ಹಾಸನ, ಚಿಕ್ಕಮಗಳೂರಿನಲ್ಲಿ ಲೋಕಾಯುಕ್ತ ದಾಳಿ
ಚಿಕ್ಕಮಗಳೂರು, ಜನವರಿ 31: ಚಿಕ್ಕಮಗಳೂರು ಮತ್ತು ಹಾಸನದಲ್ಲಿ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಸರ್ಕಾರಿ ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.
ಬುಧವಾರ ಲೋಕಾಯುಕ್ತ ಇನ್ಸ್‌ಸ್ಪೆಕ್ಟರ್ ಅನಿಲ್ ರಾಥೋಡ್ ನೇತೃತ್ವದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ವಾಣಿಜ್ಯ ಅಧಿಕಾರಿ ನೇತ್ರಾವತಿ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ.

ತರೀಕೆರೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಯಾಗಿರುವ ನೇತ್ರಾವತಿ ಅವರ ಕಡೂರು ಪಟ್ಟಣದಲ್ಲಿರುವ ಮನೆ ಮೇಲೆ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಆದಾಯಕ್ಕಿಂತ ಅಧಿಕ ಅಸ್ತಿ ಹೊಂದಿರುವ ಆರೋಪದಡಿ ದಾಳಿ ಮಾಡಲಾಗಿದೆ.
ಹಾಸನದಲ್ಲಿಯೂ ದಾಳಿ; ಹಾಸನದಲ್ಲಿ ಲೋಕಾಯುಕ್ತ ಎಸ್ಪಿ ಮಲ್ಲಿಕ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ತಿರುಮಲೇಶ್, ಇನ್ಸ್‌ಪೆಕ್ಟರ್ ಬಾಲು, ಶಿಲ್ಪಾ ನೇತೃತ್ವದ ತಂಡ ಹಾಸನದ ಆಹಾರ ನೀರಿಕ್ಷಕ ಜಗನ್ನಾಥ್ ನಿವಾಸ ಹಾಗೂ ಕಚೇರಿ ಮೇಲೆ ದಾಳಿ ಮಾಡಿದೆ.
ಲೋಕಾಯುಕ್ತ ಅಧಿಕಾರಿಗಳು ಕಚೇರಿ ಹಾಗೂ ನಿವಾಸದಲ್ಲಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಜಗನ್ನಾಥ್ ಸಹೋದರ ರಿಯಲ್ ಎಸ್ಟೇಟ್ ಉದ್ಯಮಿ ಕಿರಣ್ ನಿವಾಸದ ಮೇಲೂ ದಾಳಿ ಮಾಡಲಾಗಿದೆ.
ಕಿರಣ್ ನಿವಾಸ ಹಾಗೂ ಕಚೇರಿ ಮೇಲೂ ದಾಳಿ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆಯನ್ನು ನಡೆಸುತ್ತಿದ್ದಾರೆ. ಲೋಕಾಯುಕ್ತ ಅಧಿಕಾರಿಗಳ ದಾಳಿ ಕುರಿತು ಸಂಜೆಯ ವೇಳಗೆ ಅಂತಿಮ ಚಿತ್ರಣ ಲಭ್ಯವಾಗಲಿದೆ.
ಹಾಸನ, ಚಿಕ್ಕಮಗಳೂರು ಸೇರಿದಂತೆ ಬುಧವಾರ ಬೆಳಗ್ಗೆ ರಾಜ್ಯದ 10 ಜಿಲ್ಲೆಗಳ 40 ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಪರಿಶೀಲನೆ ಕೈಗೊಂಡಿದ್ದಾರೆ.












Click it and Unblock the Notifications