ಪುತ್ರನ ಸಾವಿನ ದುಃಖದಲ್ಲೂ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು
ಚಿಕ್ಕಮಗಳೂರು, ಡಿಸೆಂಬರ್ 12: ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಕುಟುಂಬಸ್ಥರು ಮಾನವೀಯತೆ ಮೆರೆದು ಹಲವು ಜನರ ಬದುಕಿಗೆ ಆಶಾಕಿರಣವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹೊರಟ್ಟಿ ಗ್ರಾಮದಲ್ಲಿ ನಡೆದಿದೆ.
ಮೂಡಿಗೆರೆ ತಾಲೂಕಿನ ಹೊರಟ್ಟಿ ಗ್ರಾಮದ ಧನ್ಯಕುಮಾರ್(37) ಎನ್ನುವವರ ತಲೆಗೆ ಇತ್ತೀಚೆಗೆ ಸಂಭವಿಸಿದ ಅಪಘಾತದಲ್ಲಿ ತೀವ್ರ ಪೆಟ್ಟಾಗಿತ್ತು. ಜೀವನ್ಮರಣ ಹೋರಾಟ ನಡೆಸುತ್ತಿದ್ದ ಅವರನ್ನು ಮಂಗಳೂರು ನಗರದ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಧನ್ಯಕುಮಾರ್ ಅವರ ಮೆದುಳು ನಿಷ್ಕ್ರೀಯಗೊಂಡಿದ್ದರಿಂದ ಅವರು ಬದುಕುಳಿಯುವ ಸಾಧ್ಯತೆ ಕಡಿಮೆ ಇರುವ ಬಗ್ಗೆ ವೈದ್ಯರು ಕುಟುಂಬಸ್ಥರಿಗೆ ತಿಳಿಸಿದ್ದಾರೆ.
ಅಲ್ಲದೇ ವೈದ್ಯರು ಧನ್ಯಕುಮಾರ್ ಅವರ ದೇಹದ ಅಂಗಾಂಗಗಳನ್ನು ದಾನ ಮಾಡಲು ಇರುವ ಅವಕಾಶಗಳ ಬಗ್ಗೆ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದರು. ವೈದ್ಯರ ಸಲಹೆಯಂತೆ ಕುಟುಂಬಸ್ಥರು ಅಂಗಾಂಗ ದಾನಕ್ಕೆ ಮುಂದಾಗಿದ್ದು, ಧನ್ಯಕುಮಾರ್ ಅವರ ಹೃದಯ, ಕಿಡ್ನಿ, ಲಿವರ್ ಎರಡು ಕಣ್ಣುಗಳು ಸೇರಿದಂತೆ ಬಹು ಅಂಗಾಂಗಗಳನ್ನು ದಾನ ಮಾಡಲಾಗಿದೆ.

ಧನ್ಯಕುಮಾರ್ ಕುಟುಂಬಸ್ಥರ ಈ ನಿರ್ಧಾರಕ್ಕೆ ಕಾಫಿನಾಡಿನ ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಮೃತ ಧನ್ಯಕುಮಾರ್ 4 ವರ್ಷದ ಮಗಳು, ಪತ್ನಿ ಹಾಗೂ ತಂದೆ, ತಾಯಿಯನ್ನು ಅಗಲಿದ್ದಾರೆ. ಮನೆಯ ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಅಪಘಾತದಲ್ಲಿ ತಲೆಯ ಭಾಗಕ್ಕೆ ತೀವ್ರ ಪೆಟ್ಟಾಗಿದ್ದು, ಮೆದುಳು ನಿಷ್ಕ್ರೀಯಗೊಂಡಿತ್ತು. ವೈದ್ಯರು ಎಷ್ಟೇ ಪ್ರಯತ್ನಿಸಿದರೂ ಧನ್ಯಕುಮಾರ್ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಧನ್ಯಕುಮಾರ್ ಮೆದುಳು ನಿಷ್ಕ್ರೀಯಗೊಂಡಿದ್ದು, ಉಳಿದ ಅಂಗಾಂಗಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದವು. ಈ ಹಿನ್ನೆಲೆಯಲ್ಲಿ ಅಂಗಾಂಗ ದಾನಕ್ಕೆ ಮುಂದಾಗಿದ್ದೇವೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.












Click it and Unblock the Notifications