ಡಿ.ಬಿ.ಚಂದ್ರೇಗೌಡರ ಅಂತಿಮ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್‌ಕುಮಾರ್
ಚಿಕ್ಕಮಗಳೂರು, ನವೆಂಬರ್, 08: ಮಾಜಿ ಸಚಿವ ಡಿ.ಬಿ.ಚಂದ್ರೇಗೌಡ ಅವರು ನಿನ್ನೆ ವಿಧಿವಶವಾಗಿದ್ದು, ಇಂದು ಸ್ವಗ್ರಾಮ ಮೂಡಿಗೆರೆ ತಾಲೂಕಿನ ದಾರದಹಳ್ಳಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ. ಈ ಹಿನ್ನೆಲೆ ಇಂದು ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಡಿ.ಬಿ.ಚಂದ್ರೇಗೌಡ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.

ಅಮೇರಿಕಾದಿಂದ ಬರುತ್ತಿರುವ ಚಂದ್ರೇಗೌಡ ಅವರ ಮಗಳಿಗಾಗಿ ಕುಟುಂಬ ಕಾಯುತ್ತಿದ್ದು, ಮಗಳು ಬಂದ ಕೂಡಲೇ ಅಂತ್ಯ ಸಂಸ್ಕಾರ ನೆರವೇರಿಸಲಿದ್ದಾರೆ. ಇನ್ನ ಸಿಎಂ ಸಿದ್ದರಾಯ್ಯ ಅವರು ಮಧ್ಯಾಹ್ನ 12 ಗಂಟೆ ನಂತರ ಡಿ.ಬಿ.ಚಂದ್ರೇಗೌಡ ಅವರ ಅಂತಿಮ ದರ್ಶನಕ್ಕೆ ಆಗಮಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅಂತಿಮ ದರ್ಶನ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.
ಡಿ.ಬಿ.ಚಂದ್ರೇಗೌಡರ ರಾಜಕೀಯದ ಹಾದಿ
ಸಮಾಜವಾದಿ ಚಿಂತಕರಾಗಿದ್ದ ಡಿ.ಬಿ.ಚಂದ್ರೇಗೌಡರು ನಾಲ್ಕೂವರೆ ದಶಕಗಳ ಕಾಲ ರಾಜ್ಯ ಮತ್ತು ರಾಷ್ಟ್ರ ಮಟ್ಟದ ರಾಜಕೀಯ ಮತ್ತು ಸಾರ್ವಜನಿಕ ಜೀವನದಲ್ಲಿ ತಮ್ಮನ್ನು ವೈವಿದ್ಯಮಯವಾಗಿ ತೊಡಗಿಸಿಕೊಂಡಿದ್ದರು. 2014 ರಿಂದ ಈಚೆಗೆ ಸಕ್ರಿಯ ರಾಜಕೀಯದಿಂದ ಹಿಂದೆ ಸರಿದಿದ್ದರು. ದಾರದಹಳ್ಳಿಯ ತಮ್ಮ ಪೂರ್ಣಚಂದ್ರ ನಿವಾಸದಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದರು.
ದೇಶ ಕಂಡ ಹಿರಿಯ ರಾಜಕೀಯ ಮುತ್ಸದ್ದಿಗಳಲ್ಲಿ ಒಬ್ಬರಾಗಿದ್ದ ಡಿ.ಬಿ.ಚಂದ್ರೇಗೌಡ ಅವರು ವಿಧಾನಸಭೆ, ವಿಧಾನ ಪರಿಷತ್ತು, ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರಾಗಿ ಕಾರ್ಯನಿರ್ವಹಿಸಿದ ಅಪರೂಪದ ರಾಜಕಾರಣಿ. ಮೂಡಿಗೆರೆ ತಾಲ್ಲೂಕಿನ ದಾರದಹಳ್ಳಿ ಪಟೇಲ್ ಬೈರೇಗೌಡ ಶ್ರೀಮತಿ ಪುಟ್ಟಮ್ಮ ದಂಪತಿಯ ಪುತ್ರರಾಗಿ 1936ರ ಆಗಸ್ಟ್ 26ರಂದು ಜನಿಸಿದ್ದ ಚಂದ್ರೇಗೌಡರು ಕಾನೂನು ಪದವಿ ಪಡೆದು ವಕೀಲಿ ವೃತ್ತಿಯಲ್ಲಿದ್ದರು.
ರಾಜಕೀಯವಾಗಿ ಕಾಂಗ್ರೆಸ್ ಪಕ್ಷದಲ್ಲಿ ತೊಡಗಿಸಿಕೊಂಡಿದ್ದ ಚಂದ್ರೇಗೌಡ ಅವರು 1977ರಲ್ಲಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಂಸದರಾಗಿದ್ದರು. 1977ರಲ್ಲಿ ಎರಡನೇ ಅವಧಿಗೆ ಸಂಸದರಾಗಿ ಆಯ್ಕೆಯಾಗಿ, 1978ರಲ್ಲಿ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿ ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಲೆಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜಕೀಯ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದರು.
ರಾಜಕೀಯವಾಗಿ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಗೆ ರಾಜಕೀಯ ಮರು ಹುಟ್ಟು ನೀಡಲು ಕ್ಷೇತ್ರ ತ್ಯಾಗ ಮಾಡಿ, ಕಾಂಗ್ರೆಸ್ ಇತಿಹಾಸದಲ್ಲಿ ಅಜರಾಮರರಾಗಿ ಉಳಿದರು. ನಂತರ ವಿಧಾನಪರಿಷತ್ ಸದಸ್ಯರಾಗಿ ಮುಖ್ಯಮಂತ್ರಿ ದೇವರಾಜು ಅರಸು ಅವರ ಸಂಪುಟದಲ್ಲಿ 1979-1980ನೇ ಅವಧಿಯಲ್ಲಿ ನೀರಾವರಿ ಸಚಿವರಾಗಿದ್ದರು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ದೇವರಾಜು ಅರಸು ಅವರೊಂದಿಗೆ ಕ್ರಾಂತಿರಂಗದಲ್ಲಿ ಗುರುತಿಸಿಕೊಂಡು 1980-81ರಲ್ಲಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರೂ ಆಗಿದ್ದರು.
1983ರಲ್ಲಿ ಜನತಾ ಪಕ್ಷದಿಂದ ತೀರ್ಥಹಳ್ಳಿ ಕ್ಷೇತ್ರದಿಂದ ವಿಧಾನಸಭಾ ಸದಸ್ಯರಾಗಿ ಗೆದ್ದಿದ್ದರು. ರಾಮಕೃಷ್ಣ ಹೆಗ್ಡೆಯವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ 1983-85 ರವರೆಗೆ ಚಂದ್ರೇಗೌಡರು ವಿಧಾನಸಭಾ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು. 1986ರಲ್ಲಿ ಜನತಾ ಪಕ್ಷದಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. 1987ರಲ್ಲಿ ತೀರ್ಥಹಳ್ಳಿ ಕ್ಷೇತ್ರದಿಂದ ಎರಡನೇ ಅವಧಿಗೆ ವಿಧಾನಸಭೆಗೆ ಪ್ರವೇಶಿಸಿದ್ದರು.
1999ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಶೃಂಗೇರಿ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿ 1999 ರಿಂದ 2004ರ ವರೆಗೆ ಎಸ್.ಎಂ.ಕೃಷ್ಣಾ ಸಂಪುಟದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದರು. ಇದೇ ಅವಧಿಯಲ್ಲಿ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರರೂ ಆಗಿದ್ದರು.
2009ರಲ್ಲಿ ಬಿ.ಜೆ.ಪಿ. ಅಭ್ಯರ್ಥಿಯಾಗಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿ ಪೂರ್ಣ ಐದು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.
ಸಮಾಜವಾದಿ ಚಿಂತಕರಾಗಿದ್ದ ಡಿ.ಬಿ.ಚಂದ್ರೇಗೌಡರು ನಾಲ್ಕೂವರೆ ದಶಕಗಳ ಕಾಲ ರಾಜ್ಯ ಮತ್ತು ರಾಷ್ಟ್ರ ಮಟ್ಟದ ರಾಜಕೀಯ ಮತ್ತು ಸಾರ್ವಜನಿಕ ಜೀವನದಲ್ಲಿ ತಮ್ಮನ್ನು ವೈವಿದ್ಯಮಯವಾಗಿ ತೊಡಗಿಸಿಕೊಂಡಿದ್ದರು.
2014ರಿಂದ ಈಚೆಗೆ ಸಕ್ರಿಯ ರಾಜಕೀಯದಿಂದ ಹಿಂದೆ ಸರಿದಿದ್ದರು. ದಾರದಹಳ್ಳಿಯ ತಮ್ಮ ಪೂರ್ಣಚಂದ್ರ ನಿವಾಸದಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದರು. ಮಂಗಳವಾರ (ನವೆಂಬರ್ 07) ಮುಂಜಾನೆ ತಮ್ಮ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದು, ಇಹಲೋಕದ ಪಯಣ ಮುಗಿಸಿದ್ದಾರೆ.












Click it and Unblock the Notifications