ಮಲೆನಾಡಿನಲ್ಲೂ ಬರ: ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುಂಜಾಗ್ರತ ಕ್ರಮಕ್ಕೆ ಸೂಚನೆ
ಚಿಕ್ಕಮಗಳೂರು, ನವೆಂಬರ್ 07 : ಚಿಕ್ಕಮಗಳೂರು ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗದಂತೆ ಎಲ್ಲಾ ಅಧಿಕಾರಿಗಳು ಮುಂಜಾಗ್ರತೆಯಾಗಿ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಬರ ನಿರ್ವಹಣೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗಾಗಲೇ ಕಡೂರು ಹಾಗೂ ಅಜ್ಜಂಪುರ ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕುಗಳೆಂದು ಹಾಗೂ ಕೊಪ್ಪ, ನರಸಿಂಹರಾಜಪುರ, ಶೃಂಗೇರಿ, ಮೂಡಿಗೆರೆ ಹಾಗೂ ಕಳಸ ತಾಲೂಕುಗಳನ್ನು ಸಾಧಾರಣ ಬರಪೀಡಿತ ತಾಲೂಕುಗಳೆಂದು ಸರ್ಕಾರ ಘೋಷಣೆ ಮಾಡಿದೆ.

ಹೀಗಾಗಿ ಜಿಲ್ಲೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರು, ಮೇವು ಪೂರೈಕೆಯಲ್ಲಿ ವೇತ್ಯಯವಾಗದಂತೆ ಸಿದ್ಧತೆಗಳನ್ನು ಮಾಡಿಕೊಳ್ಳಲು ಸೂಚಿಸಿದ ಅವರು ಜಿಲ್ಲೆಯ ಎಲ್ಲ ತಾಲೂಕುಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು ಅವರುಗಳು ಕೂಡಲೇ ಎಲ್ಲ ತಾಲೂಕು ಅಧಿಕಾರಿಗಳ ಸಭೆ ನಡೆಸಿ ಪ್ರತಿ ಹಳ್ಳಿಗಳ ಮಾಹಿತಿ ಪಡೆದು ಅಲ್ಲಿಗೆ ಬೇಕಾಗಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಹಾಗೂ ಸಾಂಕ್ರಾಮಿಕ ರೋಗಗಳ ಬಗ್ಗೆ ಎಚ್ಚರ ವಹಿಸುವುದು ಬಹಳ ಮುಖ್ಯವಾಗಿದೆ ಎಂದು ಹೇಳಿದರು.
ಹಳೇ ಬೋರ್ ವೆಲ್‌ಗಳನ್ನು ಮರುಪೂರಣಗೊಳಿಸುವಂತೆ ತಿಳಿಸಿದ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್, ಕುಡಿಯುವ ನೀರಿನ ಸಮಸ್ಯೆಗಳು ಇರುವ ಗ್ರಾಮಗಳಲ್ಲಿ ಖಾಸಗಿ ಬೋರೆ ವೆಲ್‌ಗಳನ್ನು ವಶಕ್ಕೆ ಪಡೆದು ಆ ಮೂಲಕ ಗ್ರಾಮಗಳಿಗೆ ನೀರು ಒದಗಿಸಬೇಕು. ಖಾಸಗಿ ಬೋರೆವೆಲ್ ಲಭ್ಯವಿಲ್ಲದೆ ಹೋದಲ್ಲಿ ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರನ್ನು ಸರಬರಾಜು ಮಾಡಲು ಯೋಜನೆ ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು.
ಕೃಷಿ ಹಾಗೂ ಕುಡಿಯುವ ನೀರಿಗೆ ಸಮರ್ಪಕ ವಿದ್ಯುತ್ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಜಿಲ್ಲೆಯಲ್ಲಿ ಅಗತ್ಯವಿರುವ ಕಡೆಗಳಲ್ಲಿ ಗೋಶಾಲೆ ಹಾಗೂ ಮೇವು ಬ್ಯಾಂಕ್ ತೆರೆಯಲು ಸರ್ವೆ ಮಾಡಿ ಅಗತ್ಯ ಕ್ರಮ ಕೈಗೊಳ್ಳಲು ಎಲ್ಲ ತಾಲೂಕು ತಹಸೀಲ್ದಾರ್‌ಗಳು ನೋಡಲ್ ಅಧಿಕಾರಿಗಳು ಹಾಗೂ ಸಂಬಂಧ ಪಟ್ಟ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕು. ಬರ ನಿರ್ವಹಣೆ ಕುರಿತು ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.












Click it and Unblock the Notifications