ಹುತ್ತಿನಮಕ್ಕಿ ಗ್ರಾಮಕ್ಕೆ ಸ್ಮಶಾನ ಮಂಜೂರಾತಿಗೆ ಆಗ್ರಹ: ಜಯಪುರ ನಾಡಕಚೇರಿ ಎದುರು ಶವವಿಟ್ಟು ಪ್ರತಿಭಟನೆ
ಚಿಕ್ಕಮಗಳೂರು, ಡಿಸೆಂಬರ್, 23: ಹುತ್ತಿನಮಕ್ಕಿ ಗ್ರಾಮಕ್ಕೆ ಸ್ಮಶಾನ ಮಂಜೂರು ಮಾಡುವಂತೆ ಆಗ್ರಹಿಸಿ ಅಲ್ಲಿನ ಸ್ಥಳೀಯರು ಮೃತದೇಹವನ್ನು ಜಯಪುರ ನಾಡಕಚೇರಿ ಬಳಿ ಇಟ್ಟು ಪ್ರತಿಭಟನೆ ನಡೆಸಿದ್ದಾರೆ.
ಹೇರೂರು ಸಮೀಪದ ಹುತ್ತಿನಮಕ್ಕಿ ಗ್ರಾಮಕ್ಕೆ ಸ್ಮಶಾನವನ್ನು ಮಂಜೂರು ಮಾಡುವಂತೆ ಶವವಿಟ್ಟು ಪ್ರತಿಭಟನೆ ನಡೆಸಿರುವ ಘಟನೆ ಕೊಪ್ಪ ತಾಲೂಕಿನ ಜಯಪುರ ನಾಡಕಚೇರಿ ಬಳಿ ನಡೆದಿದೆ. ಈ ಗ್ರಾಮದಲ್ಲಿ ಸುಮಾರು 50ಕ್ಕೂ ಹೆಚ್ಚು ಕುಟುಂಬಗಳು ವಾಸವಿದ್ದು, ಊರಿನಲ್ಲಿ ಸ್ಮಶಾನದ ವ್ಯವಸ್ಥೆ ಇಲ್ಲದಂತಾಗಿದೆ. ಕಳೆದ ಹತ್ತಾರು ವರ್ಷಗಳಿಂದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಅಂತ್ಯಸಂಸ್ಕಾರಕ್ಕೆ ಜಾಗವನ್ನು ನೀಡುವಂತೆ ಒತ್ತಾಯಿಸಿ, ಮನವಿ ಮಾಡಿಕೊಂಡು ಬಂದಿದ್ದರು. ಆದರೂ ಸಹ ಈವರೆಗೂ ಗ್ರಾಮಕ್ಕೆ ಸ್ಮಶಾನ ಮಂಜೂರಾತಿ ಆಗಿಲ್ಲ ಎಂದು ಗ್ರಾಮಸ್ಥರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಸ್ಮಶಾನಕ್ಕಾಗಿ ಪಟ್ಟು, ಶವವಿಟ್ಟು ಪ್ರತಿಭಟನೆ
ಸ್ಮಶಾನಕ್ಕಾಗಿ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಸಹ ಬಹಿಷ್ಕರಿಸಲು ಕರೆ ಕೊಟ್ಟಿದ್ದರು. ಆದರೆ, ತಾಲೂಕು ಆಡಳಿತ ಆ ಸಂದರ್ಭದಲ್ಲಿ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿತ್ತು. ಇಲ್ಲಿನ ಜನರು ವಾಸವಿರುವ ಭೂಮಿಯ ಸರ್ವೆ ನಂಬರ್ 166ರಲ್ಲಿ ಸುಮಾರು 40ಕ್ಕೂ ಹೆಚ್ಚು ಹೆಕ್ಟೇರ್ ಭೂಮಿ ಕಂದಾಯ ಇಲಾಖೆಗೆ ಸೇರಿದ್ದಾಗಿದೆ. ಈ ಸದರಿ ಭೂಮಿಯನ್ನು ಪ್ರಭಾವಿಗಳು ಒತ್ತುವರಿ ಮಾಡಿಕೊಂಡಿದ್ದಾರೆ. ಆದ್ದರಿಂದ ನಮ್ಮ ಮೂಲಭೂತ ಅಗತ್ಯವಾದ ಕನಿಷ್ಠ 3 ಹೆಕ್ಟೇರ್ ಭೂಮಿಯನ್ನು ಸ್ಮಶಾನಕ್ಕಾಗಿ ಮಂಜೂರು ಮಾಡಬೇಕು ಎಂದು ಈ ಹಿಂದೆಯೂ ಸಹ ಒತ್ತಾಯಿಸಿದ್ದರು. ಆದರೆ, ಜನರ ಮನವಿಗೆ ಸ್ಪಂದಿಸದ ಜಿಲ್ಲಾಡಳಿತದ ವಿರುದ್ಧ (ಶುಕ್ರವಾರ ಡಿಸೆಂಬರ್ 23) ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಗ್ರಾಮದಲ್ಲಿ ಮೃತಪಟ್ಟಿರುವ ವ್ಯಕ್ತಿಯ ಶವವನ್ನು ಅಂತ್ಯಸಂಸ್ಕಾರ ಮಾಡಲು ಜಾಗವಿಲ್ಲದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಜಯಪುರ ನಾಡಕಚೇರಿ ಎದುರು ಶವವನ್ನಿಟ್ಟು ಪ್ರತಿಭಟನೆ ನಡೆಸಿದ್ದಾರೆ. ನಂತರ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆ ನೀಡಿದರು. ಬಳಿಕ ಪ್ರತಿಭಟನೆ ವಾಪಸ್ ಪಡೆದು ಗ್ರಾಮದಲ್ಲೇ ಅಂತ್ಯಸಂಸ್ಕಾರವನ್ನು ನೆರವೇರಿಸಿದ್ದಾರೆ.

ಸಮಸ್ಯೆಗಳಿಗೆ ಸ್ಪಂದಿಸದ ಜನಪ್ರತಿನಿಧಿಗಳು
ತಮ್ಮ ಗ್ರಾಮದ ಸಮಸ್ಯೆಗಳಿಗೆ ಸ್ಪಂದಿಸದ ರಾಜಕಾರಣಿಗಳ ವಿರುದ್ಧ ಬೇಸತ್ತ ಗ್ರಾಮದ ಕಾಂಗ್ರೆಸ್, ಬಿಜೆಪಿ ಪಕ್ಷಗಳ ಸ್ಥಳೀಯ ಮುಖಂಡರು ಹಾಗೂ ಪದಾಧಿಕಾರಿಗಳು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿರುವುದಲ್ಲದೇ ಮುಂದಿನ ವಿಧಾನಸಭೆ ಚುನಾವಣೆಗೆ ಬಹಿಷ್ಕರಿಸಿ ಧರಣಿ ನಡೆಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ವರದಿಯಾಗಿತ್ತು.

ಚುನಾವಣೆ ಬಹಿಷ್ಕರಿಷ್ಕಾರದ ಎಚ್ಚರಿಕೆ
ಜಿಲ್ಲೆಯ ಕೊಪ್ಪ ತಾಲೂಕಿನ ಹಾಡು ಗ್ರಾಮದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಮುಖಂಡರು ತಮ್ಮ ಗ್ರಾಮದ ಮುಖ್ಯ ರಸ್ತೆಯಲ್ಲಿ ಅತಿವೃಷ್ಟಿಯಿಂದ ಹದಗೆಟ್ಟಿದ್ದ ರಸ್ತೆ ಹಾಗೂ ಸೇತುವೆಯ ದುರಸ್ತಿ ಕಾರ್ಯ ಮಾಡಲು, ಶೃಂಗೇರಿ ಕ್ಷೇತ್ರದ ಹಾಲಿ ಶಾಸಕರು ಹಾಗೂ ಆಡಳಿತ ಪಕ್ಷ ಸಂಪೂರ್ಣವಾಗಿ ನಿರ್ಲಕ್ಷ್ಯವಹಿಸಿದೆ ಎಂದು ಆರೋಪಿಸಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರು. ಗ್ರಾಮಸ್ಥರ ಸಮಸ್ಯೆಗಳಿಗೆ ಸ್ಪಂದಿಸದ ಈ ರಾಜಕೀಯ ಪಕ್ಷಗಳು ಚುನಾವಣೆ ಸಂದರ್ಭ ತಮ್ಮ ಗ್ರಾಮದಲ್ಲಿ ಸಭೆ, ಸಮಾರಂಭಗಳನ್ನು ನಡೆಸಲು ಬಿಡುವುದಿಲ್ಲ ಎಂದು ಗ್ರಾಮಸ್ಥರು ಕಿಡಿಕಾರಿದ್ದು, 2023ರ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆಯನ್ನೂ ನೀಡಿದ್ದರು.












Click it and Unblock the Notifications