕೆಟ್ಟದ್ದನ್ನ ನೋಡಲ್ಲ, ಕೇಳಲ್ಲ, ಮಾತಾಡಲ್ಲ: ಕುತೂಹಲ ಕೆರಳಿಸಿದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ
3 ತಿಂಗಳೂಗಳ ಕಾಲ ಕೆಟ್ಟದ್ದನ್ನು ನೋಡುವುದಿಲ್ಲ, ಕೇಳುವುದಿಲ್ಲ, ಮಾತನಾಡುವುದಿಲ್ಲ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇಕೆ?
ಚಿಕ್ಕಮಗಳೂರು, ಫೆಬ್ರವರಿ, 06: ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಮೂರು ತಿಂಗಳುಗಳ ಕಾಲ ಕೆಟ್ಟದ್ದನ್ನು ನೋಡಲ್ಲ, ಕೇಳಲ್ಲ, ಕೆಟ್ಟ ವಿಚಾರಗಳ ಬಗ್ಗೆ ಮಾತನಾಡಲ್ಲ. ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಬಹಳ ಸಹನೆ, ತಾಳ್ಮೆಯಿಂದ ಚುನಾವಣೆಯನ್ನು ಎದುರಿಸಬೇಕಾಗಿದೆ ಎಂದು ಕೆಪಿಸಿಸಿ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ಚಿಕ್ಕಮಗಳೂರಿನಲ್ಲಿ ತಿಳಿಸಿದ್ದಾರೆ.
ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ನಯನಾ ಮೋಟಮ್ಮ ಅವರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾಂದಿ ಗ್ರಾಮದಲ್ಲಿ ಮಹಿಳೆಯರಿಗಾಗಿ ಆಯೋಜಿಸಿದ್ದ ಆಶಾಕಿರಣ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು. ರಮೇಶ್ ಜಾರಕಿಹೊಳಿ ಅವರು ಸಿ.ಡಿ ವಿಚಾರದಲ್ಲಿ ನೀಡಿರುವ ಹೇಳಿಕೆಗಳ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಈ ಸಂಬಂಧ ಈಗಾಗಲೇ ಮಾಧ್ಯಮದವರಿಗೆ ಸ್ಪಷ್ಟನೆಯನ್ನೂ ನೀಡಿದ್ದೇನೆ ಎಂದರು.
ತಾಳ್ಮೆಯಿಂದ ಕೆಲಸ ಮಾಡಬೇಕಿದೆ
ಚುನಾವಣೆ ಹಿನ್ನೆಲೆಯಲ್ಲಿ ಮುಂದಿನ ಮೂರು ತಿಂಗಳುಗಳ ಕಾಲ ನಾನು ತಾಳ್ಮೆಯಿಂದ ಕೆಲಸ ಮಾಡಬೇಕಿದೆ. ನನ್ನ ಕ್ಷೇತ್ರದಲ್ಲಿ ನಾನು ಮಾಡಿರುವ ಅಭಿವೃದ್ಧಿ ಕೆಲಸಗಳಿಂದಲೇ ಮತ್ತೆ ಚುನಾವಣೆಯಲ್ಲಿ ಗೆಲ್ಲಬೇಕಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಜವಬ್ದಾರಿಯೂ ನನ್ನ ಮೇಲಿದೆ ಎಂದರು.

ಕಾಂಗ್ರೆಸ್ ಮಹಿಳೆಯರ ಪರ ಇರುವ ಪಕ್ಷ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮಾತ್ರ ಮಹಿಳೆಯರಿಗೆ ಎಲ್ಲ ರೀತಿಯ ಹಕ್ಕುಗಳು ಸಿಗಲು ಸಾಧ್ಯ. ಮಹಿಳೆಯರ ಪರ ಇರುವ ಪಕ್ಷ ಕಾಂಗ್ರೆಸ್ ಆಗಿದ್ದು, ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು. ಕಾಂಗ್ರೆಸ್ ಪಕ್ಷದಿಂದ ಮಾತ್ರ ಮಹಿಳೆಯ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದರು.
ಮಾಜಿ ಸಿಎಂ ಕುಮಾರಸ್ವಾಮಿ ಅವರು ಹೆಬ್ಬಾಳ್ಕರ್ ಬಗ್ಗೆ ನೀಡಿರುವ ಹೇಳಿಕೆ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮಾಜಿ ಸಿಎಂ ಕುಮಾರಸ್ವಾಮಿ ಅವರು ನನ್ನ ಅಣ್ಣನಿದ್ದಂತೆ. ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ಯಾವ ಮೂಲದದಿಂದ ನನ್ನ ಬಗ್ಗೆ ಹೇಳಿಕೆ ನೀಡಿದ್ದಾರೆಯೋ ಗೊತ್ತಿಲ್ಲ. ಅವರು ಏನು ಹೇಳಿದ್ದಾರೆಂಬುದನ್ನೂ ನಾನು ನೋಡಿಲ್ಲ, ಕೇಳಿಲ್ಲ. ಆದ್ದರಿಂದ ನಾನು ಅದಕ್ಕೆ ಪ್ರತಿಕ್ರಿಯೆಯನ್ನೂ ನೀಡಲ್ಲ ಎಂದು ಹೇಳಿದರು.












Click it and Unblock the Notifications