ಮಹಿಳಾ ದೌರ್ಜನ್ಯ ತಡೆಗೆ ಜಾಗೃತಿ ಅಗತ್ಯ: ಚಿಕ್ಕಮಗಳೂರು ಜಿಲ್ಲಾಧಿಕಾರಿ
ಚಿಕ್ಕಮಗಳೂರು, ಆಗಸ್ಟ್, 11: ಮಹಿಳೆಯರ ಮೇಲೆ ನಡೆಯುವ ಕೌಟುಂಬಿಕ ದೌರ್ಜನ್ಯ, ಬಾಲ್ಯ ವಿವಾಹ ತಡೆಯುವ ನಿಟ್ಟಿನಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್.ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಇಂದು ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ ಬಾಲ್ಯ ವಿವಾಹ ಸಮನ್ವಯ ಮತ್ತು ಪರಿಶೀಲನಾ ಮಹಿಳೆಯರು ಮತ್ತು ಮಕ್ಕಳ ಸಾಗಾಣಿಕೆ ತಡೆ ಕುರಿತು ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಗಳ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಕೌಟುಂಬಿಕ ದೌರ್ಜನ್ಯದ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ, ಸರ್ಕಾರೇತರ ಸಂಸ್ಥೆಗಳು ಸೇರಿದಂತೆ ಮಹಿಳೆಯರಿಗೆ ಇರುವ ಕಾನೂನುಗಳ ಬಗ್ಗೆ ಮಾಹಿತಿ ನೀಡಿ ಜಾಗೃತಿ ಮೂಡಿಸಬೇಕು ಎಂದ ಅವರು, ಕೌಟುಂಬಿಕ ಹಿಂಸೆಯಿಂದ ಹಾಗೂ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳಿಗೆ ತ್ವರಿತಗತಿಯಲ್ಲಿ ನ್ಯಾಯ ದೊರಕಿಸಿಕೊಡಲು ಕ್ರಮವಹಿಸಬೇಕು ಎಂದರು.
ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳು ನಡೆಯದಂತೆ ಸಂಬಂಧಪಟ್ಟ ಇಲಾಖೆಗಳು ಕ್ರಮವಹಿಸಿ ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿಸಬೇಕು. ಬಾಲ್ಯ ವಿವಾಹ ನಿಯಂತ್ರಣ ಕಾಯ್ದೆ ಬಳಸಿಕೊಂಡು ಬಾಲ್ಯ ವಿವಾಹಕ್ಕೆ ಪ್ರೋತ್ಸಾಹಿಸುವವರಿಗೆ ತಕ್ಕ ಶಿಕ್ಷೆಯಾಗುವಂತೆ ಅಧಿಕಾರಿಗಳು ಕಾಳಜಿ ವಹಿಸಬೇಕು. ಅಲ್ಲದೆ, ಬಾಲ್ಯ ವಿವಾಹ ತಡೆಯುವ ಕುರಿತಂತೆ ಹೆಚ್ಚು ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಸೂಚಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಸಭೆಗೆ ಮಾಹಿತಿ ನೀಡಿ, ಜಿಲ್ಲೆಯಲ್ಲಿ 23 ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿದ್ದು, ಈ 23 ಮಕ್ಕಳನ್ನು ಪೋಷಕರ ವಶಕ್ಕೆ ನೀಡಲಾಗಿದೆ. ಬಾಲ್ಯ ವಿವಾಹ ನಡೆದ 2 ಪ್ರಕರಣದಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣ ತನಿಖೆ ಹಂತದಲ್ಲಿದೆ. ಗ್ರಾಮ ಪಂಚಾಯಿತಿಗಳಲ್ಲಿ ಮಕ್ಕಳ ವಿಶೇಷ ಗ್ರಾಮಸಭೆಗಳಲ್ಲಿ ಬಾಲ್ಯವಿವಾಹ ಮತ್ತು ಮಕ್ಕಳ ಹಕ್ಕುಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಎಲ್ಲಾ ಪುರೋಹಿತ, ಅರ್ಚಕರು ಹಾಗೂ ಕಲ್ಯಾಣ ಮಂಟಪಗಳಲ್ಲಿ ವಧು, ವರರ ವಯಸ್ಸನ್ನು ಖಾತ್ರಿಪಡಿಸಿಕೊಂಡ ನಂತರವೇ ಕಲ್ಯಾಣ ಮಂಟಪ ನೀಡುವ ಕುರಿತು ಜಿಲ್ಲಾಧಿಕಾರಿಗಳಿಂದ ವಿಶೇಷ ಸೂಚನಾ ಪತ್ರವನ್ನು ಹೊರಡಿಸುವ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಅಲ್ಲದೆ ವಿವಾಹ ತಡೆಯುವ ಸಂಬಂಧ ಮಕ್ಕಳ ಸಹಾಯವಾಣಿ 1098 ಕಾರ್ಯ ನಿರ್ವಹಿಸುತ್ತಿದೆ ಹಾಗೂ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಬಾಲ್ಯ ವಿವಾಹ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.












Click it and Unblock the Notifications